ದೆಹಲಿ, ಜು. 21: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಸೋಮವಾರ (ಜುಲೈ 20) ಹಮ್ಮಿಕೊಂಡಿದ್ದ ʼಸಂಸತ್ ಚಲೋʼ (Sansad Chalo) ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, 20 ವರ್ಷದ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ʼʼಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಗಾಯಗೊಂಡ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ದೆಹಲಿಯ ರಾಮ್ ಮನೋಹರ್ ಲೋಹಿಯಾ (RML) ಆಸ್ಪತ್ರೆಗೆ ದಾಖಲಿಸಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಸೋಮವಾರ ನಡೆದ ಪ್ರತಿಭಟನೆ ವೇಳೆ ಸುಮಾರು 90 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮಂಗಳವಾರವೂ ಪ್ರತಿಭಟನೆ ಮುಂದುವರಿದಿದೆ.
ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಸಮೇತ ಬಿದ್ದ ಹಿನ್ನೆಲೆಯಲ್ಲಿ ಮಹಿಳೆ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಸಣ್ಣ ಪುಟ್ಟ ಗಾಯಗೊಂಡ 79 ವಿದ್ಯಾರ್ಥಿಗಳನ್ನು ಡಿಸ್‌ಚಾರ್ಜ್ ಮಾಡಲಾಗಿದೆ.
ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ:
ʼಸಂಸದ್ ಚಲೋʼ
ಸಿಜೆಪಿ ನೇತೃತ್ವದಲ್ಲಿ ನೆರೆದ ಸಾವಿರಾರು ವಿದ್ಯಾರ್ಥಿಗಳು ಸೋಮವಾರ ಜಂತರ್ ಮಂತರ್‌ನಿಂದ ಸಂಸತ್‌ಗೆ ಮೆರವಣಿ ನಡೆಸಿದ್ದರು. ನೀಟ್ ಅಕ್ರಮದ ಹಿನ್ನೆಲೆಯಲ್ಲಿ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಬೇಕು ಎನ್ನುವುದು ಹೋರಾಟಗಾರರ ಮುಖ್ಯ ಬೇಡಿಕೆಯಾಗಿತ್ತು. ಆರಂಭದಲ್ಲಿ ಶಾಂತಿಯುತ ಪ್ರತಿಭಟನೆ ಹೆಸರಿನಲ್ಲಿ ಆರಂಭವಾದ ಹೋರಾಟ ಬಳಿಕ ಹಿಂಸಾಚಾರಕ್ಕೆ ತಿರುಗಿತು. ಕೆಲವು ಪ್ರತಿಭಟನಾಕಾರರು ಪೊಲೀಸರ ಸೂಚನೆ ಮೀರಿ ಬ್ಯಾರಿಕೇಡ್ ಕಿತ್ತು ನುಗ್ಗಲು ಯತ್ನಿಸಿದಾಗ ಪರಿಸ್ಥಿತಿ ಕೈ ಮೀರಿತು. ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿ, ಅಶ್ರವಾಯು ಬಳಬೇಕಾಯ್ತು. ಈ ಘರ್ಷಣೆಯಲ್ಲಿ 118 ಪೊಲೀಸ್ ಸಿಬ್ಬಂದಿ ಗಾಯಗೊಂಡರೆ, 20 ಪೊಲೀಸ್ ವಾಹನಗಳು ಜಖಂಗೊಂಡವು.
ʼʼದಾಳಿಗೊಳಗಾದ ವಿದ್ಯಾರ್ಥಿಗಳ ಬಳಿ ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಕೋರಿಲ್ಲʼʼ: ದೆಹಲಿ ರಾಹುಲ್ ಗಾಂಧಿ
ಕೇಂದ್ರ ಸಚಿವ ಜೆ.ಪಿ. ನಡ್ಡಾ ಮಂಗಳವಾರ ಗಾಯಾಳುಗಳು ದಾಖಲಾಗಿರುವ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಮತ್ತು ಲೇಡಿ ಹಾರ್ಡಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಜತೆಗೆ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.
ಸಿಜೆಪಿ ಮುಖಂಡರನ್ನು ಭೇಟಿಯಾಗಿದ್ದ ನಡ್ಡಾ
ಸೋಮವಾರ ಸಿಜೆಪಿ ನಾಯಕರು ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೆ ಈ ಮಾತುಕತೆ ಯಶಸ್ವಿಯಾಗಲಿಲ್ಲ. ಸೌಹಾರ್ದಯುತ ವಾತಾವರಣದಲ್ಲಿ ನಡೆದ ಈ ಚರ್ಚೆ ವೇಳೆ ಸಚಿವರು ಪ್ರತಿಭಟನೆ ಕೈ ಬಿಡುವಂತೆ ಮನವೊಲಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಇತ್ತ ಸಂಸತ್ ಕಲಾಪದಲ್ಲೂ ಈ ವಿಷಯ ಪ್ರಸ್ತಾವಿಸಿದ ವಿಪಕ್ಷ ಕೇಂದ್ರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿತು. ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಪ್ರಧಾನಿ ನಿವಾಸದ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು
ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿದರು. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತಿತರ ನಾಯಕರು ಆಗಮಿಸಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆಗಮಿಸಿ ರಾಹುಲ್ ಗಾಂಧಿ ಅವರ ಮನವೊಲಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ.
ದೇಶದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.