ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆಗಳನ್ನು (delhi protest) ನಡೆಸಲು ಮೂರು ಹೊಸ ಸ್ಥಳಗಳನ್ನು ನಿಗದಿಪಡಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯವು (Union Ministry of Home Affairs) ರಚಿಸಿದ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಮೂರು ಸ್ಥಳಗಳೆಂದರೆ ರಾಮ್‌ಲೀಲಾ ಮೈದಾನ, ಬುರಾರಿ ಮೈದಾನ ಮತ್ತು ಪೂರ್ವ ದೆಹಲಿಯ ಸಿಬಿಡಿ ಮೈದಾನ (Ramlila Ground, Burari Ground and CBD Ground). ಇದರೊಂದಿಗೆ ಜಂತರ್ ಮಂತರ್ (Jantar Mantar) ಅನ್ನು ಪ್ರತಿಭಟನಾ ಸ್ಥಳದ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ದೆಹಲಿ ಪೊಲೀಸರು (delhi police) ತಿಳಿಸಿದ್ದಾರೆ.
ಕಾಕ್ರೋಚ್ ಜನತಾ ಪಕ್ಷ, ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದ ವತಿಯಿಂದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ಮತ್ತು ಪ್ರದರ್ಶನಗಳನ್ನು ನಡೆಸಲು ದೆಹಲಿ ಪೊಲೀಸರು ಮೂರು ಹೊಸ ಸ್ಥಳಗಳನ್ನು ನಿಗದಿಪಡಿಸಿದ್ದಾರೆ.
ಹುದ್ದೆ ಬಿಡುವವರೆಗೂ ನಿದ್ದೆ ಮಾಡದಂತೆ ಮಾಡುತ್ತೇವೆ: ಜ್ಞಾನೇಶ್ ಕುಮಾರ್‌ಗೆ ರಾಹುಲ್ ಗಾಂಧಿ ಎಚ್ಚರಿಕೆ
ರಾಮ್‌ಲೀಲಾ ಮೈದಾನ, ಬುರಾರಿ ಮೈದಾನ ಮತ್ತು ಪೂರ್ವ ದೆಹಲಿಯ ಸಿಬಿಡಿ ಮೈದಾನದಲ್ಲಿ ಮಾತ್ರ ಪ್ರತಿಭಟನೆ ಮತ್ತು ಪ್ರದರ್ಶನಗಳನ್ನು ಆಯೋಜಿಸುವ ನಾಗರಿಕರ ಹಕ್ಕನ್ನು ಚಲಾಯಿಸಲು ಸ್ಥಳಗಳನ್ನು ನಿಗದಿ ಪಡಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯವು ರಚಿಸಿದ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಈ ಮೂರು ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ಆಯೋಜಿಸಲು ವಿವರವಾದ ಮತ್ತು ಪರಿಷ್ಕೃತ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾ ಬ್ಲಾಕ್, ಕಾಕ್ರೋಚ್ ಜನತಾ ಪಾರ್ಟಿ, ನಾಗರಿಕ ಸಮಾಜ ಗುಂಪುಗಳು, ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ ಮತ್ತು ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಸೇರಿದಂತೆ ವಿದ್ಯಾರ್ಥಿ ಸಂಘಟನೆಗಳು ನವದೆಹಲಿಯ ಜಂತರ್ ಮಂತರ್ ಸುತ್ತಮುತ್ತ ಪ್ರತಿಭಟನೆ ಮತ್ತು ಮೆರವಣಿಗೆಗಳನ್ನು ನಡೆಸಲು ಯೋಜಿಸುತ್ತಿರುವ ಸಮಯದಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸುವ ಪ್ರತಿಭಟನೆಗಳಿಗೆ ಜಂತರ್ ಮಂತರ್ ಅನ್ನು ಸಿಜೆಪಿ ಮತ್ತು ಇಂಡಿಯಾ ಒಕ್ಕೂಟ ಮುಖ್ಯ ಸ್ಥಳವನ್ನಾಗಿ ರೂಪಿಸಲು ಪ್ರಯತ್ನಿಸುತ್ತಿತ್ತು. ಹೀಗಾಗಿ ದೆಹಲಿಯಲ್ಲಿ ಜನದಟ್ಟಣೆಯನ್ನು ನಿಯಂತ್ರಿಯೋಸಲು ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ ಎನ್ನಲಾಗಿದೆ.
ಇಂಡಿಯಾ ಒಕ್ಕೂಟದ ಪ್ರತಿಭಟನೆ ನಡುವೆ ದೆಹಲಿಯಲ್ಲಿ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕಳೆದ ಜೂನ್ ನಲ್ಲಿ ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಜಂತರ್ ಮಂತರ್ ಪ್ರಮುಖ ಕೇಂದ್ರವಾಗಿತ್ತು. ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬಳಿಕ ಕೊನೆಗೊಂಡಿತ್ತು.