ನವದೆಹಲಿ, ಅ. 10: ಮುಖ್ಯ ಚುನಾವಣಾ ಆಯುಕ್ತ (Chief Election Commissioner) ಜ್ಞಾನೇಶ್ ಕುಮಾರ್(Gyanesh Kumar) ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (Cockroach Janta Party – CJP) ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯನ್ನು ಪೊಲೀಸರು ಭದ್ರಕೋಟೆಯನ್ನಾಗಿ ಪರಿವರ್ತಿಸಿದ್ದಾರೆ. ನಗರದ ಗಡಿಭಾಗಗಳು, ಕೇಂದ್ರ ದೆಹಲಿ ಹಾಗೂ ಪ್ರತಿಭಟನಾಕಾರರು ಜಮಾಯಿಸುವ ಸಾಧ್ಯತೆಯಿರುವ ಪ್ರಮುಖ ಸ್ಥಳಗಳಲ್ಲಿ ಭಾರಿ ಪ್ರಮಾಣದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ದಕ್ಷಿಣ-ಪೂರ್ವ ದೆಹಲಿಯ ಮೋಹನ್ ಎಸ್ಟೇಟ್ ಕೈಗಾರಿಕಾ ಪ್ರದೇಶದಲ್ಲಿಯೂ ಪೊಲೀಸರು ಬ್ಯಾರಿಕೇಡ್‌ಗಳ ಜತೆಗೆ ರಸ್ತೆಯಲ್ಲಿ ಮೊಳೆಗಳಿರುವ ಸ್ಪೈಕ್ ಸ್ಟ್ರಿಪ್‌ಗಳನ್ನು ಅಳವಡಿಸಿದ್ದಾರೆ. ನಿಷೇಧಿತ ಪ್ರದೇಶದೊಳಗೆ ವಾಹನಗಳು ಪ್ರವೇಶಿಸದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡಿರುವ ದೃಶ್ಯಗಳಲ್ಲಿ, ಮೋಹನ್ ಕೋ-ಆಪರೇಟಿವ್ ಎಸ್ಟೇಟ್ ಸುತ್ತಮುತ್ತ ಪೊಲೀಸರು ಕಟ್ಟುನಿಟ್ಟಿನ ನಿಗಾ ಇರಿಸಿರುವುದು ಕಂಡುಬಂದಿದೆ. ವಾಹನಗಳನ್ನು ಪರಿಶೀಲಿಸಿದ ಬಳಿಕವಷ್ಟೇ ಮುಂದಕ್ಕೆ ತೆರಳಲು ಅನುಮತಿ ನೀಡಲಾಗುತ್ತಿದೆ.
ದೆಹಲಿಯ ರಸ್ತೆಯಲ್ಲಿರುವ ಮೊಳೆಗಳಿರುವ ಸ್ಪೈಕ್ ಸ್ಟ್ರಿಪ್:
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ
ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಹಾಗೂ ಫಾರ್ಮ್ 6 ಬದಲಾವಣೆಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಸಿಜೆಪಿ ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಇದು ಸಿಜೆಪಿ ನಡೆಸಿದ ಎರಡನೇ ಪ್ರಮುಖ ಪ್ರತಿಭಟನೆ ಎನಿಸಿಕೊಂಡಿದೆ.
ಈ ನಡುವೆ, ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯುಟ್ಯೂಬರ್ ಧ್ರುವ್ ರಾಠಿ, ಸಿಜೆಪಿ ನಾಯಕರಾದ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ವಿಮಾನದಿಂದ ಇಳಿದ ತಕ್ಷಣವೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಜೆಪಿಯ ಇತರ ಮುಖಂಡರು ಸೇರಿ ನಗರದ ವಿವಿಧೆಡೆ 1,000ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಂತರ್ ಮಂತರ್ ಪ್ರತಿಭಟನೆಗೂ ಮುನ್ನವೇ ಶಾಕ್; CJP ನಾಯಕರಾದ ಅಭಿಜೀತ್ ದೀಪ್ಕೆ, ಅಶುತೋಷ್ ರಂಕಾ, ಸೌರವ್ ದಾಸ್ ವಶಕ್ಕೆ
45 ಮೆಟ್ರೋ ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ಬಂದ್
ಪ್ರತಿಭಟನೆಯ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರವು ದೆಹಲಿಯಲ್ಲಿ 20 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ದೆಹಲಿ ಮೆಟ್ರೋ ರೈಲು ನಿಗಮಕ್ಕೆ ಪೊಲೀಸರು ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ 45 ಮೆಟ್ರೋ ನಿಲ್ದಾಣಗಳಲ್ಲಿ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಗಿದೆ.
250ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು
ಪ್ರತಿಭಟನೆಯ ಪರಿಣಾಮವಾಗಿ ರೈಲು ಸಂಚಾರದಲ್ಲಿಯೂ ವ್ಯತ್ಯಯ ಉಂಟಾಗಿದೆ. ಶನಿವಾರ ಬೆಳಗ್ಗೆ 4 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನವದೆಹಲಿ ಮತ್ತು ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಗಳಿಗೆ ಆಗಮಿಸಬೇಕಿದ್ದ ಇತರ ರಾಜ್ಯಗಳ ರೈಲುಗಳು ಹಾಗೂ ಸ್ಥಳೀಯ ರೈಲುಗಳು ಸೇರಿದಂತೆ 250ಕ್ಕೂ ಹೆಚ್ಚು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಯಿತು.
ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಿರುವ ದೆಹಲಿ ಪೊಲೀಸರು, ನವದೆಹಲಿ ಜಿಲ್ಲೆಯನ್ನು 20 ವಲಯಗಳಾಗಿ ವಿಂಗಡಿಸಿದ್ದಾರೆ. ಪ್ರತಿ ವಲಯದ ಭದ್ರತಾ ನಿರ್ವಹಣೆಗಾಗಿ ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದ್ದು, ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.