ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎ1 ಆರೋಪಿ ಪವಿತ್ರಾ ಗೌಡ, ಇದೀಗ ಮಧ್ಯಂತರ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮುಂಬರುವ ಡಿಸೆಂಬರ್ ತಿಂಗಳಲ್ಲಿ ತಮ್ಮ ಸಹೋದರನ ವಿವಾಹ ನಿಗದಿಯಾಗಿರುವ ಹಿನ್ನೆಲೆಯಲ್ಲಿ, ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಡಿ.13ರಂದು ಸಹೋದರನ ಮದುವೆ
ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಇಂದು (ನ.24) ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಪವಿತ್ರಾ ಗೌಡ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿ, ಡಿಸೆಂಬರ್ 12 ಮತ್ತು 13ರಂದು ಅರ್ಜಿದಾರರ ಸಹೋದರನ ವಿವಾಹ ಸಮಾರಂಭ ನಡೆಯಲಿದೆ. ಕುಟುಂಬದ ಪ್ರಮುಖ ಕಾರ್ಯಕ್ರಮವಾಗಿರುವುದರಿಂದ ಈ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಮಂಜೂರು ಮಾಡಬೇಕು ಹಾಗೂ ಮದುವೆ ದಿನಾಂಕ ಹತ್ತಿರವಿರುವುದರಿಂದ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡಗೆ ಮತ್ತೆ ನಿರಾಸೆ; ಇಬ್ಬರು ಆರೋಪಿಗಳ ಜಾಮೀನು ತಿರಸ್ಕಾರ
ಡಿಸೆಂಬರ್ 4ಕ್ಕೆ ಅರ್ಜಿ ವಿಚಾರಣೆ
ವಕೀಲರ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠವು, ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ. ಅಲ್ಲದೆ, ಮಧ್ಯಂತರ ಜಾಮೀನು ಅರ್ಜಿಯ ಮುಂದಿನ ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ನಿಗದಿಪಡಿಸಿ ಆದೇಶ ಹೊರಡಿಸಿದೆ. ನಟ ದರ್ಶನ್ ಹಾಗೂ ಸಹಚರರಿಂದ ನಡೆದಿದೆ ಎನ್ನಲಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಪವಿತ್ರಾ ಗೌಡ ಅವರಿಗೆ ಈ ಹಿಂದೆ ಜಾಮೀನು ನಿರಾಕರಣೆಯಾಗಿದ್ದು, ಇದೀಗ ಸಹೋದರನ ಮದುವೆಯ ಕಾರಣ ನೀಡಿ ಮಧ್ಯಂತರ ಜಾಮೀನಿಗೆ ಪ್ರಯತ್ನ ನಡೆಸಿದ್ದಾರೆ.