ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ನಟ ದರ್ಶನ್ ಬೆನ್ನುನೋವಿನ ಚಿಕಿತ್ಸೆಗೆ ಕೋರ್ಟ್ ಅಸ್ತು; ಸದ್ಯ ವಿಕ್ಟೋರಿಯಾದಲ್ಲಿ ಟ್ರೀಟ್‌ಮೆಂಟ್‌, ಖಾಸಗಿ ಆಸ್ಪತ್ರೆ ಬಗ್ಗೆ ನ. 30ಕ್ಕೆ ತೀರ್ಮಾನ!

Actor Darshan Health Update: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ತೀವ್ರ ಬೆನ್ನುನೋವಿನ ಚಿಕಿತ್ಸೆಗೆ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ತಾತ್ಕಾಲಿಕ ಅನುಮತಿ ನೀಡಿದೆ. ತಜ್ಞ ವೈದ್ಯರ ವರದಿ ಪರಿಶೀಲಿಸಿದ ನ್ಯಾಯಾಧೀಶರು, ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸೂಚಿಸಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರು ತೀವ್ರ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯವು ತಾತ್ಕಾಲಿಕ ಅನುಮತಿ ನೀಡಿದೆ. ಸದ್ಯಕ್ಕೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಕೋರ್ಟ್ ಸೂಚಿಸಿದ್ದು, ದರ್ಶನ್ ಅವರ ಇಚ್ಛೆಯಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಕುರಿತಾದ ಅಂತಿಮ ನಿರ್ಧಾರವನ್ನು ಮುಂದಿನ ಸೋಮವಾರಕ್ಕೆ (ನ.30) ಕಾಯ್ದಿರಿಸಿದೆ.

ದರ್ಶನ್‌ಗೆ ಆಸ್ಪತ್ರೆಯ ಚಿಕಿತ್ಸೆಯ ಅಗತ್ಯವಿದೆ

ಬೆನ್ನುನೋವಿನ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಸದ್ಯ ಜೈಲಿನಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯ ಕುರಿತು ಪರಿಶೀಲನೆ ನಡೆಸಿ, ಜೈಲಿನಿಂದ ಹೊರಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಅಗತ್ಯವಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ತಜ್ಞ ಅಧಿಕಾರಿಗೆ ಸೂಚಿಸಿದ್ದರು. ಅದರಂತೆ ತಜ್ಞ ವೈದ್ಯರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ದರ್ಶನ್ ಅವರಿಗೆ ಆಸ್ಪತ್ರೆಯ ಚಿಕಿತ್ಸೆಯ ಅಗತ್ಯವಿದೆ ಎಂದು ಉಲ್ಲೇಖಿಸಿದ್ದಾರೆ.

Actor Darshan: ಸವಲತ್ತು ಕೋರಿದ ದರ್ಶನ್‌ ಅರ್ಜಿ 9ಕ್ಕೆ ಮುಂದೂಡಿಕೆ, ʼಉಮೇಶ್‌ ರೆಡ್ಡಿಗೆ ಕೊಟ್ಟ ಸೌಲಭ್ಯ ದರ್ಶನ್‌ಗೆ ಏಕಿಲ್ಲ?ʼ ಎಂದ ವಕೀಲರು

3-4 ಬಾರಿ ಮಾತ್ರ ಫಿಸಿಯೋಥೆರಪಿ

ವಿಚಾರಣೆ ವೇಳೆ ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಹಷ್ಮತ್ ಪಾಷಾ, "ಜೈಲಿನಲ್ಲಿ ಕಳೆದ 20 ದಿನಗಳಲ್ಲಿ ಕೇವಲ ಮೂರ್ನಾಲ್ಕು ಬಾರಿ ಮಾತ್ರ ಫಿಸಿಯೋಥೆರಪಿ ನೀಡಲಾಗಿದೆ. ನೋವು ನಿವಾರಣೆಗಾಗಿ ಎಪಿಡ್ಯೂರಲ್ ಇಂಜೆಕ್ಷನ್ ನೀಡಲು ನಿರ್ದೇಶನ ನೀಡಬೇಕು. ಜೈಲಿನ ವಾತಾವರಣದಲ್ಲಿ ಈ ಆರೋಗ್ಯ ಸಮಸ್ಯೆಗಳನ್ನು ಬೇರೆಯವರ ಬಳಿ ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ಜೈಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು" ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಅಲ್ಲದೆ, ಬಿಜಿಎಸ್ ಅಥವಾ ಹಾಸ್ಮಟ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅವಕಾಶ ನೀಡುವಂತೆ ಕೋರಲಾಗಿತ್ತು.

ನವೆಂಬರ್ 30ಕ್ಕೆ ವಿಚಾರಣೆ ಮುಂದೂಡಿಕೆ

ಇದೇ ವೇಳೆ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಅರ್ಜಿಗೆ ಆಕ್ಷೇಪಣೆ ಹಾಗೂ ವಾದ ಮಂಡಿಸಲು ಪ್ರಾಸಿಕ್ಯೂಷನ್ ಕಾಲಾವಕಾಶ ಕೋರಿದ್ದು, ನವೆಂಬರ್ 28 ಅಥವಾ 30ಕ್ಕೆ ವಿಚಾರಣೆ ನಿಗದಿಪಡಿಸುವಂತೆ ಮನವಿ ಮಾಡಿತು. ದರ್ಶನ್ ಅವರ ಆರೋಗ್ಯ ಸ್ಥಿತಿ ಹಾಗೂ ತಜ್ಞರ ವರದಿಯನ್ನು ಪರಿಶೀಲಿಸಿದ ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು, "ನೋವು ಕಡಿಮೆಯಾಗಲು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು. ಅಗತ್ಯಬಿದ್ದರೆ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಬೇಕು" ಎಂದು ನಿರ್ದೇಶನ ನೀಡಿದರು. ಅಲ್ಲದೆ, ಖಾಸಗಿ ಆಸ್ಪತ್ರೆ ಚಿಕಿತ್ಸೆಯ ಕುರಿತಾದ ವಿಚಾರಣೆಯನ್ನು ನವೆಂಬರ್ 30ಕ್ಕೆ ಮುಂದೂಡಿದ್ದಾರೆ.