BR Ambedkar Birth Anniversary: ಅಂಬೇಡ್ಕರ್ 134ನೇ ಜನ್ಮ ದಿನಾಚರಣೆ; ಪ್ರಧಾನಿ, ರಾಷ್ಟ್ರಪತಿ ಸಹಿತ ಗಣ್ಯರಿಂದ ಗೌರವ ನಮನ
ಏ. 14-ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನಾಚರಣೆ. ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ದಿಲ್ಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸಹಿತ ಉನ್ನತ ರಾಜಕೀಯ ನಾಯಕರು ಪುಷ್ಪ ನಮನ ಸಲ್ಲಿಸಿದರು.



"ನಮ್ಮ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಎಲ್ಲರಿಗೂ ಸ್ಫೂರ್ತಿದಾಯಕ. ತೀವ್ರ ಸಮಸ್ಯೆಯ ನಡುವೆಯೂ ಅವರು ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಪ್ರಪಂಚದಾದ್ಯಂತ ಗೌರವವನ್ನು ಗಳಿಸಿದ್ದಾರೆ" ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ಅಂಬೇಡ್ಕರ್ ಅವರ ಸ್ಫೂರ್ತಿಯಿಂದಾಗಿ ದೇಶದ ಸಾಮಾಜಿಕ ನ್ಯಾಯದ ಕನಸು ನನಸಾಗಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು. ʼʼಅವರ ತತ್ವಗಳು ಮತ್ತು ಆಲೋಚನೆಗಳು 'ಆತ್ಮನಿರ್ಭರ' ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣದ ಗುರಿಯನ್ನು ಬಲಪಡಿಸುತ್ತವೆʼʼ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ನ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತಿತರರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದರು. ಅಂಬೇಡ್ಕರ್ ಅವರ ಜನ್ಮ ದಿನದ ಪ್ರಯುಕ್ತ ವಿವಿಧ ಕಡೆಗಳಲ್ಲಿ ಸೆಮಿನಾರ್ಗಳನ್ನು ಆಯೋಜಿಸಲಾಗಿದೆ.

ಅನ್ಯಾಯ, ಶೋಷಣೆ, ಅಸ್ಪೃಶ್ಯತೆ ಮೊದಲಾದ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿದ ಅಂಬೇಡ್ಕರ್ ಅವರು ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥ ಸಂವಿಧಾನದ ಕರ್ತೃ ಇವರು. ಹೀಗಾಗಿ ಪ್ರತಿ ವರ್ಷ ಇವರ ಕೊಡುಗೆಯನ್ನು ಸ್ಮರಿಸಲಾಗುತ್ತದೆ.

ಅಂಬೇಡ್ಕರ್ ಅವರಿಗೆ ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಕೂಡ ಗೌರವ ಸಲ್ಲಿಸಿದರು. ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಸಂಸತ್ ಭವನದ ಸಂಕೀರ್ಣಕ್ಕೆ ತೆರಳಿದ ಅವರು ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು. 1891ರಂದು ಜನಿಸಿದ ಅಂಬೇಡ್ಕರ್ ಅವರ 134ನೇ ಜನ್ಮ ದಿನ ಆಚರಿಸಲಾಗುತ್ತಿದೆ.