ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರ ದಾಳಿ: ವಲಸೆ ಕಾರ್ಮಿಕನ ಹತ್ಯೆ, ಮರ್ತೋರ್ವ ಗಾಯ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ವಲಸೆ ಕಾರ್ಮಿಕ ಮೃತಪಟ್ಟಿದ್ದು, ಮತೋರ್ವ ಗಾಯಗೊಂಡಿದ್ದಾರೆ. ಶುಕ್ರವಾರ ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಕೆಲ್ಲಂ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕುಲ್ಗಾಂನಲ್ಲಿ ಉಗ್ರರ ದಾಳಿ: ವಲಸೆ ಕಾರ್ಮಿಕನ ಹತ್ಯೆ, ಮತ್ತೋರ್ವ ಗಾಯ

ಕುಲ್ಗಾಂ ಉಗ್ರರ ಗುಂಡಿನ ದಾಳಿಯಲ್ಲಿ ವಲಸೆ ಕಾರ್ಮಿಕ ಸಾವು. -

Profile
Ramesh Kote Jul 31, 2026 11:30 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಕೆಲ್ಲಂ ಪ್ರದೇಶದಲ್ಲಿ ಶುಕ್ರವಾರ ಸಂಜೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಛತ್ತೀಸ್‌ಗಢ ಮೂಲದ ಓರ್ವ ವಲಸೆ ಕಾರ್ಮಿಕ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಇಬ್ಬರು ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಗೊಂಡ ಇಬ್ಬರನ್ನೂ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ದೀಪಕ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತ ಹಾಗೂ ಗಾಯಾಳುವನ್ನು ಛತ್ತೀಸ್‌ಗಢ ಮೂಲದ ದೀಪಕ್ ಮತ್ತು ಭೂಪೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ದೀಪಕ್ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಗಾಯಗೊಂಡಿರುವ ಭೂಪೇಂದ್ರ ಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅನಂತನಾಗ್ ಸರ್ಕಾರಿ ವೈದ್ಯಕೀಯ ಕಾಲೇಜು (GMC) ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಘಟನೆಯ ಬಳಿಕ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಉಗ್ರರ ಪತ್ತೆಗೆ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿವೆ. ದಾಳಿಯ ಹಿಂದಿನ ಉದ್ದೇಶ ಹಾಗೂ ಇತರ ವಿವರಗಳ ಕುರಿತು ತನಿಖೆ ಮುಂದುವರಿದಿದೆ.

ಎಲ್‌ಒಸಿ ಬಳಿ ಪಾಕಿಸ್ತಾನದ ಸ್ಪೈ ಡ್ರೋನ್ ಹೊಡೆದುರುಳಿಸಿದ ಭಾರತೀಯ ಸೇನೆ; ಮೆಮೊರಿ ಕಾರ್ಡ್ ವಶಕ್ಕೆ

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಪ್ರತಿಕ್ರಿಯೆ

ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಇದು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ. ದಾಳಿಕೋರರನ್ನು ಶೀಘ್ರ ಬಂಧಿಸುವಂತೆ ಹಾಗೂ ಅವರ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸುವಂತೆ ಭದ್ರತಾ ಪಡೆಗಳಿಗೆ ನಿರ್ದೇಶನ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

"ಈ ಹೇಡಿತನದ ಕೃತ್ಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿ, ಅವರನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವಂತೆ ಭದ್ರತಾ ಪಡೆಗಳಿಗೆ ನಿರ್ದೇಶನ ನೀಡಿದ್ದೇನೆ," ಎಂದು ಅವರು ಹೇಳಿದ್ದಾರೆ.

ದಾಳಿ ನಡೆದ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಆರೋಪಿಗಳನ್ನು ಬಂಧಿಸಲು ವ್ಯಾಪಕ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಸಿನ್ಹಾ ತಿಳಿಸಿದ್ದಾರೆ. ಗಾಯಗೊಂಡ ಕಾರ್ಮಿಕನನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

"ನನ್ನ ತಂದೆಯನ್ನು ಎಳೆದು ಹೊಡೆದರು"; ಜಂತರ್ ಮಂತರ್ ಪ್ರತಿಭಟನೆಯಲ್ಲಿ ಪೊಲೀಸರ ಮೇಲಿನ ಹಲ್ಲೆ ಬಗ್ಗೆ ಕುಟುಂಬ ಹೇಳಿದ್ದೇನು?

ಮೃತ ಕಾರ್ಮಿಕನ ಕುಟುಂಬಕ್ಕೆ ಸಂತಾಪ ಸೂಚಿಸಿದ ಲೆಫ್ಟಿನೆಂಟ್ ಗವರ್ನರ್, ಜಮ್ಮು ಮತ್ತು ಕಾಶ್ಮೀರ ಆಡಳಿತ ಹಾಗೂ ಇಡೀ ದೇಶ, ಸಂತ್ರಸ್ತರ ಕುಟುಂಬದೊಂದಿಗೆ ನಿಂತಿದೆ ಎಂದು ಹೇಳಿದ್ದಾರೆ. ಅಲ್ಲದೆ, ಗಾಯಗೊಂಡಿರುವ ಕಾರ್ಮಿಕ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಶಂಕಿತ ಉಗ್ರರ ಅಡಗುತಾಣ ಪತ್ತೆ

ಗುರುವಾರ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಭಂಗೈ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಶಂಕಿತ ಉಗ್ರರ ಅಡಗುತಾಣವನ್ನು ಪತ್ತೆ ಹಚ್ಚಿದ್ದು, ಅಲ್ಲಿಂದ ಆಹಾರ ಸಾಮಗ್ರಿಗಳು ಸೇರಿದಂತೆ ಉಗ್ರರು ಬಳಸಿದ್ದರೆಂದು ಶಂಕಿಸಲಾದ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಸಂಜೆ ತನಮಂಡಿ ವಲಯದಲ್ಲಿ ನಡೆಸಿದ ಪ್ರದೇಶ ನಿಯಂತ್ರಣ (Area Domination) ಹಾಗೂ ಶೋಧ ಕಾರ್ಯಾಚರಣೆ ವೇಳೆ ಈ ಅಡಗುತಾಣ ಪತ್ತೆಯಾಗಿದೆ. ದಟ್ಟವಾದ ಕಾಡು ಮತ್ತು ಪೊದೆಗಳ ಮಧ್ಯೆ ಈ ಅಡಗುತಾಣವನ್ನು ನಿರ್ಮಿಸಲಾಗಿದ್ದು, ಉಗ್ರರು ಇದನ್ನು ಆಶ್ರಯವಾಗಿ ಬಳಸುತ್ತಿದ್ದರು ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.