ʼʼಪ್ರಜಾಪ್ರಭುತ್ವ ತಾಯಿಯನ್ನು ಮೌನವಾಗಿಸಿದ ಕೇಂದ್ರʼʼ: 500ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಕ್ರಮ ಖಂಡಿಸಿದ ಮಲ್ಲಿಕಾರ್ಜುನ ಖರ್ಗೆ
Mallikarjun Kharge: ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಉದ್ದೇಶಿಸಿದ್ದ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿ, ಜಂತರ್ ಮಂತರ್ ತಲುಪಲು ಯತ್ನಿಸಿದ 500ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ. ಈ ಕ್ರಮವನ್ನು ಖಂಡಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಸರ್ಕಾರವು ‘ಪ್ರಜಾಪ್ರಭುತ್ವ ತಾಯಿ’ಯನ್ನು ‘ಮೌನಗೊಳಿಸಿದ ಪ್ರಜಾಪ್ರಭುತ್ವ’ವನ್ನಾಗಿ ಮಾಡಿದೆ ಎಂದು ಆರೋಪಿಸಿದ್ದಾರೆ. ಯುವಕರು, ವಿದ್ಯಾರ್ಥಿಗಳು, ಪತ್ರಕರ್ತರು ಹಾಗೂ ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಲಾಗುತ್ತಿದೆ ಎಂದು ದೂರಿದ ಅವರು, ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗೆ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದು ಹೇಳಿದ್ದಾರೆ.
ಮಲ್ಲಿಕಾರ್ಜುನ್ ಖರ್ಗೆ (ಸಂಗ್ರಹ ಚಿತ್ರ) -
ನವದೆಹಲಿ. ಅ. 10: ಭಾರತದ ಸ್ವಾತಂತ್ರ್ಯ ಹೋರಾಟದ ದಿನಗಳಿಂದಲೂ ಯುವಕರು ದೇಶದ ಭವಿಷ್ಯವನ್ನುರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಾಂಗ್ರೆಸ್ ಒಗ್ಗಟ್ಟಿನಿಂದ ಸೇರಿ ಈ ಸರ್ವಾಧಿಕಾರಿ ಆಡಳಿತದ ವಿರುದ್ಧ ತೀವ್ರ ಹೋರಾಟ ನಡೆಸಲಿದೆ ಎಂದು ಅವರು ತಿಳಿಸಿದ್ದಾರೆ. ಭಾರತದ ಸ್ವಾತಂತ್ರ್ಯಕ್ಕಾಗಿ ನಾವು ನಮ್ಮ ರಕ್ತವನ್ನು ಹರಿಸಿದ್ದೇವೆ. ನಮ್ಮ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಪ್ರತಿಯೊಬ್ಬ ಭಾರತೀಯನ ಮೂಲಭೂತ ಹಕ್ಕುಗಳನ್ನು ರಕ್ಷಿಸಲು ನಮ್ಮ ಶಕ್ತಿಮೀರಿ ಹೋರಾಟ ಮುಂದುವರಿಸುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.
ಎಸ್‌ಐಆರ್ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ತಡೆದ ಕೇಂದ್ರ ಸರ್ಕಾರದ ನಡೆಯನ್ನು ಅವರು ಪ್ರಶ್ನಿಸಿದ್ದಾರೆ. ಪ್ರತಿಭಟನಾಕಾರರು ದೆಹಲಿಯ ಜಂತರ್ ಮಂತರ್ ತಲುಪುವುದನ್ನು ತಡೆಯಲು ನವದೆಹಲಿಯ ವಿವಿಧ ಪ್ರದೇಶಗಳಲ್ಲಿ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ಪ್ರತಿಭಟನಾ ಸ್ಥಳದತ್ತ ತೆರಳಲು ಯತ್ನಿಸುತ್ತಿದ್ದ ಜನರ ಚಲನವಲನಗಳ ಮೇಲೆ ನಿಗಾ ಇಡಲು ಡ್ರೋನ್‌ಗಳನ್ನು ಬಳಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಭದ್ರತಾ ಕಾರಣಗಳು ಮತ್ತು ಅಗತ್ಯ ಪ್ರಕ್ರಿಯೆಗಳನ್ನು ಉಲ್ಲೇಖಿಸಿ, ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ತಿರುಚುವಿಕೆ ನಡೆದಿದೆ ಹಾಗೂ ಮತದಾರರ ನೋಂದಣಿಗೆ ಬಳಸುವ ಫಾರ್ಮ್ 6 ಸಂಬಂಧಿತ ಬದಲಾವಣೆಗಳಾಗಿವೆ ಎಂಬ ಆರೋಪಗಳನ್ನು ಮುಂದಿಟ್ಟುಕೊಂಡು ಸಿಜೆಸಿ ಪ್ರತಿಭಟನೆಗೆ ಕರೆ ನೀಡಿತ್ತು. ಈ ಬೆಳವಣಿಗೆಯು ರಾಷ್ಟ್ರ ರಾಜಧಾನಿಯಲ್ಲಿ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದು, ಪ್ರತಿಭಟನೆಯನ್ನು ತಡೆಯುವ ಪೊಲೀಸರ ಕ್ರಮವನ್ನು ಕಾಂಗ್ರೆಸ್ ಪ್ರಶ್ನಿಸಿದೆ. ಮತ್ತೊಂದೆಡೆ, ಪೊಲೀಸರು ಭದ್ರತಾ ಕಾರಣಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದಾರೆ.