ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ 10 ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಗುರುವಾರ (ಜನವರಿ 22) ಘೋರ ದುರಂತ ಸಂಭವಿಸಿದ್ದು, ಸೇನಾ ವಾಹನ 200 ಅಡಿ ಆಳದ ಕಂದಕಕ್ಕೆ ಉರುಳಿ 10 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ.

ಸೇನಾ ವಾಹನ ಕಂದಕಕ್ಕೆ ಉರುಳಿ 10 ಯೋಧರು ಹುತಾತ್ಮ

ಸಾಂದರ್ಭಿಕ ಚಿತ್ರ. -

Ramesh B
Ramesh B Jan 22, 2026 3:17 PM

ಶ್ರೀನಗರ, ಜ. 22: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಗುರುವಾರ (ಜನವರಿ 22) ಘೋರ ದುರಂತ ಸಂಭವಿಸಿದ್ದು, ಸೇನಾ ವಾಹನ 200 ಅಡಿ ಆಳದ ಕಂದಕಕ್ಕೆ ಉರುಳಿ 10 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರದ ದೋಡಾದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತದ ವೇಳೆ ಈ ಬುಲೆಟ್‌ ಪ್ರೂಫ್‌ ಸೇನಾ ವಾಹನ ಕ್ಯಾಸ್ಪಿರ್ ಕಾರ್ಯಾಚರಣೆಗೆ ತೆರಳುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ದೋಡಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ 10 ಮಂದಿ ವೀರ ಭಾರತೀಯ ಸೈನಿಕರು ಮೃತಪಟ್ಟಿರುವುದು ತೀವ್ರ ದುಃಖ ತಂದಿದೆ. ನಮ್ಮ ವೀರ ಸೈನಿಕರ ಅತ್ಯುತ್ತಮ ಸೇವೆ ಮತ್ತು ಸರ್ವೋಚ್ಚ ತ್ಯಾಗವನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ದುಃಖಿತ ಕುಟುಂಬಗಳಿಗೆ ಸಂತಾಪಗಳು" ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಎಕ್ಸ್‌ ಪೋಸ್ಟ್‌:



ಘಟನೆ ವಿವರ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ-ಚಂಬಾ ಅಂತಾರಾಜ್ಯ ರಸ್ತೆಯ ಭದೇರ್ವಾ ಪ್ರದೇಶದಲ್ಲಿ ಈ ಅವಘಡ ನಡೆದಿದೆ. ಅಪಘಾತದ ವೇಳೆ ಒಟ್ಟು 17 ಸೈನಿಕರು ವಾಹನದಲ್ಲಿದ್ದರು. ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಚರಣೆ ಆರಂಭಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ಮೃತರ ಸಂಖ್ಯೆ ಹೆಚ್ಚಾಗುವ ಆತಂಕವಿದೆ ಎಂದು ವರದಿ ತಿಳಿಸಿದೆ.

ʼʼತೀವ್ರವಾಗಿ ಗಾಯಗೊಂಡ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಪೈಕಿ ಮೂವರನ್ನು ಹೆಲಿಕಾಫ್ಟರ್‌ ಮೂಲಕ ಉಧಂಪುರ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆʼʼ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ರಸ್ತೆ ಅಪಘಾತದ ದೃಶ್ಯ:



ಆಘಾತ ವ್ಯಕ್ತಪಡಿಸಿದ ರಾಜನಾಥ್ ಸಿಂಗ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. "ದೋಡಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಸೇನೆಯ 10 ಮಂದಿ ವೀರ ಸೈನಿಕರನ್ನು ಕಳೆದುಕೊಂಡಿದ್ದೇವೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡ ಸೈನಿಕರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಉತ್ತಮ ಚಿಕಿತ್ಸೆ ಒದಗಿಸಲು ನಿರ್ದೇಶನಗಳನ್ನು ನೀಡಲಾಗಿದೆ. ಈ ಕಷ್ಟದ ಸಮಯದಲ್ಲಿ ರಾಷ್ಟ್ರವು ನಮ್ಮ ಸಶಸ್ತ್ರ ಪಡೆಗಳು ಮತ್ತು ಅವರ ಕುಟುಂಬಗಳೊಂದಿಗೆ ನಿಂತಿದೆ" ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಜಮ್ಮು-ಕಾಶ್ಮೀರದ ಉಧಂಪುರ್‌ನಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ; ಪೊಲೀಸ್‌ ಹುತಾತ್ಮ

ಸಂತಾಪ ಸೂಚಿಸಿದ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲ

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲ ಕೂಡ ಸಂತಾಪ ಸೂಚಿಸಿದ್ದಾರೆ. ʼʼಸೇನಾ ವಾಹನ ಕಂದಕಕ್ಕೆ ಉರುಳಿ ಮೃತಪಟ್ಟ ಸೈನಿಕರ ಕುಟುಂಬಕ್ಕೆ ನನ್ನ ಆಳವಾದ ಸಂತಾಪಗಳು. ಗಾಯಗೊಂಡವರು ವೇಗವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆʼʼ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರತಿಕೂಲ ಹವಾಮಾನವೇ ಕಾರಣ?

ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರತಿಕೂಲ ಹವಾಮಾನ ಮತ್ತು ಕಳಪೆ ಗೋಚರತೆಯ ಕಾರಣದಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಂದಕ್ಕಕ್ಕೆ ಉರುಳಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.