ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

CEC ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಹೈಡ್ರಾಮಾ; ರಾಹುಲ್‌, ಪ್ರಿಯಾಂಕಾ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ 'ಇಂಡಿಯಾ' ಮೈತ್ರಿಕೂಟ ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ. ಸಾಲು ಸಾಲು ಬ್ಯಾರಿಕೇಡ್‌ಗಳನ್ನು ದಾಟಿ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ವಿಪಕ್ಷ ನಾಯಕರು ಹಾಗೂ ಪೊಲೀಸರ ನಡುವೆ ಭಾರಿ ತಳ್ಳಾಟ ನೂಕಾಟ ನಡೆದಿದೆ.

ಸಂಗ್ರಹ ಚಿತ್ರ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh kumar) ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ (India Bloc) ದೆಹಲಿಯಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯ ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪ್ರಮುಖ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದು, ಕೆಲ ಗಂಟೆಗಳ ಬಳಿಕ ಬಿಡುಗಡೆ ಮಾಡಿದ್ದಾರೆ.

ಚುನಾವಣಾ ಆಯೋಗವು ಆಡಳಿತಾರೂಢ ಸರ್ಕಾರದ ಪರವಾಗಿ ಪಕ್ಷಪಾತ ಧೋರಣೆ ತಳೆದಿದೆ ಹಾಗೂ ಪ್ರಜಾರಾಜಕೀಯ ಮೌಲ್ಯಗಳನ್ನು ಗಾಳಿಗೆ ತೂರಿದೆ ಎಂದು ಆರೋಪಿಸಿ ಪ್ರತಿಪಕ್ಷಗಳ ನಾಯಕರು ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಸಂಸತ್ ಭವನದ ಆವರಣದಿಂದ ಆರಂಭಗೊಂಡ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಕಾಂಗ್ರೆಸ್, ಸಮಾಜವಾದಿ ಪಾರ್ಟಿ, ಟಿಎಂಸಿ, ಡಿಎಂಕೆ ಹಾಗೂ ಎಡಪಕ್ಷಗಳ ನೂರಾರು ಸಂಸದರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ʼಚುನಾವಣಾ ಆಯೋಗದ ಸ್ವಾಯತ್ತತೆ ಕಾಪಾಡಿʼ ಹಾಗೂ ʼಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿʼ ಎಂದು ಬರೆದಿದ್ದ ಫಲಕಗಳನ್ನು ಹಿಡಿದು ನಾಯಕರು ಘೋಷಣೆ ಕೂಗಿದರು.

ರಾಹುಲ್ ಗಾಂಧಿ, ಪ್ರಿಯಾಂಕಾ ವಶಕ್ಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್‌ ಸಂಸದೆ ಪ್ರಿಯಂಕಾ ಗಾಂಧಿ ವಾದ್ರಾ ನೇತೃತ್ವದ ನಿಯೋಗವು ಆಕಾಶವಾಣಿ ಭನ ಮತ್ತು ನೀತಿ ಆಯೋಗದ ಗೇಟ್‌ ಬಳಿ ತಲುಪುತ್ತಿದ್ದಂತೆ, ಪೊಲೀಸರು ಬ್ಯಾರಿಕೇಡ್‌ ಹಾಕಿ ಅವರನ್ನು ತಡೆದರು. ಇದರಿಂದ ಇದರಿಂದ ಆಕ್ರೋಶಗೊಂಡ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ನಿಯಮಗಳನ್ನು ಗಾಳಿಗೆ ತೂರಿದೆ ಎಂದು ಆರೋಪಿಸಿದರು. ಸ್ಥಳದಲ್ಲಿ ಜಾರಿಯಲ್ಲಿದ್ದ ಬಿಎನ್‌ಎಸ್ಎಸ್ ಸೆಕ್ಷನ್ 163ರ ಕಾಯ್ದೆ ಉಲ್ಲಂಘಿಸಿದ ಆರೋಪದ ಮೇಲೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಹಿರಿಯ ಸಂಸದರನ್ನು ಪೊಲೀಸರು ವಶಕ್ಕೆ ಪಡೆದು, ಬಸ್ಸುಗಳಲ್ಲಿ ಹತ್ತಿಸಿ ಮಂದಿರ್ ಮಾರ್ಗ ಪೊಲೀಸ್ ಠಾಣೆಗೆ ಕರೆದೊಯ್ದರು. ಆನಂತರ ಪರಿಸ್ಥಿತಿ ತಿಳಿಯಾದ ಬಳಿಕ ಎಲ್ಲರನ್ನೂ ಬಿಡುಗಡೆ ಮಾಡಲಾಯಿತು.ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಸುತ್ತಮುತ್ತ ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಪ್ರಜಾಪ್ರಭುತ್ವದ ಕೊಲೆ ರಾಹುಲ್ ಗಾಂಧಿ ಆಕ್ರೋಶ

ಬಂಧನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ʼಚುನಾವಣಾ ಆಯೋಗವು ತಟಸ್ಥವಾಗಿ ಕೆಲಸ ಮಾಡುವ ಬದಲು ಸರ್ಕಾರದ ಶಾಖೆಯಂತೆ ವರ್ತಿಸುತ್ತಿದೆ. ಮುಖ್ಯ ಚುನಾವಣಾ ಆಯುಕ್ತರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ಜನಸಾಮಾನ್ಯರ ಮತದ ಹಕ್ಕನ್ನು ರಕ್ಷಿಸಲು ನಮ್ಮ ಹೋರಾಟ ಮುಂದುವರಿಯಲಿದೆ" ಎಂದು ವೀರೋಧ ವ್ಯಕ್ತಪಡಿಸಿದರು.

ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ವಿಪಕ್ಷಗಳ ಪಟ್ಟು; ಮುಖ್ಯ ಚುನಾವಣಾ ಆಯುಕ್ತರನ್ನು ಏಕಾಏಕಿ ಬದಲಿಸಬಹುದೇ? ಈ ಬಗ್ಗೆ ನಿಯಮ ಏನು ಹೇಳುತ್ತದೆ?

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಚುನಾವಣಾ ಆಯೋಗವು ಪಕ್ಷಪಾತದಿಂದ ವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಲಪ್ರಯೋಗ ಮಾಡಿ ಮತಗಟ್ಟೆಗಳನ್ನು ಲೂಟಿ ಮಾಡಲಾಗಿದೆ ಎಂದು ಅವರು ಹೇಳಿದರು. ಉತ್ತರ ಪ್ರದೇಶದಲ್ಲೂ ಇದೇ ಸಂಭವಿಸಿದೆ. ಚುನಾವಣಾ ಆಯೋಗದ ನಿಷ್ಪಕ್ಷಪಾತತೆಯನ್ನು ಅಖಿಲೇಶ್ ಯಾದವ್ ಪ್ರಶ್ನಿಸಿದ್ದಾರೆ. ‘ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿಲ್ಲ ಮತ್ತು ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುತ್ತಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ, ಚುನಾವಣಾ ಆಯೋಗವು ಬಿಜೆಪಿ ಪರ ಕೆಲಸ ಮಾಡಲು ಪ್ರಾರಂಭಿಸಿದೆ’ ಎಂದು ಅವರು ಹೇಳಿದರು

Vishakha Bhat Heggar

View all posts by this author