ನವದೆಹಲಿ: ನೀಟ್ - ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧದ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ನೀಡುವವರೆಗೆ ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ಪ್ರತಿಭಟನೆ ನಿರಂತರವಾಗಿ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (Cockroach Janta Party (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಘೋಷಿಸಿದ್ದಾರೆ.
ಶುಕ್ರವಾರ ಬಿಡುಗಡೆ ಮಾಡಿದ ವಿಡಿಯೊ ಸಂದೇಶದಲ್ಲಿ ಮಾತನಾಡಿದ ಅವರು, ಹವಾಮಾನ ಹೋರಾಟಗಾರ ಹಾಗೂ ಶಿಕ್ಷಣ ಸುಧಾರಣಾ ಹೋರಾಟಗಾರ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸವನ್ನು ಅಂತ್ಯಗೊಳಿಸಿದ್ದರೂ, ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಆರಂಭಗೊಂಡಿರುವ ಹೋರಾಟ ಯಾವ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.
"ಸೋನಂ ವಾಂಗ್ಚುಕ್ ಅವರ ಆರೋಗ್ಯ ದೇಶಕ್ಕೆ ಅಮೂಲ್ಯ. ಅವರು 26 ದಿನಗಳ ಕಾಲ ನಡೆಸಿದ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ. ದೆಹಲಿ ಪೊಲೀಸರ ಕ್ರಮಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ," ಎಂದು ದೀಪ್ಕೆ ಹೇಳಿದರು.
26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್
ಗುರುಗ್ರಾಮದ ಮೆಡಾಂಟಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋನಂ ವಾಂಗ್ಚುಕ್ ಅವರು ಗುರುವಾರ ರಾತ್ರಿ 26 ದಿನಗಳ ಅನಿರ್ದಿಷ್ಟಾವಧಿ ಉಪವಾಸವನ್ನು ಅಂತ್ಯಗೊಳಿಸಿದರು. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿ, ವಾಂಗ್ಚುಕ್ ಅವರಿಗೆ ಜ್ಯೂಸ್ ನೀಡುವ ಮೂಲಕ ಉಪವಾಸ ಮುಕ್ತಾಯಗೊಳಿಸಿದರು.
ವಾಂಗ್ಚುಕ್ ಅವರು ನೀಟ್ - ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದು, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕು ಹಾಗೂ ಜವಾಬ್ದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಉಪವಾಸ ಆರಂಭಿಸಿದ್ದರು.
ಪ್ರಧಾನಿ ಮೋದಿ ಭರವಸೆ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ವಿಶೇಷ ವಿಡಿಯೊ ಸಂದೇಶ ಬಿಡುಗಡೆ ಮಾಡಿದರು. ಪ್ರಶ್ನೆಪತ್ರಿಕೆ ಸೋರಿಕೆ ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳಲ್ಲಿ ಆತಂಕ ಉಂಟುಮಾಡಿದೆ ಎಂದು ಅವರು ಹೇಳಿದರು.
ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ತಿಳಿಸಿದ ಪ್ರಧಾನಿ, ವಿದ್ಯಾರ್ಥಿಗಳು ಒಂದು ಶೈಕ್ಷಣಿಕ ವರ್ಷ ಕಳೆದುಕೊಳ್ಳದಂತೆ ಕ್ರಮ ಕೈಗೊಳ್ಳುವುದು ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿದರು. ಜೊತೆಗೆ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲಾಗುವುದು ಎಂದರು.
ವಿಪಕ್ಷಗಳಿಗೆ ಸವಾಲ್; ನೀಟ್ ವಿವಾದದ ಕುರಿತು ಚರ್ಚೆಗೆ ಆಹ್ವಾನ ನೀಡಿದ ಕಿರಣ್ ರಿಜುಜು
ಹೊಸ ಕಾನೂನು ತರಲು ಸರ್ಕಾರ ಸಜ್ಜು
ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಫಾಸ್ಟ್-ಟ್ರಾಕ್ ನ್ಯಾಯಾಂಗ ವ್ಯವಸ್ಥೆ ರೂಪಿಸುವ ಪ್ರಸ್ತಾವನೆಯನ್ನು ಸರ್ಕಾರ ಸಿದ್ಧಪಡಿಸಿದೆ ಎಂದು ಪ್ರಧಾನಿ ಮೋದಿ ಘೋಷಿಸಿದರು. ಸಂಬಂಧಿತ ಇಲಾಖೆಗಳೊಂದಿಗೆ ಚರ್ಚಿಸಿದ ಬಳಿಕ ಈ ಪ್ರಸ್ತಾವನೆಗೆ ಅನುಮೋದನೆ ದೊರೆತಿದ್ದು, ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯ ತಿದ್ದುಪಡಿ ಬಳಿಕ ಸಂಸತ್ತಿನ ಮುಂಗಾರು ಅಧಿವೇಶನದ ಎರಡನೇ ವಾರದಲ್ಲಿ ಹೊಸ ಮಸೂದೆ ಮಂಡಿಸುವ ಉದ್ದೇಶವಿದೆ ಎಂದು ತಿಳಿಸಿದರು.
ರಾಜಕೀಯ ವಾಗ್ವಾದ ಮುಂದುವರಿಕೆ
ನೀಟ್ - ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದಾದ್ಯಂತ ರಾಜಕೀಯ ಚರ್ಚೆಗೆ ಕಾರಣವಾಗಿದೆ. ವಿರೋಧ ಪಕ್ಷಗಳು ಕೇಂದ್ರ ಸರ್ಕಾರ ಹಾಗೂ ಶಿಕ್ಷಣ ಸಚಿವರ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದು, ವಿದ್ಯಾರ್ಥಿ ಸಂಘಟನೆಗಳು ಮತ್ತು ವಿವಿಧ ಸಾಮಾಜಿಕ ಸಂಘಟನೆಗಳು ಪಾರದರ್ಶಕ ತನಿಖೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗಾಗಿ ಒತ್ತಾಯಿಸುತ್ತಿವೆ.
ಈ ನಡುವೆ, ಕಾಕ್ರೋಚ್ ಜನತಾ ಪಾರ್ಟಿ ತನ್ನ ಪ್ರತಿಭಟನೆಯನ್ನು ಜಂತರ್ ಮಂತರ್‌ನಲ್ಲಿ ಮುಂದುವರಿಸುವುದಾಗಿ ಘೋಷಿಸಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಹೋರಾಟ ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದೆ.