ದೇವರ ದರ್ಶನಕ್ಕೆ ಹೊರಟವರನ್ನು ಬಲಿಪಡೆದ ಜವರಾಯ: ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿ 13 ಮಂದಿ ದುರ್ಮರಣ
ದೇವರ ದರ್ಶನಕ್ಕಾಗಿ ಹೊರಟಿದ್ದ ಭಕ್ತರ ತಂಡವೊಂದು ಜವರಾಯನ ಅಟ್ಟಹಾಸಕ್ಕೆ ಬಲಿಯಾದ ಹೃದಯವಿದ್ರಾವಕ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ರಾಮಗಢ ಜಿಲ್ಲೆಯ ರಾಂಚಿ-ಪಾಟ್ನಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮಕ್ಕಳು ಹಾಗೂ ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು 13 ಮಂದಿ ಮೃತಪಟ್ಟಿದ್ದಾರೆ.
ಜಾರ್ಖಂಡ್‌ನಲ್ಲಿ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿ 13 ಮಂದಿ ದುರ್ಮರಣ -
ಪಾಟ್ನಾ: ದೇವರ ದರ್ಶನಕ್ಕಾಗಿ ಹೊರಟಿದ್ದ ಭಕ್ತರ ತಂಡವೊಂದು ಜವರಾಯನ ಅಟ್ಟಹಾಸಕ್ಕೆ ಬಲಿಯಾದ ಹೃದಯವಿದ್ರಾವಕ ಘಟನೆ (Road Accident) ಜಾರ್ಖಂಡ್‌ನಲ್ಲಿ ನಡೆದಿದೆ. ರಾಮಗಢ ಜಿಲ್ಲೆಯ ರಾಂಚಿ-ಪಾಟ್ನಾ (Ranchi- Patna) ರಾಷ್ಟ್ರೀಯ ಹೆದ್ದಾರಿಯಲ್ಲಿ (NH-33) ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮಕ್ಕಳು ಹಾಗೂ ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು 13 ಮಂದಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಬಿಹಾರದ ನಳಂದಾ ಜಿಲ್ಲೆಯ ಜಂಘಾರೊ ಗ್ರಾಮದ ನಿವಾಸಿಗಳಾದ ಒಟ್ಟು 14 ಮಂದಿ ಸ್ಕಾರ್ಪಿಯೋ (SUV) ವಾಹನದಲ್ಲಿ ಜಾರ್ಖಂಡ್‌ನ ರಾಮಗಢದಲ್ಲಿರುವ ಪ್ರಸಿದ್ಧ ರಜ್ರಪ್ಪ ದೇವಸ್ಥಾನಕ್ಕೆ ದರ್ಶನಕ್ಕಾಗಿ ತೆರಳುತ್ತಿದ್ದರು. ಭಾನುವಾರ ಮುಂಜಾನೆ ಸುಮಾರು 2 ಗಂಟೆಯ ವೇಳೆಗೆ ರಾಮಗಢ ಜಿಲ್ಲೆಯ ಕುಜು ಪೊಲೀಸ್ ಠಾಣಾ ವ್ಯಾಪ್ತಿಯ ಪೈಂಕಿ ಗ್ರಾಮದ ಬಳಿ ವಾಹನ ಸಾಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಭಾರಿ ವಾಹನಕ್ಕೆ ವೇಗವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಸ್ಕಾರ್ಪಿಯೋ ವಾಹನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಐವರು ಪುರುಷರು, ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಅಪಘಾತದ ಶಬ್ದ ಕೇಳಿ ತಕ್ಷಣವೇ ಧಾವಿಸಿದ ಸ್ಥಳೀಯರು ಹಾಗೂ ಪೊಲೀಸರು ವಾಹನದ ಅವಶೇಷಗಳಡಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಘಟನೆಯಲ್ಲಿ ಪವಾಡಸದೃಶವಾಗಿ ಬದುಕುಳಿದಿರುವ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಾಮಗಢ ಸದರ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Bidar Accident: ಬೀದರ್‌ನಲ್ಲಿ ಬೈಕ್-ಕಾರು ನಡುವೆ ಭೀಕರ ಅಪಘಾತ; ಬಾಲಕ ಸೇರಿ ಮೂವರ ದುರ್ಮರಣ
ದುರ್ಘಟನೆಗೆ ಜಾರ್ಖಂಡ್ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಹಾಗೂ ಮುಖ್ಯಮಂತ್ರಿ ಹೇಮಂತ್ ಸೊರೆನ್ ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿರುವ ಸಿಎಂ, ಗಾಯಾಳುವಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಪಘಾತದ ಕುರಿತು ಕುಜು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನೆಂದು ತನಿಖೆ ನಡೆಸಲಾಗುತ್ತಿದೆ.