ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ; ತನಿಖೆಗೆ ವಿಶೇಷ ತಂಡಗಳ ರಚನೆ
ಪ್ರಧಾನಿ ನರೇಂದ್ರ ಮೋದಿ ನಿನ್ನೆ ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭಾರೀ ಭದ್ರತಾ ಲೋಪದ ಶಂಕೆ ವ್ಯಕ್ತವಾಗಿತ್ತು. ಮೋದಿ ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳು ಪತ್ತೆಯಾಗಿದ್ದವು. ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರೋದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.
ಸಂಗ್ರಹ ಚಿತ್ರ -
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನಿನ್ನೆ ಬೆಂಗಳೂರಿಗೆ (Bengaluru) ಭೇಟಿ ನೀಡಿದ್ದ ಸಂದರ್ಭದಲ್ಲಿ ಭಾರೀ ಭದ್ರತಾ ಲೋಪದ ಶಂಕೆ ವ್ಯಕ್ತವಾಗಿತ್ತು. ಮೋದಿ ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳು ಪತ್ತೆಯಾಗಿದ್ದವು. ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರೋದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಗ್ಗಲೀಪುರ ಪೊಲೀಸರು, ತನಿಖೆಗೆ ವಿಶೇಷ ತಂಡಗಳನ್ನು ರಚನೆ ಮಾಡಿವೆ.
ಬೆಂಗಳೂರಿನಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ, ಕಗ್ಗಲಿಪುರ ಬಳಿಯ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಕೇಂದ್ರದ 45ನೇ ಸಂಸ್ಥಾಪನಾ ದಿನವನ್ನು ಆಚರಿಸಲು ಬಂದಿದ್ದರು. ಭಾನುವಾರ ಬೆಳಿಗ್ಗೆ ತಪಾಸಣೆಯ ಸಮಯದಲ್ಲಿ, ಪ್ರಧಾನಿ ಮೋದಿ ಆಗಮಿಸಬೇಕಿದ್ದ ಸ್ಥಳದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿ ಪಾದಚಾರಿ ಮಾರ್ಗದ ಬದಿಯಲ್ಲಿ ಎರಡು ಜಿಲೆಟಿನ್ ಕಡ್ಡಿಗಳು ಕಂಡುಬಂದಿವೆ. ಹೆಚ್ಚಿನ ತನಿಖೆ ನಡೆಯುತ್ತಿದೆ' ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.
ತಕ್ಷಣವೇ ಪೊಲೀಸರು, ಬಾಂಬ್ ನಿಷ್ಕ್ರಿಯ ದಳಗಳು ಮತ್ತು ವಿಧಿವಿಜ್ಞಾನ ಸಿಬ್ಬಂದಿ ಸ್ಫೋಟಕ ವಸ್ತುಗಳ ಪರಿಶೀಲನೆಗಾಗಿ ಸ್ಥಳಕ್ಕೆ ಧಾವಿಸಿದರು. ವಿಚಾರಣೆಗಾಗಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆಗೆ ರಾಮನಗರ ಡಿವೈಎಸ್ಪಿ ಶ್ರೀನಿವಾಸ್ ನೇತೃತ್ವದಲ್ಲಿ ನಾಲ್ಕು ತಂಡಗಳ ರಚನೆ ಮಾಡಲಾಗಿದ್ದು, 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿಗಳ ಪರಿಶೀಲನೆ ಮಾಡಲಾಗುತ್ತಿದ್ದು, ಸ್ಥಳಕ್ಕೆ ಜಿಲೆಟಿನ್ ಕಡ್ಡಿ ಹೇಗೆ ಬಂತು, ಯಾರು ಅದನ್ನ ತಂದು ರಸ್ತೆ ಪಕ್ಕ ಹಾಕಿದ್ದಾರೆ ಎಂಬ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ.
ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಕೂಡಲೇ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿತ್ತು. ಬಾಕ್ಸ್ ಅನ್ನು ತೆರೆದು ಪರಿಶೀಲಿಸಿದಾಗ ಅದರಲ್ಲಿ ಎರಡು ಜಿಲೆಟಿನ್ ಕಡ್ಡಿಗಳು, ನಾಲ್ಕು ಗಂಧದ ಕಡ್ಡಿಗಳು, ಒಂದು ಮ್ಯಾಚ್ ಬಾಕ್ಸ್ ಹಾಗೂ ಎರಡು ಬ್ಯಾಟರಿಗಳು ಕಂಡುಬಂದಿದ್ದವು. ತಕ್ಷಣವೇ ಸ್ಫೋಟಕಗಳನ್ನು ವಶಕ್ಕೆ ಪಡೆದ ಪೊಲೀಸರು, ಇಡೀ ಮಾರ್ಗವನ್ನು ಮತ್ತೊಮ್ಮೆ ತೀವ್ರ ತಪಾಸಣೆಗೆ ಒಳಪಡಿಸಿದ್ದರು. ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸುವುದರ ಜೊತೆಗೆ, ಬೆಂಗಳೂರು ದಕ್ಷಿಣ ಮತ್ತು ರಾಮನಗರ ಭಾಗದ ಕ್ವಾರಿಗಳಲ್ಲಿ ಬಳಕೆಯಾಗುವ ಜಿಲೆಟಿನ್ ಕಡ್ಡಿಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.