ಮೇಕೆದಾಟು ಅಣೆಕಟ್ಟು ವಿವಾದ: ಡಿಕೆ ಶಿವಕುಮಾರ್ ವಿರುದ್ಧ ತಮಿಳುನಾಡು ಕಾಂಗ್ರೆಸ್ ಸಂಸದ ಕಿಡಿ; 'ಒಂದು ಇಟ್ಟಿಗೆಯನ್ನೂ ಹಾಕಲು ಬಿಡುವುದಿಲ್ಲ' ಎಂದು ಎಚ್ಚರಿಕೆ
ಮೇಕೆದಾಟು ಅಣೆಕಟ್ಟು ಯೋಜನೆಯ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡಿನ ಮಧ್ಯೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಕೋರಿದ ಬೆನ್ನಲ್ಲೇ, ತಮಿಳುನಾಡಿನ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಅವರು ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕ
ಸಂಗ್ರಹ ಚಿತ್ರ -
ಚೆನ್ನೈ: ಮೇಕೆದಾಟು ಅಣೆಕಟ್ಟು (Mekedatu Dam) ಯೋಜನೆಯ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡಿನ ಮಧ್ಯೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM Dk Shivakumar) ಅವರು ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಕೋರಿದ ಬೆನ್ನಲ್ಲೇ, ತಮಿಳುನಾಡಿನ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಅವರು ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕಳೆದ ಶುಕ್ರವಾರ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಮಾತನಾಡಿದ್ದ ಸಿಎಂ ಡಿ.ಕೆ. ಶಿವಕುಮಾರ್, "ಮೇಕೆದಾಟು ಅಣೆಕಟ್ಟು ನಿರ್ಮಾಣವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಮತ್ತು ಕೇಂದ್ರ ಸರ್ಕಾರ ಇದಕ್ಕೆ ಅಂತಿಮ ಅನುಮತಿ ನೀಡಬೇಕು" ಎಂದು ಮನವಿ ಮಾಡಿದ್ದರು.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಂಸದ ಮಾಣಿಕಂ ಟ್ಯಾಗೋರ್ , "ಸಿಎಂ ಡಿ.ಕೆ. ಶಿವಕುಮಾರ್ ಅವರ ಈ ಹೇಳಿಕೆಯು ಸುಪ್ರೀಂ ಕೋರ್ಟ್ ತೀರ್ಪು ಮತ್ತು ಕಾವೇರಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದೆ" ಎಂದು ಕಿಡಿಕಾರಿದ್ದಾರೆ. ಅಲ್ಲದೆ, ಕರ್ನಾಟಕದ ಈ ನಿಲುವು ತಮಿಳುನಾಡಿನ ಡೆಲ್ಟಾ ಜಿಲ್ಲೆಗಳ ರೈತರ ಜೀವನೋಪಾಯವನ್ನು ನಾಶಪಡಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.
ತಮಿಳುನಾಡಿನ ಒಪ್ಪಿಗೆಯಿಲ್ಲದೆ ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬಾರದು ಎಂದು ಟ್ಯಾಗೋರ್ ಒತ್ತಾಯಿಸಿದ್ದಾರೆ. "ಮೇಕೆದಾಟು ಅಣೆಕಟ್ಟಿಗೆ ಕರ್ನಾಟಕವು ಒಂದೇ ಒಂದು ಇಟ್ಟಿಗೆಯನ್ನೂ ಹಾಕದಂತೆ ತಡೆಯುವುದು ಕೇಂದ್ರದ ಮೋದಿ ಸರ್ಕಾರದ ಕರ್ತವ್ಯವಾಗಿದೆ. ತಮಿಳುನಾಡು ಕಾಂಗ್ರೆಸ್ ಪರವಾಗಿ ನಾವು ಈ ಯೋಜನೆ ಜಾರಿಯಾಗಲು ಎಂದಿಗೂ ಬಿಡುವುದಿಲ್ಲ ಮತ್ತು ನಮ್ಮ ರಾಜ್ಯದ ಹಕ್ಕುಗಳನ್ನು ರಕ್ಷಿಸಲು ಯಾವುದೇ ಹಂತದವರೆಗೂ ಹೋರಾಡುತ್ತೇವೆ" ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಮೇಕೆದಾಟು ನಮ್ಮ ಹಕ್ಕು, ಅಣೆಕಟ್ಟು ಕಟ್ಟಿ ತಮಿಳುನಾಡಿಗೂ ನೀರು ಕೊಡುತ್ತೇವೆ: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರಿನ ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಮತ್ತು ಬರಗಾಲದ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಲು ನೆರವಾಗುವ ಉದ್ದೇಶದಿಂದ ಕನಕಪುರದ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಕರ್ನಾಟಕ ಸರ್ಕಾರ ಉದ್ದೇಶಿಸಿದೆ. ಆದರೆ, ಇದರಿಂದ ತಮ್ಮ ರಾಜ್ಯದ ಪಾಲಿನ ನೀರಿಗೆ ಕುತ್ತು ಬರಲಿದೆ ಎಂದು ತಮಿಳುನಾಡು ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿದೆ.