ನವದೆಹಲಿ: ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ (Neha Bora) ಅವರಿಗೆ ದೆಹಲಿ ಹೈಕೋರ್ಟ್‌ನಲ್ಲಿ (Delhi High Court) ಭಾರಿ ಹಿನ್ನಡೆಯಾಗಿದೆ. ಮುಖ್ಯ ಚುನಾವಣಾ ಆಯುಕ್ತರ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದಂತೆ ಶಾಂತಿ ಕಾಪಾಡುವಂತೆ (ಶಾಂತಿ ಬಾಂಡ್) ತಮಗೆ ಜಾರಿ ಮಾಡಲಾಗಿದ್ದ ನೋಟಿಸ್ ಅನ್ನು ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ತೀರ್ಪನ್ನು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಆದೇಶವನ್ನು ಪ್ರಕಟಿಸಿದ್ದಾರೆ.
ಕಳೆದ ಅಕ್ಟೋಬರ್ 16, 2026 ರಂದು ದೆಹಲಿಯ ಮಂಡಿ ಹೌಸ್ ಬಳಿ ವಿದ್ಯಾರ್ಥಿ ಸಂಘಟನೆಗಳು 'ಲೆಹ್ರಾ ದೋ ತಿರಂಗಾ' ಎಂಬ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದ್ದವು. ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ನಡೆದ ಈ ಪ್ರತಿಭಟನೆಯ ವೇಳೆ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗಬಹುದು ಎಂಬ ಮುಂಜಾಗ್ರತಾ ಕ್ರಮವಾಗಿ ದೆಹಲಿ ಪೊಲೀಸರು ನೇಹಾ ಬೋರಾ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು, ಬಳಿಕ ಬಿಡುಗಡೆ ಮಾಡಿದ್ದರು.
ಈ ಘಟನೆಯ ನಂತರ, ಅಕ್ಟೋಬರ್ 18 ರಂದು ದೆಹಲಿ ಪೊಲೀಸರ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ನೇಹಾ ಬೋರಾ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ 10,000 ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಒಬ್ಬರ ಶ್ಯೂರಿಟಿಯನ್ನು ಒದಗಿಸುವಂತೆ ಆ ನೋಟಿಸ್‌ನಲ್ಲಿ ಸೂಚಿಸಲಾಗಿತ್ತು.
ಪೊಲೀಸ್ ಮ್ಯಾಜಿಸ್ಟ್ರೇಟ್ ನೀಡಿದ ಈ ನೋಟಿಸ್ ಅನ್ನು ಪ್ರಶ್ನಿಸಿ ನೇಹಾ ಬೋರಾ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. "ಈ ನೋಟಿಸ್ ಅತ್ಯಂತ ಅಸ್ಪಷ್ಟವಾಗಿದೆ ಮತ್ತು ಯಾವುದೇ ಗಡುವು ಅಥವಾ ಸೂಕ್ತ ಆಧಾರಗಳಿಲ್ಲದೆ ನೀಡಲಾಗಿದೆ. ಇದು ಭಾರತೀಯ ಸಂವಿಧಾನದ ಪರಿಚ್ಛೇದ 19 (ಅಭಿವ್ಯಕ್ತಿ ಸ್ವಾತಂತ್ರ್ಯ) ಮತ್ತು ಪರಿಚ್ಛೇದ 21 (ಜೀವಿಸುವ ಹಕ್ಕು) ಅಡಿಯಲ್ಲಿ ತಮಗೆ ನೀಡಿರುವ ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ" ಎಂದು ಅವರು ನ್ಯಾಯಾಲಯದಲ್ಲಿ ವಾದಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸುಬ್ರಮಣ್ಯಂ ಪ್ರಸಾದ್ ಅವರ ಏಕಸದಸ್ಯ ಪೀಠವು ಅಕ್ಟೋಬರ್ 23, 2026 ರಂದು ತನ್ನ ತೀರ್ಪನ್ನು ಪ್ರಕಟಿಸಿತು. ಪ್ರಸ್ತುತ ಹಂತದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ನ್ಯಾಯಾಲಯವು ನೇಹಾ ಬೋರಾ ಅವರ ಅರ್ಜಿಯನ್ನು ವಜಾಗೊಳಿಸಿತು. ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ನಡೆಸುವ ತನಿಖಾ ಪ್ರಕ್ರಿಯೆಗಳಲ್ಲಿ ಈಗಾಗಲೇ ಅಗತ್ಯ ಕಾನೂನು ಸುರಕ್ಷತಾ ಕ್ರಮಗಳು ಇರುವುದರಿಂದ ಈ ನೋಟಿಸ್ ಕಾನೂನುಬಾಹಿರವಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.