ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ದೇಶಕ, ಹಿರಿಯ ಪತ್ರಕರ್ತ, ಲೇಖಕ ಎನ್.ಎಸ್. ಶಂಕರ್ ಅವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ಭಾನುವಾರ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಪತ್ರಕರ್ತರಾಗಿದ್ದ ಎನ್.ಎಸ್. ಶಂಕರ್ ಅವರು ಕನ್ನಡದ ಪ್ರಮುಖ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡು, ತಮ್ಮ ಚೊಚ್ಚಲ ಸಿನಿಮಾ ‘ಉಲ್ಟಾ ಪಲ್ಟಾ’ (1997) ಚಿತ್ರವನ್ನು ನಿರ್ದೇಶಿಸಿದ್ದರು. ವಿಲಿಯಂ ಶೇಕ್ಸ್‌ಪಿಯರ್ ಅವರ ಪ್ರಸಿದ್ಧ ಕೃತಿ ‘ದಿ ಕಾಮಿಡಿ ಆಫ್ ಎರರ್ಸ್’ ಆಧಾರಿತ ಈ ಹಾಸ್ಯ ಪ್ರಧಾನ ಚಿತ್ರ ಕನ್ನಡ ಸಿನೆಮಾ ಇತಿಹಾಸದಲ್ಲಿ ಒಂದು ವಿಶಿಷ್ಟ ಮೈಲಿಗಲ್ಲಾಗಿ ಉಳಿದಿದೆ. ತದನಂತರ ಅವರು ‘ಮಣಿ’ ಸೇರಿದಂತೆ ಕೆಲವು ಪ್ರಮುಖ ಚಿತ್ರಗಳನ್ನು ನಿರ್ದೇಶಿಸಿದ್ದರು. 'ರಾಂ. ಗ್ ನಂಬರ್' ಮತ್ತು 'ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್' ಮುಂತಾದ ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ.
ಪ್ರಜಾವಾಣಿ, ಮುಂಗಾರು, ಲಂಕೇಶ್ ಸೇರಿದಂತೆ ಹಲವು ಮಾಧ್ಯಮದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದರು. ಶಂಕರ್ ಅವರ ಪತ್ನಿ ಉಮಾರಾಣಿ ಅವರು ದೀರ್ಘಕಾಲದ ಅನಾರೋಗ್ಯದಿಂದಾಗಿ ಇತ್ತೀಚೆಗೆ ನಿಧನರಾಗಿದ್ದರು. ಪತ್ನಿಯ ಅಗಲಿಕೆಯ ಕೆಲವೇ ತಿಂಗಳುಗಳಲ್ಲಿ ಶಂಕರ್ ನಿಧನರಾಗಿದ್ದಾರೆ.
ನಿರ್ಮಾಪಕ ಭಾ.ಮಾ. ಹರೀಶ್ ಪುತ್ರ ಹೃದಯಾಘಾತದಿಂದ ನಿಧನ; ಟ್ರೆಕ್ಕಿಂಗ್ ವೇಳೆ ಕೊಡಚಾದ್ರಿಯಲ್ಲಿ ಅವಘಡ
ಬರಹಗಾರರಾಗಿದ್ದ ಎನ್.ಎಸ್. ಶಂಕರ್ ಅವರು ಕಲೆ, ಸಿನಿಮಾ, ರಾಜಕೀಯ ಮತ್ತು ಸಮಾಜದ ವಿವಿಧ ಆಯಾಮಗಳ ಕುರಿತು 20ಕ್ಕೂ ಹೆಚ್ಚು ಮಹತ್ವದ ಪುಸ್ತಕಗಳನ್ನು ಬರೆದಿದ್ದಾರೆ. ‘ಈಗ…’ ಎಂಬ ಮೂರು ಸಣ್ಣ ಕಥೆಗಳ ಆಂಥಾಲಜಿ ಸಿನಿಮಾ ಪ್ರೊಡಕ್ಷನ್ ಕೆಲಸಗಳಲ್ಲೂ ತೊಡಗಿಸಿಕೊಂಡಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜ್ಯೂರಿ ಮೆಂಬರ್ ಆಗಿಯೂ ಅವರು ಸೇವೆ ಸಲ್ಲಿಸಿದ್ದರು. 2024ರಲ್ಲಿ ಕರ್ನಾಟಕ ಸರ್ಕಾರ ಇವರಿಗೆ ಗೌರವಾನ್ವಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.