ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Mysuru Fire accident: ಮೈಸೂರಿನ ಪಬ್‌ನಲ್ಲಿ ಬೆಂಕಿ ಅವಘಡ; ಇಬ್ಬರ ಸಾವು, ಏಳು ಮಂದಿಗೆ ಗಾಯ

FoxDen Restobar Fire Accident in mysuru: ಮೈಸೂರಿನ ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಪಬ್ ಸಂಪೂರ್ಣ ಸುಟ್ಟು ಹೋಗಿದೆ. ಅವಘಡದಲ್ಲಿ ಇಬ್ಬರು ಸಜೀವ ದಹನರಾಗಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರಿನ ಪಬ್‌ನಲ್ಲಿ ಬೆಂಕಿ ಅವಘಡ; ಇಬ್ಬರ ಸಾವು

ಮೈಸೂರಿನ ಪಬ್‌ನಲ್ಲಿ ಅಗ್ನಿ ಅವಘಡ. -

Prabhakara R
Prabhakara R Jun 15, 2026 5:54 PM

ಮೈಸೂರು: ಮೈಸೂರಿನ ರಿಂಗ್ ರಸ್ತೆ ಸಮೀಪದ ಫಾಕ್ಸ್ ಡೆನ್ ಪಬ್‌ನಲ್ಲಿ ನಡೆದ ಭೀಕರ ಅಗ್ನಿ ಅವಘಡದಲ್ಲಿ (FoxDen Restobar Fire Accident) ಇಬ್ಬರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಪಬ್ ಸಂಪೂರ್ಣ ಸುಟ್ಟು ಹೋಗಿದೆ.

ಅವಘಡದಲ್ಲಿ ಡಾರ್ಜಿಲಿಂಗ್ ಮೂಲದ ಸಾಹಿನ್ (26) ಮತ್ತು ನೇಪಾಳ ಮೂಲದ ಪ್ರಕಾಶ್ (24) ಎಂಬ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪಬ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ ನಡೆದಿದೆ ಎಂದು ತಿಳಿದುಬಂದಿದೆ.

ಏಕಾಏಕಿ ಸಂಭವಿಸಿದ ಘಟನೆಯಿಂದ ಪಬ್‌ನಲ್ಲಿದ್ದ ಗ್ರಾಹಕರು ಹಾಗೂ ಸಿಬ್ಬಂದಿ ದಿಕ್ಕುತೋಚದೆ ಕಂಗಾಲಾಗಿದ್ದಾರೆ. ಕಟ್ಟಡದ ಒಳಗೆ ಹೊಗೆ ತುಂಬಿಕೊಂಡು ಉಸಿರಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾದಾಗ, ಒಳಗಿದ್ದ ಕೆಲವರು ತಮ್ಮ ಪ್ರಾಣ ಉಳಿಸಿಕೊಳ್ಳಲು ಪಬ್‌ನ ಮೇಲಂತಸ್ತಿನಿಂದ ಕೆಳಗೆ ಜಿಗಿದು ಪಾರಾಗಲು ಯತ್ನಿಸಿದ್ದಾರೆ. ಈ ವೇಳೆ ಕೆಲವರಿಗೆ ಮೂಳೆ ಮುರಿತ ಹಾಗೂ ಗಂಭೀರ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಹಲವಾರು ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದರು. ಇಡೀ ಕಟ್ಟಡವನ್ನು ಆವರಿಸಿದ್ದ ಭಾರಿ ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಸದ್ಯ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದ್ದು, ಕಟ್ಟಡದ ಒಳಗಿದ್ದವರನ್ನು ಸುರಕ್ಷಿತವಾಗಿ ಹೊರತರಲಾಗಿದೆ.