ನವದೆಹಲಿ: ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ಆದೇಶಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.
ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಪ್ರತಿ-ಅಫಿಡವಿಟ್ನಲ್ಲಿ, ಚುನಾವಣಾ ಸಮಿತಿಯು SIR ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡಿದ್ದು, ಜೂನ್ 2025, ಅಕ್ಟೋಬರ್ 2025 ಮತ್ತು ಮೇ 2026 ರಲ್ಲಿ ಹೊರಡಿಸಲಾದ ಮೂರು ಆದೇಶಗಳನ್ನು ಆಯೋಗದ ಮೂವರು ಸದಸ್ಯರು - CEC ಮತ್ತು ಇಬ್ಬರು ಚುನಾವಣಾ ಆಯುಕ್ತರು ಸರ್ವಾನುಮತದಿಂದ ಅನುಮೋದಿಸಿದ್ದಾರೆ ಎಂದು ಸಮರ್ಥಿಸಿಕೊಂಡಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್, ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಓವೈಸಿ ಮತ್ತು ಐ.ಎನ್.ಡಿ.ಐ.ಎ ಮೈತ್ರಿಕೂಟದ ವಿವಿಧ ನಾಯಕರು ಸಲ್ಲಿಸಿರುವ ಒಟ್ಟು ಏಳು ಅರ್ಜಿಗಳು ಇಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಲಿದೆ.
ಅರ್ಜಿದಾರರು ಚುನಾವಣಾ ಆಯೋಗ ಹಾಗೂ ಮುಖ್ಯ ಆಯುಕ್ತರ ಕುರಿತು ಆರೋಪಗಳನ್ನು ಮಾಡಿದ್ದು, 2025 ಮತ್ತು 2026 ರಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಾಗ ಚುನಾವಣಾ ಆಯೋಗವು ನಿಗದಿಪಡಿತ ಕಾನೂನು ಮತ್ತು ನಿಯಮಗಳನ್ನು ಗಾಳಿಗೆ ತೂರಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ದೇಶಾದ್ಯಂತ ಲಕ್ಷಾಂತರ ಅರ್ಹ ಮತದಾರರ ಹೆಸರನ್ನು ಯಾವುದೇ ಪೂರ್ವ ಸೂಚನೆ ಇಲ್ಲದೆ ಅಕ್ರಮವಾಗಿ ಪಟ್ಟಿಯಿಂದ ಕೈಬಿಡಲಾಗಿದೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿರುವ ಪ್ರಕ್ರಿಯೆಯ ಕುರಿತು ತಕ್ಷಣವೇ ಸ್ವತಂತ್ರ ಸಂಸ್ಥೆಯಿಂದ ಆಡಿಟ್ ನಡೆಸಬೇಕು ಎಂದು ಒತ್ತಾಯಿಸದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ ಮತ್ತು ನಿರ್ಧಾರಗಳು ಪಾರದರ್ಶಕವಾಗಿಲ್ಲ. ಆಯೋಗದ ಆಂತರಿಕ ದಾಖಲೆಗಳನ್ನು ಬಹಿರಂಗಪಡಿಸಬೇಕು ಹಾಗೂ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಆರೋಪಗಳನ್ನು ಬಲವಾಗಿ ನಿರಾಕರಿಸಿರುವ ಚುನಾವಣಾ ಆಯೋಗವು ಈಗಾಗಲೇ ಸುಪ್ರೀಂ ಕೋರ್ಟ್ಗೆ ಆಕ್ಷೇಪಣಾ ಪ್ರಮಾಣಪತ್ರವನ್ನು ಸಲ್ಲಿಸಿದೆ. 2025ರ ಜೂನ್, ಅಕ್ಟೋಬರ್ ಮತ್ತು 2026ರ ಮೇ ತಿಂಗಳಲ್ಲಿ ಹೊರಡಿಸಲಾದ ಎಸ್ಐಆರ್ಗೆ ಸಂಬಂಧಿಸಿದ ಮೂರೂ ಆದೇಶಗಳನ್ನು ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇಬ್ಬರು ಚುನಾವಣಾ ಆಯುಕ್ತರು ಒಮ್ಮತ ಮತ್ತು ಸರ್ವಾನುಮತದಿಂದ ಅನುಮೋದಿಸಿದ್ದಾರೆ ಎಂದು ಆಯೋಗ ತಿಳಿಸಿದೆ.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ವಿಪಕ್ಷಗಳು ರಾಜಕೀಯ ಪ್ರೇರಿತವಾಗಿ ಈ ಅರ್ಜಿಗಳನ್ನು ಸಲ್ಲಿಸಿದ್ದು, ಇವುಗಳನ್ನು ತಕ್ಷಣವೇ ವಜಾಗೊಳಿಸಬೇಕು ಎಂದು ಆಯೋಗ ನ್ಯಾಯಾಲಯಕ್ಕೆ ಕೋರಿದೆ.