“ಜಾರ್ಖಂಡ್ ಪ್ರತಿಭಟನಾಕಾರರನ್ನು ಭೇಟಿ ಮಾಡಿ”: ಸಿಎಂ ಹೇಮಂತ್ ಸೊರೇನ್‌ಗೆ ರಾಹುಲ್ ಗಾಂಧಿ ಪತ್ರ
Rahul Gandhi Writes to Jharkhand CM: ರಾಜ್ಯದ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಭೇಟಿ ಮಾಡಿ, ಸಮಸ್ಯೆ ಆಲಿಸುವಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.
ಸಾಂದರ್ಭಿಕ ಚಿತ್ರ -
ನವದೆಹಲಿ, ಆ.17: ರಾಜ್ಯದ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಭೇಟಿ ಮಾಡಿ, ಸಮಸ್ಯೆ ಆಲಿಸುವಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ (Hemant Soren) ಅವರಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಮನವಿ ಮಾಡಿದ್ದಾರೆ. ಆಗಸ್ಟ್ 14 ರಂದು ಸೋರೆನ್ ಅವರಿಗೆ ಬರೆದ ಪತ್ರದಲ್ಲಿ, ಸೋಮವಾರ (ಆ.17) 24ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆಗಳು ಶಾಂತಿಯುತವಾಗಿವೆ ಮತ್ತು ಅವರ ಬೇಡಿಕೆಗಳು ನ್ಯಾಯಸಮ್ಮತವಾಗಿವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
“ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಶಾಂತಿಯುತ ಪ್ರತಿಭಟನೆಯ ಹಕ್ಕು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭಗಳಲ್ಲಿ ಒಂದಾಗಿದೆ ಎಂಬುದು ಕಾಂಗ್ರೆಸ್ ಪಕ್ಷದ ನಂಬಿಕೆ. ಹೀಗಾಗಿ, ಕಳೆದ ಕೆಲವು ತಿಂಗಳುಗಳಿಂದ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನಾವು ಸಂಪೂರ್ಣ ಬೆಂಬಲ ನೀಡಿದ್ದೇವೆ” ಎಂದು ಅವರು ಹೇಳಿದರು.
ಜಾರ್ಖಂಡ್ ಸರ್ಕಾರವು ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ಪ್ರಾರಂಭಿಸಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶ್ಲಾಘಿಸಿದರು. “ವಿದ್ಯಾರ್ಥಿಗಳು ಮಂಡಿಸಿರುವ ಹಲವಾರು ಬೇಡಿಕೆಗಳ ಕುರಿತು ಈಗಾಗಲೇ ಒಮ್ಮತ ಮೂಡಿದೆ ಎಂದು ನಾನು ನಂಬುತ್ತೇನೆ. ಆದರೆ, ಪ್ರತಿಭಟನೆಗಳು ಮುಂದುವರಿದಿವೆ. ಕೆಲವು ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿದ್ದಾರೆ. ಆದ್ದರಿಂದ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಪ್ರತಿನಿಧಿಗಳನ್ನು ನೀವು ವೈಯಕ್ತಿಕವಾಗಿ ಭೇಟಿ ಮಾಡಬೇಕೆಂದು ನಾನು ಈ ಪತ್ರದ ಮೂಲಕ ಸಲಹೆ ನೀಡುತ್ತಿದ್ದೇನೆ” ಎಂದು ಅವರು ಹೇಳಿದರು.
ಈ ಕ್ರಮವು ವಿದ್ಯಾರ್ಥಿಗಳ ಕಳವಳಗಳನ್ನು ಪರಿಹರಿಸಲು ಸರ್ಕಾರದ ಬದ್ಧತೆಯನ್ನು ಮತ್ತಷ್ಟು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು. ಒಂದು ವೇಳೆ ಮುಖ್ಯಮಂತ್ರಿ ನಿಮ್ಮ ಮಾತನ್ನು ಕೇಳದಿದ್ದರೆ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ನೇತೃತ್ವದ ಮೈತ್ರಿಕೂಟಕ್ಕೆ ನೀಡಿರುವ ಬೆಂಬಲವನ್ನು ಹಿಂತೆಗೆದುಕೊಳ್ಳುವಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ರಾಹುಲ್ ಗಾಂಧಿ ಅವರಿಗೆ ಒತ್ತಾಯಿಸಿದ್ದರು.
ರಾಹುಲ್ ಗಾಂಧಿ ತಮಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಯಾವುದೇ ನಿರ್ದಿಷ್ಟ ಕ್ರಮ ಅನುಸರಿಸಿಲ್ಲ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹೇಳಿದರು. 2024 ರಿಂದ ನಾಲ್ಕನೇ ಅವಧಿಗೆ ಸೇವೆ ಸಲ್ಲಿಸುತ್ತಿರುವ ಸೊರೆನ್ ಅವರ ರಾಜೀನಾಮೆಗೆ ಅವರು ಒತ್ತಾಯಿಸಿದ್ದಾರೆ. ಆಗಸ್ಟ್ 20 ರಂದು ಅವರ ನಿವಾಸದ ಹೊರಗೆ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾ ನಿರತರು ಘೋಷಿಸಿದ್ದಾರೆ.
ಜಾರ್ಖಂಡ್ ಪ್ರತಿಭಟನಾಕಾರರ ಬೇಡಿಕೆಗಳೇನು?
ವಿದ್ಯಾರ್ಥಿ ನಾಯಕ ದೇವೇಂದ್ರ ನಾಥ್ ಮಹ್ತೊ ನೇತೃತ್ವದಲ್ಲಿ , ಜುಲೈ 29 ರಿಂದ ರಾಂಚಿಯ ಜೈಪಾಲ್ ಸಿಂಗ್ ಕ್ರೀಡಾಂಗಣದಲ್ಲಿ ಹೆಚ್ಚಿನ ಸಂಖ್ಯೆಯ ಉದ್ಯೋಗಾಕಾಂಕ್ಷಿಗಳು ಧರಣಿ ನಡೆಸುತ್ತಿದ್ದಾರೆ. 14ನೇ ಜಾರ್ಖಂಡ್ ಪಬ್ಲಿಕ್ ಸರ್ವಿಸ್ ಕಮಿಷನ್ (ಜೆಪಿಎಸ್‌ಸಿ) ನಾಗರಿಕ ಸೇವೆಗಳ ಪರೀಕ್ಷೆ, ಜಾರ್ಖಂಡ್ ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (ಜೆಎಸ್‌ಎಸ್‌ಸಿ-ಸಿಜಿಎಲ್) ಪರೀಕ್ಷೆ ಮತ್ತು ಇತರ ನೇಮಕಾತಿ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಅವರು ಈ ಪ್ರತಿಭಟನೆ ನಡೆಸುತ್ತಿದ್ದಾರೆ.