ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜಂತರ್ ಮಂತರ್‌ನಿಂದ ಕೋಲ್ಕತಾ, ಚಂಡೀಗಢದವರೆಗೆ: ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ದೇಶವ್ಯಾಪಿ ಪ್ರತಿಭಟನೆ

Congress Nationwide Protest: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಹಮ್ಮಿಕೊಂಡಿರುವ ದೇಶವ್ಯಾಪಿ ಪ್ರತಿಭಟನೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಘೋಷಣೆ ಮೊಳಗಿತು.

ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ದೇಶವ್ಯಾಪಿ ಪ್ರತಿಭಟನೆ

ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ -

Priyanka P
Priyanka P Sep 25, 2026 6:03 PM

ನವದೆಹಲಿ, ಸೆ. 25: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ರಾಜೀನಾಮೆಗೆ ಆಗ್ರಹಿಸಿ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು (Congress protest) ಪ್ರತಿಭಟನೆ ನಡೆಸಿದರು. ದೆಹಲಿ, ಬಿಹಾರ, ಅಸ್ಸಾಂ, ಪಂಜಾಬ್, ಅರುಣಾಚಲ ಪ್ರದೇಶ, ಮಣಿಪುರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳಗಳಲ್ಲಿ ‘ಕೈ’ ಕಾರ್ಯಕರ್ತರು ಘೋಷಣೆ ಕೂಗಿದರು.

ದೆಹಲಿಯಲ್ಲಿ ಪಕ್ಷದ ಕಾರ್ಯಕರ್ತರು ಜಂತರ್ ಮಂತರ್‌ನಲ್ಲಿ ಜಮಾಯಿಸಿದರು. ಕಾಂಗ್ರೆಸ್ ಹಮ್ಮಿಕೊಂಡಿರುವ ದೇಶವ್ಯಾಪಿ ಪ್ರತಿಭಟನೆಯ ಭಾಗವಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಘೋಷಣೆ ಕೂಗಿದರು. ಜತೆಗೆ ರಾಜೀನಾಮೆಗೆ ಪಟ್ಟು ಹಿಡಿದರು. ಚುನಾವಣಾ ಆಯೋಗವು ನಿಷ್ಪಕ್ಷಪಾತ ಧೋರಣೆ ಕಳೆದುಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ.

ಬಿಹಾರದ ಪಾಟ್ನಾದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ ಬಂಧಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಅರ್ಧ ಕಿಲೋ ಮೀಟರ್ ಮೆರವಣಿಗೆ ನಡೆಸಿದರು. ಚಂಡೀಗಢದಲ್ಲಿ ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ದಾಟಿ ಚುನಾವಣಾ ಆಯೋಗದ ಕಚೇರಿಯ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದಾಗ, ಪೊಲೀಸರು ಅವರನ್ನು ತಡೆಯಲು ಜಲಫಿರಂಗಿಗಳನ್ನು ಬಳಸಿದರು.

ಇಲ್ಲಿದೆ ವಿಡಿಯೊ:





ನಂತರ ಹಲವಾರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಅಸ್ಸಾಂನಲ್ಲಿ, ಪ್ರತಿಭಟನೆಯ ಸಮಯದಲ್ಲಿ ಪೊಲೀಸ್ ಬ್ಯಾರಿಕೇಡ್‌ಗಳನ್ನು ಭೇದಿಸಲು ಪ್ರಯತ್ನಿಸುತ್ತಿದ್ದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಮತ್ತು ಪಕ್ಷದ ಹಲವಾರು ಹಿರಿಯ ನಾಯಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ವಿಪಕ್ಷಗಳ ಪಟ್ಟು; ಮುಖ್ಯ ಚುನಾವಣಾ ಆಯುಕ್ತರನ್ನು ಏಕಾಏಕಿ ಬದಲಿಸಬಹುದೇ?

ಕಾಂಗ್ರೆಸ್ ತನ್ನ ರಾಜ್ಯ ಪ್ರಧಾನ ಕಚೇರಿಯಾದ ರಾಜೀವ್ ಭವನದಿಂದ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿತು. ಅಲ್ಲಿ ಅದು ಚುನಾವಣಾ ಆಯೋಗದ ಪ್ರತಿಕೃತಿಯನ್ನು ಸುಡಲು ಮುಂದಾಯಿತು. ಚಂಡೀಗಢದಲ್ಲಿ, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ನೇತೃತ್ವದಲ್ಲಿ ಪಕ್ಷದ ನಾಯಕರು, ಶಾಸಕರು ಮತ್ತು ಕಾರ್ಯಕರ್ತರು ಸೆಕ್ಟರ್ 17ರಲ್ಲಿ ಪ್ರತಿಭಟನೆ ನಡೆಸಿದರು.

ಪಶ್ಚಿಮ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಶುಭಂಕರ್ ಸರ್ಕಾರ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಕೋಲ್ಕತಾ ವಿಶ್ವವಿದ್ಯಾಲಯದ ಕಾಲೇಜು ರಸ್ತೆ ಆವರಣದ ಹೊರಗಿನಿಂದ ಸ್ಟ್ರಾಂಡ್ ರಸ್ತೆಯಲ್ಲಿರುವ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯ ಕಡೆಗೆ ಭಾರಿ ಪೊಲೀಸ್ ಬಂದೋಬಸ್ತ್ ನಡುವೆ ಮೆರವಣಿಗೆ ನಡೆಸಿದರು. ಪ್ರತಿಭಟನಾಕಾರರನ್ನು ಮಧ್ಯ ಕೋಲ್ಕತಾದ ಬಿಬಿ ಗಂಗೂಲಿ ಸ್ಟ್ರೀಟ್ ಕ್ರಾಸಿಂಗ್‌ನಲ್ಲಿ ತಡೆದು, ಸಿಇಸಿ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಯನ್ನು ಸುಟ್ಟುಹಾಕಿದರು ಮತ್ತು ಅವರ ಬಂಧನಕ್ಕೆ ಒತ್ತಾಯಿಸಿದರು.

ಸಿಇಸಿ ಜ್ಞಾನೇಶ್ ಕುಮಾರ್ ʼದೇಶದ್ರೋಹಿʼ ಎಂದು ಕರೆದ ರಾಹುಲ್‌ ಗಾಂಧಿ; ರಾಜೀನಾಮೆಗೆ ಪಟ್ಟು

ಬಿಹಾರದ ಪಾಟ್ನಾದಲ್ಲಿರುವ ಚುನಾವಣಾ ಆಯೋಗದ ಕಚೇರಿಯ ಕಡೆಗೆ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸಿ, ಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿ ರಾಜೀನಾಮೆಗೆ ಒತ್ತಾಯಿಸಿದರು. ಪ್ರತಿಭಟನಾಕಾರರು ಕಚೇರಿಯನ್ನು ತಲುಪದಂತೆ ತಡೆಯಲು ಪೊಲೀಸರು ಜಲಫಿರಂಗಿಗಳನ್ನು ಬಳಸಿದರು.

ಚುನಾವಣಾ ಆಯೋಗವು ರಾಜಿ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿರ್ದೇಶನದ ಮೇರೆಗೆ ಅದು ಕಾರ್ಯನಿರ್ವಹಿಸುತ್ತಿದೆ. ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಬಿಹಾರ ಕಾಂಗ್ರೆಸ್ ಮುಖ್ಯಸ್ಥ ರಾಜೇಶ್ ರಾಮ್ ಹೇಳಿದ್ದಾರೆ.

ಅರುಣಾಚಲ ಪ್ರದೇಶದಲ್ಲಿಯೂ ಇದೇ ರೀತಿಯ ಪ್ರತಿಭಟನೆ ನಡೆಯಿತು. ಇಟಾನಗರದಲ್ಲಿ ಪ್ರತಿಭಟನೆ ನಡೆಸಿದ ರಾಜ್ಯ ಕಾಂಗ್ರೆಸ್ ಕಾರ್ಯಕರ್ತರು, ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿದರು. ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲೂ ಪಕ್ಷ ಪ್ರತಿಭಟನೆ ನಡೆಸಿತು.