ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ನಟ ಧನ್ವೀರ್ ಗೌಡ ವಿರುದ್ಧದ ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ನಕಾರ; ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

ಅವಾಚ್ಯ ನಿಂದನೆ ಮತ್ತು ಜೀವ ಬೆದರಿಕೆ ಆರೋಪದಡಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸ್ಯಾಂಡಲ್‌ವುಡ್ ನಟ ಧನ್ವೀರ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠವು ಶನಿವಾರ ಈ ಮಹತ್ವದ ಆದೇಶ ಹೊರಡಿಸಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಅವಾಚ್ಯ ನಿಂದನೆ ಮತ್ತು ಜೀವ ಬೆದರಿಕೆ ಆರೋಪದಡಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸ್ಯಾಂಡಲ್‌ವುಡ್ ನಟ ಧನ್ವೀರ್ ಗೌಡ (Actor Dhanveer Gowda) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ವಜಾಗೊಳಿಸಿದೆ. ಇದರೊಂದಿಗೆ ಪ್ರಕರಣದ ಪೊಲೀಸ್ ತನಿಖೆಗೆ ಈ ಹಿಂದೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನೂ ನ್ಯಾಯಾಲಯ ತೆರವುಗೊಳಿಸಿದ್ದು, ನಟನಿಗೆ ಭಾರಿ ಹಿನ್ನಡೆಯಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠವು ಶನಿವಾರ ಈ ಮಹತ್ವದ ಆದೇಶ ಹೊರಡಿಸಿದೆ. ನ್ಯಾಯಾಲಯದ ಈ ತೀರ್ಪಿನಿಂದಾಗಿ ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಲಿದ್ದಾರೆ. ವಿಚಾರಣೆ ವೇಳೆ ನಟ ಧನ್ವೀರ್ ಗೌಡ ಪರ ವಕೀಲರು ವಾದ ಮಂಡಿಸಿ, "ಈ ಪ್ರಕರಣದಲ್ಲಿ ದೂರುದಾರರೇ ಧನ್ವೀರ್ ಅವರ ಮನೆಗೆ ಬಂದು ಅವರ ತಂದೆಯವರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ. ಧನ್ವೀರ್ ಅವರು ವಿಜಯಲಕ್ಷ್ಮಿ ದರ್ಶನ್ ಅವರನ್ನು ಯಾವುದೇ ರೀತಿಯಲ್ಲಿ ನಿಂದಿಸಿಲ್ಲ. ಉದ್ದೇಶಪೂರ್ವಕವಾಗಿ ಹಾಗೂ ತಪ್ಪಾಗಿ ನಮ್ಮ ಕಕ್ಷಿದಾರರ ವಿರುದ್ಧ ದೂರು ದಾಖಲಿಸಲಾಗಿದೆ. ಆದ್ದರಿಂದ ಎಫ್‌ಐಆರ್ ರದ್ದುಗೊಳಿಸಬೇಕು" ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ಪರ ವಕೀಲರು, "ಆರೋಪಿಯು ದೂರುದಾರ ನಾಗರಾಜ್ ಅವರಿಗೆ ಬೆದರಿಕೆ ಹಾಕಿರುವುದಕ್ಕೆ ಸಂಬಂಧಿಸಿದಂತೆ ಮಹತ್ವದ ಸಾಕ್ಷ್ಯಾಧಾರಗಳಿವೆ. ವಾಟ್ಸ್‌ಆ್ಯಪ್ ಸಂದೇಶಗಳು ಹಾಗೂ ಮೊಬೈಲ್ ಕರೆಯ ಸಂಭಾಷಣೆಗಳ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಪ್ರಕರಣವು ಗಂಭೀರ ಸ್ವರೂಪದ್ದಾಗಿದ್ದು, ಸತ್ಯಾಸತ್ಯತೆ ಹೊರಬರಲು ಪೊಲೀಸ್ ತನಿಖೆ ಅತ್ಯಗತ್ಯವಾಗಿದೆ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಿ ತನಿಖೆಗೆ ಅವಕಾಶ ನೀಡಬೇಕು" ಎಂದು ಪ್ರಬಲವಾಗಿ ಪ್ರತಿಪಾದಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು, ಸರ್ಕಾರದ ಪರ ವಕೀಲರು ಸಲ್ಲಿಸಿದ ಪ್ರಾಥಮಿಕ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ, ಈ ಹಂತದಲ್ಲಿ ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ತಿರಸ್ಕರಿಸಿತು.

ಧನ್ವೀರ್‌ಗೆ ಮತ್ತೊಂದು ಬಿಗ್‌ ಶಾಕ್‌ ಕೊಟ್ಟ ವಿಜಯಲಕ್ಷ್ಮೀ ದರ್ಶನ್‌; ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ದೂರು ದಾಖಲು!

ಏನಿದು ವಿವಾದ?

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ಸೇರಿದಂತೆ ಇತರರು ನೀಡಿದ ದೂರುಗಳ ಆಧಾರದ ಮೇಲೆ ನಟ ಧನ್ವೀರ್ ಗೌಡ ವಿರುದ್ಧ ಬೆಂಗಳೂರಿನ ಆರ್.ಆರ್. ನಗರ, ಬಸವೇಶ್ವರ ನಗರ ಹಾಗೂ ಬ್ಯಾಟರಾಯನಪುರ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಬೆದರಿಕೆ ಹಾಕಿದ ಆರೋಪವನ್ನು ಅವರ ಮೇಲೆ ಹೊರಿಸಲಾಗಿತ್ತು. ಈ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಧನ್ವೀರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ಪ್ರಾಥಮಿಕ ವಿಚಾರಣೆ ನಡೆಸಿದ್ದ ಹೈಕೋರ್ಟ್, ಕಳೆದ ನವೆಂಬರ್ 16 ರಂದು ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದೀಗ ಆ ತಡೆಯಾಜ್ಞೆ ತೆರವಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

Vishakha Bhat Heggar

View all posts by this author