POCSO case: ಮಂಗಳೂರು ಮತ್ತು ಮಂಡ್ಯದಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ
POCSO case: ಮಂಗಳೂರು ಹಾಗೂ ಮಂಡ್ಯದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ, ಬಾಲಕಿಯರನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಮಂಗಳೂರಿನಲ್ಲಿ 68 ವರ್ಷದ ಉದ್ಯಮಿಯೊಬ್ಬ ಈ ಕೃತ್ಯ ಎಸಗಿದ್ದು, ಇಬ್ಬರೂ ಆರೋಪಿಗಳ ಮೇಲೆ ಪೋಕ್ಸೋ ಕೇಸ್ ದಾಖಲಿಸಿ ಬಂಧಿಸಲಾಗಿದೆ.

ಸಾಂದರ್ಭಿಕ ಚಿತ್ರ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ (Physical Abuse) ಎಸಗಿದ ಎರಡು ಪ್ರತ್ಯೇಕ ಘಟನೆಗಳು ಮಂಗಳೂರು (Mangaluru) ಹಾಗೂ ಮಂಡ್ಯದಲ್ಲಿ (Mandya) ವರದಿಯಾಗಿವೆ. ಮಂಗಳೂರಿನಲ್ಲಿ 68 ವರ್ಷದ ಉದ್ಯಮಿಯೊಬ್ಬ ಈ ಹೀನ ಕೃತ್ಯ ಎಸಗಿ ಸಿಕ್ಕಿಬಿದ್ದಿದ್ದಾನೆ. ಎರಡೂ ಕಡೆ ಆರೋಪಿಗಳನ್ನು ಬಂಧಿಸಲಾಗಿದೆ. ಪೋಕ್ಸೋ ಕೇಸ್‌ಗಳನ್ನು (POCSO case) ದಾಖಲಿಸಲಾಗಿದೆ.
ಮಂಗಳೂರಿನಲ್ಲಿ, ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 68 ವರ್ಷದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಂತ್ರಸ್ತೆ ತಾಯಿ ನೀಡಿದ ದೂರು ಆಧರಿಸಿ ಮುಲ್ಕಿ ಠಾಣೆ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದಾರೆ.
ಉದ್ಯಮಿ ಕಳೆದ ಎರಡು ತಿಂಗಳಿಂದ ಉದ್ಯಮಿ ಬಾಲಕಿಯನ್ನು ತನ್ನ ಕಾರಿನಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ. ಈ ವೇಳೆ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮುಲ್ಕಿ ಪೊಲೀಸರು ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆದರೆ ಅಧಿಕ ರಕ್ತದೊತ್ತಡಕ್ಕೆ ಒಳಗಾದ ಬಂಧಿತ ಆರೋಪಿಯನ್ನು ಮೂಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಾಕೋಲೆಟ್ ಕೊಡಿಸುವುದಾಗಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಪ್ರವೀಣ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿ ಕುಟುಂಬ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಅದೇ ಫ್ಯಾಕ್ಟರಿಯಲ್ಲಿ ಆರೋಪಿ ಪ್ರವೀಣ್ ಕೂಡ ಕೆಲಸ ಮಾಡುತ್ತಿದ್ದ. ಸದ್ಯ BNS 65(2), 4,5(i), 5(m), 6 ಹಾಗೂ ಪೋಕ್ಸೋ ಅಡಿ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Physical Abuse: ಬಾಲಕಿಯರ ಮೇಲೆ ಇಬ್ಬರಿಂದ ನಿರಂತರ ಲೈಂಗಿಕ ದೌರ್ಜನ್ಯ-ಕಾಮುಕರು ಅರೆಸ್ಟ್