ನವದೆಹಲಿ: ಉನ್ನಾವ್ ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್, (Kuldeep Sengar) ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲಿ ತನಗೆ ವಿಧಿಸಲಾಗಿರುವ 10 ವರ್ಷಗಳ ಜೈಲು ಶಿಕ್ಷೆಯನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ (Delhi High Court) ಸೋಮವಾರ ತಿರಸ್ಕರಿಸಿದೆ. 2017 ರ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕನ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದ ವಾರಗಳ ನಂತರ ಈ ತಿರಸ್ಕಾರ ಬಂದಿದೆ.
ಇಂದು ನ್ಯಾಯಾಲಯದ ತೀರ್ಪನ್ನು ಓದಿದ ನ್ಯಾಯಮೂರ್ತಿ ರವೀಂದರ್ ದುಡೇಜಾ, ಸೆಂಗಾರ್ ತನ್ನ ಅಪರಾಧ ಸಾಬೀತನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಸೂಕ್ತ ಸಮಯದಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ. 2019 ರ ವಿಚಾರಣಾ ನ್ಯಾಯಾಲಯದ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುತ್ತಿರುವುದರಿಂದ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಸೆಂಗಾರ್ ಮನವಿ ಮಾಡಿದ್ದರು.
ಮಾರ್ಚ್ 13, 2020 ರಂದು, ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯವು ಸೆಂಗಾರ್‌ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ. ದಂಡ ವಿಧಿಸಿತ್ತು. ಕಸ್ಟಡಿ ಸಾವಿನಲ್ಲಿ ಭಾಗಿಯಾಗಿದ್ದಕ್ಕಾಗಿ ಸೆಂಗಾರ್ ಅವರ ಸಹೋದರ ಅತುಲ್ ಸಿಂಗ್ ಸೆಂಗಾರ್ ಮತ್ತು ಇತರ ಐವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.
ಕಳೆದ ತಿಂಗಳು ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್ ನೀಡಿದ್ದ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ನೀಡಿದ್ದ ಆದೇಶವನ್ನು ತಡೆಹಿಡಿದಿದೆ. ಇದರಿಂದಾಗಿ ಸೆಂಗಾರ್ ಜೈಲಿನಿಂದ ಹೊರಬರಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಕಾನೂನಿನ ಪ್ರಮುಖ ಪ್ರಶ್ನೆಗಳಿವೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ನ್ಯಾಯಪೀಠ ಹೇಳಿದೆ. ಈ ಬಗ್ಗೆ ನೋಟಿಸ್ ಜಾರಿ ಮಾಡಿತ್ತು.
ಉನ್ನಾವೋ ಅತ್ಯಾಚಾರ ಪ್ರಕರಣ
ಈ ಉನ್ನಾವೋ ಅತ್ಯಾಚಾರ ಪ್ರಕರಣ 2017 ರಲ್ಲಿ ನಡೆದಿತ್ತು. ಆಗ ಬಿಜೆಪಿ ಶಾಸಕರಾಗಿದ್ದ ಕುಲದೀಪ್ ಸಿಂಗ್ ಸೆಂಗಾರ್, ಒಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಈ ಘಟನೆ ನಡೆದಿತ್ತು. ಪೊಲೀಸರು ಮೊದಲು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದಾರೆ ಮತ್ತು ಸಂತ್ರಸ್ತೆ ಹಾಗೂ ಅವರ ಕುಟುಂಬಕ್ಕೆ ಬೆದರಿಕೆ ಹಾಕಲಾಗಿದೆ ಎಂಬ ಆರೋಪಗಳು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾದವು.