ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chirag Paswan: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಚಿರಾಗ್‌ ಪಾಸ್ವಾನ್‌ ಕಣಕ್ಕಿಳಿಯುವುದು ಖಚಿತ; ಅಧಿಕೃತ ಘೋಷಣೆ

Bihar Assembly Polls: ಕೇಂದ್ರ ಸಚಿವ, ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌ (Chirag Paswan) ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ಜತೆ ಮೈತ್ರಿ ಮಾಡಿಕೊಂಡು ತಮ್ಮ ಪಕ್ಷ ಸ್ಪರ್ಧಿಸಲಿದೆ ಎಂದರು.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಚಿರಾಗ್‌ ಕಣಕ್ಕಿಳಿಯುವುದು ಖಚಿತ

ಚಿರಾಗ್‌ ಪಾಸ್ವಾನ್‌.

Profile Ramesh B Jul 6, 2025 10:49 PM

ಪಾಟ್ನಾ: ಕೇಂದ್ರ ಸಚಿವ, ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) (Lok Janshakti Party (Ram Vilas) ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌ (Chirag Paswan) ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ (Bihar Assembly Polls) ಸ್ಪರ್ಧಿಸುವುದಾಗಿ ಘೋಷಿಸಿದರು. ಬಿಹಾರದ ಸಾರನ್‌ ಜಿಲ್ಲೆಯಲ್ಲಿ ಭಾನುವಾರ (ಜು. 6) ನಡೆದ ರ‍್ಯಾಲಿಯಲ್ಲಿ ಅವರು ಈ ಬಗ್ಗೆ ಅಧಿಕೃತವಾಗಿ ಪ್ರಕಟಿಸಿದರು. ʼʼಹೌದು, ನಾನು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುತ್ತೇನೆʼʼ ಎಂದು ತಿಳಿಸಿದ್ದಾರೆ. ಇದೇ ವೇಳೆ ಅವರು ಬಿಹಾರದ 243 ಕ್ಷೇತ್ರಗಳಲ್ಲಿಯೂ ಪಕ್ಷದ ಗೆಲುವುಗಾಗಿ ಶ್ರಮಿಸುವಂತೆ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಈ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ಜತೆ ಮೈತ್ರಿ ಮಾಡಿಕೊಂಡು ತಮ್ಮ ಪಕ್ಷ ಸ್ಪರ್ಧಿಸಲಿದೆ ಎಂದರು.

2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಚಿರಾಗ್‌ ಪಾಸ್ವಾನ್‌ ನೇತೃತ್ವದ ಎಲ್‌ಜೆಪಿ 137 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಆದರೆ ಮತದಾರರ ಮೇಲೆ ಯಾವುದೇ ಪರಿಣಾಮ ಬೀರಲು ಸಾಧ್ಯವಾಗಿರಲಿಲ್ಲ. ಮತಿಹನಿಯಲ್ಲಿ ಮಾತ್ರ ಗೆಲುವು ಸಾಧಿಸಿತ್ತು.



ಈ ಸುದ್ದಿಯನ್ನೂ ಓದಿ: PM Modi: ಆಪರೇಷನ್ ಸಿಂದೂರ್ ನೃತ್ಯದೊಂದಿಗೆ ಪ್ರಧಾನಿ ಮೋದಿಗೆ ಗ್ರ್ಯಾಂಡ್‌ ವೆಲ್‌ಕಮ್‌

ಸಂಸದ ಚಿರಾಗ್ ಪಾಸ್ವಾನ್ ಸದ್ಯ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಕೇಂದ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜನತಾದಳ ಯುನೈಟೆಡ್ (JDU) ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ (TDP) ಕೂಡ ಈ ಸರ್ಕಾರದ ಭಾಗವಾಗಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಹಾಜಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಚಿರಾಗ್‌ ಪಾಸ್ವಾನ್ ಆರ್‌ಜೆಡಿಯ ಶಿವಚಂದ್ರ ರಾಮ್ ಅವರನ್ನು 1,70,000ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದರು.

ಸಾರನ್‌ನಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಪಾಸ್ವಾನ್, ನಾನು ಜೀವಂತವಾಗಿರುವವರೆಗೆ ಹಿಂದುಳಿದ ಜಾತಿಗಳಿಗೆ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ನೀಡಿರುವ ಮೀಸಲಾತಿಯನ್ನು ತೆಗೆದು ಹಾಕಲು ಅಥವಾ ಸಂವಿಧಾನಕ್ಕೆ ಬೆದರಿಕೆ ಹಾಕಲು ಬಿಡುವುದಿಲ್ಲ ಎಂದಿದ್ದಾರೆ. "ನನ್ನ ತಂದೆ ರಾಮ್ ವಿಲಾಸ್ ಪಾಸ್ವಾನ್ ಅವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ; ನಾನು ಜೀವಂತವಾಗಿರುವವರೆಗೆ ಯಾರೂ ಮೀಸಲಾತಿ ಅಥವಾ ಸಂವಿಧಾನಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ" ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿವೆ ಮತ್ತು ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬಂದರೆ, ಕೆಳಜಾತಿಗಳಿಗೆ ನೀಡಿರುವ ಮೀಸಲಾತಿಯನ್ನು ಕೊನೆಗೊಳಿಸಲಿದೆ ಎಂದು ವಿಪಕ್ಷಗಳ ಒಕ್ಕೂಟ ಇಂಡಿಯಾ ಬ್ಲಾಕ್‌ನ ಭಾಗವಾಗಿರುವ ಆರ್‌ಜೆಡಿ ಮತ್ತು ಕಾಂಗ್ರೆಸ್ ಆರೋಪಿಸುತ್ತಲೇ ಬಂದಿವೆ. "ಆರ್‌ಜೆಡಿಯ ಮಿತ್ರಪಕ್ಷ ಕಾಂಗ್ರೆಸ್ ಯಾವಾಗಲೂ ಸಂವಿಧಾನಕ್ಕೆ ಬೆದರಿಕೆ ಹಾಕುತ್ತಲೇ ಬಂದಿದೆ. ಕಾಂಗ್ರೆಸ್‌ 1975ರಲ್ಲಿ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ಸಂವಿಧಾನದ ಧಕ್ಕೆ ತಂದಿದೆ" ಎಂದು ಪಾಸ್ವಾನ್ ಹೇಳಿದರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯಲ್ಲಿ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ಸೇರಿಸಿದ್ದನ್ನು ಉಲ್ಲೇಖಿಸಿ ಅವರು ಅದೇ ಕಾಂಗ್ರೆಸ್ ಪೀಠಿಕೆಯಲ್ಲಿ ಬದಲಾವಣೆಗಳನ್ನು ಮಾಡಿ ಸಂವಿಧಾನವನ್ನು ತಿರುಚಿದೆ ಎಂದು ಆರೋಪಿಸಿದರು.

ಈ ಮಧ್ಯೆ ಚಿರಾಗ್ ಪಾಸ್ವಾನ್ ಎನ್‌ಡಿಎ ಮೈತ್ರಿಕೂಟದ ಪಾಲುದಾರ ಜೆಡಿಯು ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದರು. ಇತ್ತೀಚೆಗೆ ಪಾಟ್ನಾದಲ್ಲಿ ಉದ್ಯಮಿ ಗೋಪಾಲ್ ಖೇಮ್ಕಾ ಅವರ ಹತ್ಯೆಯನ್ನು ಪ್ರಸ್ತಾಪಿಸಿ, ನಿತೀಶ್ ಕುಮಾರ್ ನೇತೃತ್ವದ ರಾಜ್ಯ ಸರ್ಕಾರವನ್ನು ಪರೋಕ್ಷವಾಗಿ ಟೀಕಿಸಿದರು. ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ದೂರಿದರು.