ದೆಹಲಿ ಪ್ರತಿಭಟನೆ: CJP ನಾಯಕ ಅಭಿಜೀತ್ ದೀಪ್ಕೆ ಬಂಧನ; AISA ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ
ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ದಿಲ್ಲಿ ಪೊಲೀಸರು ಬಂಧಿಸಿದ್ದು, ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಅವರನ್ನು ಮುಂಜಾಗ್ರತಾ ವಶದಿಂದ ಬಿಡುಗಡೆ ಮಾಡಿದ್ದಾರೆ.
ಸಂಗ್ರಹ ಚಿತ್ರ -
ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ದಿಲ್ಲಿ ಪೊಲೀಸರು ಬಂಧಿಸಿದ್ದು, ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಅವರನ್ನು ಮುಂಜಾಗ್ರತಾ ವಶದಿಂದ ಬಿಡುಗಡೆ ಮಾಡಿದ್ದಾರೆ. ಹೊಸದಿಲ್ಲಿಯ ಕನ್ನಾಟ್ ಪ್ಲೇಸ್ನಲ್ಲಿ ಆಯೋಜಿಸಲಾಗಿದ್ದ 'ಲೇಹ್ರಾ ದೋ ತಿರಂಗಾ' (ತ್ರಿವರ್ಣ ಧ್ವಜ ಹಾರಿಸಿ) ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ಸಂಜೆ ಇಬ್ಬರನ್ನೂ ವಶಕ್ಕೆ ಪಡೆಯಲಾಗಿತ್ತು.
ಭಾರತದ ಚುನಾವಣಾ ಆಯೋಗದ ಸ್ವಾಯತ್ತತೆಯನ್ನು ರಕ್ಷಿಸಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ CJP ಯುವ ಜನಾಂಗದ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಕನ್ನಾಟ್ ಪ್ಲೇಸ್ ಪ್ರತಿಭಟನಾ ವಲಯವಲ್ಲದ ಕಾರಣ, ಅಲ್ಲಿ ಸಾರ್ವಜನಿಕರು ಮತ್ತು ರಾಜಕೀಯ ಕಾರ್ಯಕರ್ತರು ಒಟ್ಟುಗೂಡಲು ಪೊಲೀಸರು ಅನುಮತಿ ನಿರಾಕರಿಸಿದ್ದರು.
ಪೊಲೀಸ್ ಆದೇಶವನ್ನು ಉಲ್ಲಂಘಿಸಿ ಮೆರವಣಿಗೆ ನಡೆಸಲು ಮುಂದಾದಾಗ ಶಾಂತಿ ಭಂಗದ ಆತಂಕ ಎದುರಾಯಿತು. ಈ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಯ ಸೆಕ್ಷನ್ 126 ಮತ್ತು 170ರ ಅಡಿಯಲ್ಲಿ ಅಭಿಜೀತ್ ದೀಪ್ಕೆ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಲಾಗಿದೆ. ಇವರನ್ನು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ದಿಲ್ಲಿ ಪೊಲೀಸ್ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಮಂಡಿ ಹೌಸ್ ಬಳಿ ವಶಕ್ಕೆ ಪಡೆಯಲಾಗಿದ್ದ ಎಐಎಸ್ಎ (AISA) ಮುಖ್ಯಸ್ಥೆ ನೇಹಾ ಬೋರಾ ಅವರನ್ನು ಶನಿವಾರ ಮುಂಜಾನೆ ಬಿಡುಗಡೆ ಮಾಡಲಾಗಿದೆ. ದಿಲ್ಲಿ ಪೊಲೀಸ್ ಕಾಯಿದೆಯ ಸೆಕ್ಷನ್ 65ರ ಅಡಿಯಲ್ಲಿ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಸಂಸ್ಥಾಪಕ ಅಭಿಜೀತ್ ದೀಪ್ಕೆ ಹಾಗೂ ಹಿರಿಯ ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಸದ್ಯ ಪೊಲೀಸ್ ವಶದಲ್ಲಿ ಇರುವುದರಿಂದ, ಪ್ರತಿಭಟನೆಯನ್ನು ಮುನ್ನಡೆಸಲು CJP ತನ್ನ ರಾಷ್ಟ್ರೀಯ ಸಾಂಘಿಕ ಉಸ್ತುವಾರಿ ಅಜಿಂಕ್ಯ ಶಿಂಧೆ ಅವರನ್ನು ನೂತನ ಮುಖ್ಯಸ್ಥರನ್ನಾಗಿ ನೇಮಿಸಿದೆ.
ʼಲೆಹ್ರಾ ದೋ ತಿರಂಗಾʼ ಪ್ರತಿಭಟನಾ ಮೆರವಣಿಗೆಗೆ ಮುನ್ನವೇ ದೆಹಲಿ ಪೊಲೀಸರಿಂದ ಅಭಿಜಿತ್ ದೀಪ್ಕೆ ಬಂಧನ
ಅಭಿಜೀತ್ ದೀಪ್ಕೆ ಸೇರಿದಂತೆ ಪಕ್ಷದ ನಾಯಕರನ್ನು ಅಕ್ರಮವಾಗಿ ಮತ್ತು ಅಪರಿಚಿತ ಸ್ಥಳದಲ್ಲಿ ಇರಿಸಲಾಗಿದೆ ಎಂದು ಆರೋಪಿಸಿರುವ CJP ಕಾನೂನು ಘಟಕ, ತಕ್ಷಣವೇ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಮತ್ತು ಅವರಿಗೆ ವಕೀಲರ ಭೇಟಿಗೆ ಅವಕಾಶ ನೀಡುವಂತೆ ಕೋರಿ ಕಾನೂನು ಕ್ರಮ ಜರುಗಿಸಲು ಸಿದ್ಧತೆ ನಡೆಸಿದೆ.