ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಹಿಳಾ ಮೀಸಲಾತಿ ಮಸೂದೆ ಅನುಷ್ಠಾನಕ್ಕೆ ವಿಶೇಷ ಸಂಸತ್ ಅಧಿವೇಶನ ಕರೆಯಲು ಕೇಂದ್ರ ಸಿದ್ಧತೆ

Women's Reservation Bill: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವಾಕಾಂಕ್ಷೆಯ ಮಹಿಳಾ ಮೀಸಲಾತಿ ಮಸೂದೆ’ಯನ್ನು ತ್ವರಿತವಾಗಿ ಮತ್ತು ಸುಗಮವಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಶೀಘ್ರದಲ್ಲೇ ವಿಶೇಷ ಸಂಸತ್ ಅಧಿವೇಶನವನ್ನು ಕರೆಯಲು ಸಜ್ಜಾಗಿದೆ. ಮಹಿಳಾ ಸಬಲೀಕರಣ ಹಾಗೂ ಶಾಸಕಾಂಗದಲ್ಲಿ ಸಮಾನ ಪ್ರಾತಿನಿಧ್ಯ ಕಲ್ಪಿಸುವ ಐತಿಹಾಸಿಕ ಹೆಜ್ಜೆಯಾಗಿರುವ ಈ ಮಸೂದೆಯ ಅನುಷ್ಠಾನದ ಸಾಂವಿಧಾನಿಕ ಹಾಗೂ ತಾಂತ್ರಿಕ ಪ್ರಕ್ರಿಯೆಗಳ ಕುರಿತು ಈ ಅಧಿವೇಶನದಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ.

ಸಾಂದರ್ಭಿಕ ಚಿತ್ರ

ನವದೆಹಲಿ, ನ. 12: ದೇಶದ ರಾಜಕೀಯ ಮತ್ತು ಶಾಸಕಾಂಗ ಇತಿಹಾಸದಲ್ಲಿ ಮತ್ತೊಂದು ಐತಿಹಾಸಿಕ ಹೆಜ್ಜೆಯಿಡಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವಾಕಾಂಕ್ಷೆಯ ಮಹಿಳಾ ಮೀಸಲಾತಿ ಮಸೂದೆ (Women's Reservation Bill) ಅನುಷ್ಠಾನದ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಕೇಂದ್ರ ಸರ್ಕಾರವು ಶೀಘ್ರದಲ್ಲೇ ವಿಶೇಷ ಸಂಸತ್ ಅಧಿವೇಶನವನ್ನು (Special Parliament Session ) ಕರೆಯಲು ಯೋಜನೆ ರೂಪಿಸುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಅತ್ಯಂತ ಮಹತ್ವದ ಮಸೂದೆ ಎಂದು ಪರಿಗಣಿಸಲ್ಪಟ್ಟಿರುವ ಈ ಕಾಯ್ದೆಯನ್ನು ತ್ವರಿತವಾಗಿ ಮತ್ತು ಸುಗಮವಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಸಂಸತ್ತಿನಲ್ಲಿ ವಿಶೇಷ ಚರ್ಚೆ ನಡೆಸಿ, ಅಗತ್ಯ ಅಂತಿಮ ಸಿದ್ಧತೆಗಳನ್ನು ಪೂರ್ಣಗೊಳಿಸಲು ಈ ಅಧಿವೇಶನ ನಿರ್ಣಾಯಕವಾಗಲಿದೆ.

ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲು ಲೋಕಸಭೆಯಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. ಪ್ರಸ್ತುತ ಲೋಕಸಭೆಯ 543 ಸ್ಥಾನಗಳ ಪೈಕಿ 3 ಸ್ಥಾನಗಳು ಖಾಲಿ ಇದ್ದು, ಮಸೂದೆ ಅಂಗೀಕಾರಕ್ಕೆ 361 ಮತಗಳ ಅಗತ್ಯವಿದೆ. ಪ್ರಸ್ತುತ ಸಂವಿಧಾನ ತಿದ್ದುಪಡಿ ಮೂಲಕ ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಈಗಿನ 543ರಿಂದ ಗರಿಷ್ಠ 850ಕ್ಕೆ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. ಕ್ಷೇತ್ರ ಮರುವಿಂಗಡಣೆ ಮೂಲಕ ಲೋಕಸಭೆ ಸ್ಥಾನಗಳನ್ನು ಹೆಚ್ಚಿಸಿ ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವುದು ಸರ್ಕಾರದ ಉದ್ದೇಶ. 2029ರ ಲೋಕಸಭಾ ಚುನಾವಣೆಗೆ ಮುನ್ನ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರುವ ಗುರಿಯನ್ನು ಕೇಂದ್ರ ಹೊಂದಿದೆ.

ಮಹಿಳಾ ಮೀಸಲಾತಿ ಮಸೂದೆ ತಿರಸ್ಕರಿಸಿದ ಕಾಂಗ್ರೆಸ್ ವಿರುದ್ಧ ಆಕ್ರೋಶ

ಇದೇ ರೀತಿಯ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಈ ವರ್ಷದ ಏಪ್ರಿಲ್ 17ರಂದು ಬಜೆಟ್ ಅಧಿವೇಶನದ ವಿಶೇಷ ಕಲಾಪದಲ್ಲಿ ಮಂಡಿಸಲಾಗಿತ್ತು. ಆದರೆ ಅಗತ್ಯ ಬಹುಮತ ದೊರೆಯದ ಕಾರಣ ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾಗಿರಲಿಲ್ಲ. ಇದೀಗ ಮತ್ತೊಮ್ಮೆ ಮಸೂದೆಯನ್ನು ಮಂಡಿಸಿ ಅಂಗೀಕಾರ ಪಡೆಯಲು ಸರ್ಕಾರ ಮುಂದಾಗಿದೆ. ಇನ್ನು ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಬಹುದು ಎಂಬ ಆತಂಕವನ್ನು ದೂರ ಮಾಡಲು ಸರ್ಕಾರ ಹೊಸ ಸೂತ್ರವೊಂದನ್ನು ಪರಿಶೀಲಿಸುತ್ತಿದೆ. ಎಲ್ಲ ರಾಜ್ಯಗಳ ಲೋಕಸಭಾ ಸ್ಥಾನಗಳನ್ನು ಶೇ. 50ರಷ್ಟು ಹೆಚ್ಚಿಸುವುದು ಮತ್ತು 1971ರ ಜನಗಣತಿಯ ಆಧಾರದ ಮೇಲಿರುವ ರಾಜ್ಯಗಳ ನಡುವಿನ ಸ್ಥಾನಗಳ ಅನುಪಾತವನ್ನು ಹಾಗೆಯೇ ಉಳಿಸಿಕೊಳ್ಳುವ ಪ್ರಸ್ತಾವನೆ ಇದರಲ್ಲಿದೆ.

ವಿಶೇಷ ಅಧಿವೇಶನದ ನಿರ್ದಿಷ್ಟ ದಿನಾಂಕ ಅಥವಾ ಅವಧಿಯನ್ನು ಸರ್ಕಾರ ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ. ಆದರೆ ಆಗಸ್ಟ್ 13ರಂದು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದ್ದ ಮುಂಗಾರು ಅಧಿವೇಶನವನ್ನು ಇನ್ನೂ ಔಪಚಾರಿಕವಾಗಿ ಮುಕ್ತಾಯಗೊಳಿಸದ (Unprorogued) ಕಾರಣ ಕೇವಲ 2 ದಿನಗಳ ನೋಟಿಸ್ ನೀಡಿ ವಿಸ್ತೃತ ಕಲಾಪ ಕರೆಯುವ ಅವಕಾಶ ಸರ್ಕಾರಕ್ಕಿದೆ.

ದೇಶದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ

Ramesh Ballamoole

View all posts by this author