ಚಂಡೀಗಢ್: ಪಂಜಾಬ್‌ನ ಫಾಗ್ವಾರದಲ್ಲಿರುವ ಖ್ಯಾತ 'ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ' (LPU amid protest) ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಆತ್ಮಹತ್ಯೆಯ ವದಂತಿಗಳ ಹಿನ್ನೆಲೆಯಲ್ಲಿ ಬೃಹತ್ ಪ್ರತಿಭಟನೆ ಭುಗಿಲೆದ್ದಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಬೆನ್ನಲೇ ವಿಶ್ವವಿದ್ಯಾಲಯದ ಸುತ್ತಮುತ್ತ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಈ ನಡುವೆ, ಘಟನೆಯ ಕುರಿತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (CM Bhagwant Mann) ಅವರು ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶಿಸಿದ್ದು, ದೋಷಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಹೊರಗಿನ ವ್ಯಕ್ತಿಯೊಬ್ಬ ಲೈಗಿಂಕ ದೌರ್ಜನ್ಯ ಎಸಗಿದ್ದಾನೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಸುದ್ದಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು. ಇದರಿಂದ ಆಕ್ರೋಶಗೊಂಡ ಸಾವಿರಾರು ವಿದ್ಯಾರ್ಥಿಗಳು ಭಾನುವಾರ ತಡರಾತ್ರಿ ಕಾಂಪ್ಯಸ್‌ನಲ್ಲಿ ಅಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ಆರಂಭಿಸಿದರು. ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಸೂಕ್ತ ಭದ್ರತೆ ಇಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಧರಣಿ ಕುಳಿತರು.
ಹೆದ್ದಾರಿ ತಡೆದು ಪ್ರತಿಭಟನೆ
ಪ್ರತಿಭಟನೆಯು ಕ್ಷಣಮಾತ್ರದಲ್ಲಿ ಹಿಂಸಾಚಾರಕ್ಕೆ ತಿರುಗಿತು. ಪ್ರತಿಭಟನಾಕಾರ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಕಟ್ಟಡಗಳ ಗಾಜುಗಳನ್ನು ಒಡೆದು, ಹೂವಿನ ಕುಂಡಗಳನ್ನು ಹಾಗೂ ಪೀಠೋಪಕರಣಗಳನ್ನು ಧ್ವಂಸಗೊಳಿಸಿದರು. ಕೆಲ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆಗಳೂ ವರದಿಯಾಗಿವೆ. ಅಷ್ಟೇ ಅಲ್ಲದೆ, ವಿದ್ಯಾರ್ಥಿಗಳು ಜಲಂಧರ್-ಫಾಗ್ವಾರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-44 (NH-44) ಅನ್ನು ತಡೆದು ಸುಮಾರು 15 ಗಂಟೆಗಳ ಕಾಲ ಧರಣಿ ನಡೆಸಿದರು. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನ ಸಂಚಾರ ಸಂಪೂರ್ಣವಾಗಿ ಜಾಮಾಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ಹತೋಟಿಗೆ ತರಲು ಲಾಠಿಚಾರ್ಜ್ ನಡೆಸಿದಾಗ, ಪ್ರತಿಯಾಗಿ ಕಲ್ಲುತೂರಾಟವೂ ನಡೆಯಿತು.
ಕ್ಯಾಂಪಸ್‌ನಲ್ಲಿ ಇಂಟರ್ನೆಟ್ ಬಂದ್
ಕ್ಯಾಂಪಸ್‌ನಲ್ಲಿ ಹೆಚ್ಚಿನ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಫಾಗ್ವಾರ ಮತ್ತು ಎಲ್‌ಪಿಯು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, 2,000ಕ್ಕೂ ಹೆಚ್ಚು ಸಿಆರ್‌ಪಿಎಫ್ ಮತ್ತು ಪಂಜಾಬ್ ಪೊಲೀಸ್ ಸಿಬ್ಬಂದಿಯನ್ನು ಕ್ಯಾಂಪಸ್‌ನಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿದೆ. ಪ್ರಸ್ತುತ ರಾಷ್ಟ್ರೀಯ ಹೆದ್ದಾರಿಯ ತಡೆಯನ್ನು ತೆರವುಗೊಳಿಸಲಾಗಿದ್ದು, ವಾಹನ ಸಂಚಾರವನ್ನು ಪುನರಾರಂಭಿಸಲಾಗಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಅವರಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸುವಂತೆ ಸೂಚಿಸಿದ್ದಾರೆ. ಘಟನೆಯ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಹಿಂಸಾಚಾರಕ್ಕೆ ಪ್ರಚೋದನೆ ನೀಡಿದವರು ಮತ್ತು ವದಂತಿ ಹರಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಎಲ್‌ಪಿಯು ಆಡಳಿತ ಮಂಡಳಿಯು ಸ್ಪಷ್ಟನೆ ನೀಡಿದ್ದು, ʼʼಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾದದ್ದು ಮತ್ತು ಸುಳ್ಳು ವದಂತಿಗಳುʼʼ ಎಂದು ಹೇಳಿದೆ. ಕ್ಯಾಂಪಸ್‌ನಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಸಂಸ್ಥೆ ತಿಳಿಸಿದೆ. ಆದರೂ, ಪರಿಸ್ಥಿತಿಯನ್ನು ತಿಳಿಗೊಳಿಸುವ ಉದ್ದೇಶದಿಂದ ವಿಶ್ವವಿದ್ಯಾಲಯವು 10 ದಿನಗಳ ಕಾಲ ತರಗತಿಗಳನ್ನು ರದ್ದುಗೊಳಿಸಿದ್ದು, ನಡೆಯಬೇಕಿದ್ದ ಮಧ್ಯಂತರ ಪರೀಕ್ಷೆಗಳನ್ನು ಮುಂದೂಡಿದೆ.