ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದರ್ಶನ್ ವಿರುದ್ಧ ಸಾಕ್ಷಿ ಹೇಳದಂತೆ ಪ್ರಾಣ ಬೆದರಿಕೆ; ಡಿ ಕಂಪನಿ ಗ್ಯಾಂಗ್‌ ಸದಸ್ಯರ ಬಂಧನ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ವಿರುದ್ಧ ಸಾಕ್ಷಿ ಹೇಳದಂತೆ ಸಾಕ್ಷಿಯೊಬ್ಬರಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿ ಬಳಗದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದರ್ಶನ್ ಅಭಿಮಾನಿ ಸಂಘದ ಸಕ್ರಿಯ ಸದಸ್ಯರಾದ ಪುನೀತ್, ಸುಹಾಸ್ ಮತ್ತು ವೇಣು ಎಂದು ಗುರುತಿಸಲಾಗಿದೆ.

ನಟ ದರ್ಶನ್‌ (ಸಂಗ್ರಹ ಚಿತ್ರ).

ಬೆಂಗಳೂರು, ಜು. 2: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಹೊರಗಡೆ ಅವರ ಫ್ಯಾನ್ಸ್‌ ಹುಚ್ಚಾಟ ಮುಂದುವರಿದಿದೆ. ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದರಲ್ಲಿ ದರ್ಶನ್‌ ವಿರುದ್ಧ ಸಾಕ್ಷಿಯೊಬ್ಬರಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿ ಬಳಗದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. 49ನೇ ಸಾಕ್ಷಿಯೊಬ್ಬರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಈ ಮೂವರನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತರನ್ನು ದರ್ಶನ್ ಅಭಿಮಾನಿ ಸಂಘದ ಸಕ್ರಿಯ ಸದಸ್ಯರಾದ ಪುನೀತ್, ಸುಹಾಸ್ ಮತ್ತು ವೇಣು ಎಂದು ಗುರುತಿಸಲಾಗಿದೆ.

ಬಂಧಿತ ಪುನೀತ್ ಸೋಶಿಯಲ್ ಮೀಡಿಯಾದಲ್ಲಿ ‘ಡಿ ಕಂಪನಿ’ ಫ್ಯಾನ್ ಪೇಜ್ ಅನ್ನು ನಿರ್ವಹಿಸುತ್ತಿದ್ದರೆ ಸುಹಾಸ್ ಮತ್ತು ವೇಣು ತುಮಕೂರಿನ ದರ್ಶನ್ ಅಭಿಮಾನಿ ಸಂಘದ ಸದಸ್ಯರು ಎಂದು ಮೂಲಗಳು ತಿಳಿಸಿವೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ 49ನೇ ಸಾಕ್ಷಿ ಸಂದೀಪ್‌ಗೆ ಸಾಕ್ಷಿ ಹೇಳದಂತೆ ಈ ಮೂವರು ಬೆದರಿಕೆ ಒಡ್ಡಿದ್ದರು. ಈ ಬಗ್ಗೆ ಸಂದೀಪ್‌ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸದ್ಯ ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಸಂದೀಪ್‌ ಅವರ ಜತೆ ಮಾತುಕತೆ ನಡೆಸುವ ನೆಪದಲ್ಲಿ ಯಾವುದೋ ಒಂದು ಜಾಗಕ್ಕೆ ಕರೆಸಿಕೊಂಡಿದ್ದ ಈ ಗ್ಯಾಂಗ್ ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ವಿವಿಧ ಕಡೆಗಳಲ್ಲಿ ಸುತ್ತಾಡಿಸಿದೆ. ಜತೆಗೆ ಕೋರ್ಟ್‌ನಲ್ಲಿ ದರ್ಶನ್ ವಿರುದ್ಧ ಸಾಕ್ಷಿ ಹೇಳದಂತೆ ತೀವ್ರ ಒತ್ತಡ ಹೇರಿಲಾಗಿತ್ತು ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್: ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇಕೆ ನಟ ದರ್ಶನ್?

ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋದ ನಟ ದರ್ಶನ್?

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ನಡೆದು ಸುಮಾರು 2 ವರ್ಷ ಕಳೆದಿದ್ದು ದರ್ಶನ್‌ ಜೈಲುವಾಸ ಮುಂದುವರಿದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮತ್ತು ವಿಚಾರಣೆಯ ವಿಳಂಬ ಗತಿಯನ್ನು ಉಲ್ಲೇಖಿಸಿ, ಇತ್ತೀಚೆಗೆ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಲು ಅನುಮತಿ ಕೋರಿ ದರ್ಶನ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮೇ 15ರಂದು ಸುಪ್ರೀಂ ಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಆದರೆ ಒಂದು ವರ್ಷದ ಒಳಗಾಗಿ ವಿಚಾರಣೆಯಲ್ಲಿ ಗಮನಾರ್ಹ ಪ್ರಗತಿ ಕಾಣದಿದ್ದರೆ ಮತ್ತೊಮ್ಮೆ ನ್ಯಾಯಾಲಯವನ್ನು ಸಂಪರ್ಕಿಸಲು ಅವಕಾಶ ನೀಡಿತ್ತು.

ಅದರ ಬೆನ್ನಲ್ಲೇ ದರ್ಶನ್ ಈ ಹೊಸ ಕಾನೂನು ಹೆಜ್ಜೆ ಇಟ್ಟಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆಗೆ ನಿಗದಿಪಡಿಸಲಾಗಿರುವ ಒಂದು ವರ್ಷದ ಗಡುವನ್ನು ಕಡಿತಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ದರ್ಶನ್‌ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ನಟ ದರ್ಶನ್‌ ಮತ್ತೆ ಯಾವಾಗ ಜಾಮೀನಿಗೆ ಅರ್ಜಿ ಸಲ್ಲಿಸಬಹುದು? ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

ಅರ್ಜಿಯಲ್ಲಿ ದರ್ಶನ್, ಪ್ರಕರಣದಲ್ಲಿ ಹೊಸ ಬೆಳವಣಿಗೆಗಳು ಉಂಟಾದರೆ ಅದಕ್ಕಿಂತ ಮುಂಚಿತವಾಗಿಯೇ ಜಾಮೀನು ಕೋರುವುದಕ್ಕೆ ಸುಪ್ರೀಂ ಕೋರ್ಟ್‌ನ ಹಳೆಯ ಆದೇಶವು ತಡೆಯಾಗಬಾರದು ಎಂದು ಸ್ಪಷ್ಟಪಡಿಸುವಂತೆ ಕೋರಿದ್ದರು. ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದರೆ, ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಎದುರಾದರೆ ಅಥವಾ ಇತರ ಯಾವುದೇ ಪ್ರಮುಖ ಸಂದರ್ಭಗಳು ಸೃಷ್ಟಿಯಾದರೆ ತಮಗೆ ಜಾಮೀನು ಕೋರಲು ಅವಕಾಶ ನೀಡಬೇಕು ಎಂದು ದರ್ಶನ್‌ ಅರ್ಜಿಯಲ್ಲಿ ತಿಳಿಸಿದ್ದರು.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author