ನವದೆಹಲಿ: 18ನೇ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕಾಗಮಿಸಿದ್ದಾರೆ. ಗುರುವಾರ ತಡರಾತ್ರಿ ದೆಹಲಿಯ ಪಾಲಂ ವಾಯುಪಡೆ ನಿಲ್ದಾಣಕ್ಕೆ ಬಂದಿಳಿದ ಪುಟಿನ್ ( Vladimir Putin) ಅವರನ್ನು ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಸ್ವಾಗತಿಸಿದರು. ಶೃಂಗಸಭೆಗೂ ಮುನ್ನ ಇಂದು ವ್ಲಾಡಿಮಿರ್ ಪುಟಿನ್ ಭಾರತದ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ದ್ವೀಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಈ ಕುರಿತು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್ ತಮ್ಮ ಅಧಿಕೃತ X ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿದ್ದು, "18 ನೇ ಬ್ರಿಕ್ಸ್ ಶೃಂಗಸಭೆಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಗಿದ್ದು, ಸಚಿವ ಕೆ.ವಿ.ಸಿಂಗ್.ಎಂ.ಪಿ.ಗೊಂಡ ಅವರು ದೆಹಲಿ ವಿಮಾನ ನಿಲ್ದಾಣದಲ್ಲಿ ಪುಟಿನ್‌ರನ್ನು ಬರಮಾಡಿಕೊಂಡಿದ್ದಾರೆ. ಭಾರತ ಮತ್ತು ರಷ್ಯಾ ವಿಶೇಷ ಮತ್ತು ಸವಲತ್ತು ಪಡೆದ ಕಾರ್ಯತಂತ್ರದ ಸಹಭಾಗಿತ್ವದಲ್ಲಿ ನೆಲೆಗೊಂಡಿರುವ ಬಹುಮುಖ ಮತ್ತು ದೀರ್ಘಕಾಲದ ಸಂಬಂಧಗಳನ್ನು ಹಂಚಿಕೊಂಡಿವೆ" ಎಂದು ತಿಳಿಸಿದ್ದಾರೆ.
ಶೃಂಗಸಭೆಗೂ ಮುನ್ನ ಇಂದು ನಡೆಯಲಿರುವ ಬ್ರಿಕ್ಸ್ ಬಿಸಿನೆಸ್ ಫೋರಂನ ಸಮಗ್ರ ಅಧಿವೇಶನವನ್ನು ಉದ್ದೇಶಿಸಿ ಪುಟಿನ್ ಮಾತನಾಡಲಿದ್ದಾರೆ. ಇದಾದ ಬಳಿಕ ನರೇಂದ್ರ ಮೋದಿ ಹಾಗೂ ವ್ಲಾಡಿಮಿರ್ ಪುಟಿನ್ ನಡುವೆ ಇಂದು ದ್ವೀಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಇದಾದ ಬಳಿಕ ರಷ್ಯಾದ ಅಧ್ಯಕ್ಷ ಪುಟಿನ್ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ, ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಮತ್ತು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಸೇರಿದಂತೆ ಇತರ ಅಂತಾರಾಷ್ಟ್ರೀಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.
ಪ್ರಸ್ತುತ ಅಧ್ಯಕ್ಷತೆ ವಹಿಸಿರುವ ಭಾರತವು ಬ್ರಿಕ್ಸ್ ಶೃಂಗಸಭೆಯನ್ನು ಆಯೋಜಿಸುತ್ತಿದೆ. ಭಾರತದ ಬ್ರಿಕ್ಸ್ ಅಧ್ಯಕ್ಷತೆಯು 'ಸ್ಥಿತಿಸ್ಥಾಪಕತ್ವ, ನಾವೀನ್ಯತೆ, ಸಹಕಾರ ಮತ್ತು ಸುಸ್ಥಿರತೆಗಾಗಿ ನಿರ್ಮಾಣ' ಎಂಬ ಥೀಮ್‌ನಿಂದ ಮಾರ್ಗದರ್ಶಿಸಲ್ಪಟ್ಟಿದೆ. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ, ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ, ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ, ಅಬುಧಾಬಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಮತ್ತು ಇಥಿಯೋಪಿಯಾ ಪ್ರಧಾನಿ ಅಬಿ ಅಹ್ಮದ್ ಅಲಿ ಕೂಡ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Keshava Prasad B Column: ಭಾರತದ ಚಹಾ ಅಂಗಡಿಯಿಂದ ಬ್ರಿಕ್ಸ್ ಯುಪಿಐ ಕ್ರಾಂತಿ !
ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್, ಡಬ್ಲ್ಯುಟಿಒ ಮಹಾನಿರ್ದೇಶಕ ಎನ್ಗೋಜಿ ಒಕೊಂಜೊ-ಇವಾಲಾ, ಡಬ್ಲ್ಯುಎಚ್‌ಒ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ನ್ಯೂ ಡೆವಲಪ್‌ಮೆಂಟ್ ಬ್ಯಾಂಕ್ (ಎನ್‌ಡಿಬಿ) ಅಧ್ಯಕ್ಷೆ ದಿಲ್ಮಾ ರೌಸೆಫ್ ಮತ್ತು ಏಷ್ಯನ್ ಇನ್‌ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ ಮುಖ್ಯಸ್ಥ ಝೌ ಜಿಯಾಯಿ ಅವರು ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.