ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದ್ವಿಪೌರತ್ವ ಕೇಸ್‌: ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲು ಹೈಕೋರ್ಟ್ ಆದೇಶ

Rahul Gandhi Dual Citizenship Row: ರಾಹುಲ್ ಗಾಂಧಿ ವಿರುದ್ಧದ ದ್ವಂದ್ವ ಪೌರತ್ವ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ. ಈ ಪ್ರಕರಣವು ಕಾನೂನು ಮತ್ತು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದ್ದು, ಎಫ್‌ಐಆರ್ ದಾಖಲಿಸಿ ಸಮಗ್ರ ತನಿಖೆ ನಡೆಸಬೇಕೆಂದು ನ್ಯಾಯಾಲಯ ಸೂಚಿಸಿದೆ.

ರಾಹುಲ್ ಗಾಂಧಿ

ನವದೆಹಲಿ: ಲೋಕಸಭೆ (Lok Sabha)ಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ದ್ವಂದ್ವ ಪೌರತ್ವ ಹೊಂದಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್‌ (Allahabad High Court)ನ ಲಕ್ನೋ ಪೀಠವು ಶುಕ್ರವಾರ ಮಹತ್ವದ ಆದೇಶ ನೀಡಿದೆ. ಭಾರತೀಯ ಕಾನೂನಿನ ಪ್ರಕಾರ ದ್ವಂದ್ವ ಪೌರತ್ವಕ್ಕೆ ಅವಕಾಶವಿಲ್ಲದ ಕಾರಣ, ಈ ಪ್ರಕರಣವು ತನಿಖೆಗೆ ಅರ್ಹವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರನ್ನೊಳಗೊಂಡ ಪೀಠವು ಉತ್ತರ ಪ್ರದೇಶ ಸರ್ಕಾರಕ್ಕೆ ಈ ವಿಷಯದ ಬಗ್ಗೆ ಸ್ವತಃ ತನಿಖೆ ನಡೆಸುವಂತೆ ಅಥವಾ ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸುವಂತೆ ನಿರ್ದೇಶನ ನೀಡಿದೆ.

ಏನಿದು ಪ್ರಕರಣ?

ಕರ್ನಾಟಕದ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅವರು ಈ ಹಿಂದೆ ಲಕ್ನೋದ ವಿಶೇಷ ಎಂಪಿ/ಎಂಎಲ್‌ಎ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಪೌರತ್ವಕ್ಕೆ ಸಂಬಂಧಿಸಿದ ವಿಷಯಗಳನ್ನು ನಿರ್ಧರಿಸುವ ಅಧಿಕಾರ ತನಗಿಲ್ಲ ಎಂದು ಹೇಳಿ ಜನವರಿ 28 ರಂದು ಕೆಳ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಶಿಶಿರ್ ಹೈಕೋರ್ಟ್ ಮೊರೆ ಹೋಗಿದ್ದರು.

ಪ್ರಮುಖ ಆರೋಪಗಳೇನು?:

ರಾಹುಲ್ ಗಾಂಧಿ ಅವರು ಬ್ರಿಟಿಷ್ ಪೌರತ್ವ ಹೊಂದಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಇದಕ್ಕೆ ಪೂರಕವಾಗಿ ಯುಕೆಯಲ್ಲಿ ನೋಂದಾಯಿಸಲಾದ 'ಬ್ಯಾಕ್‌ಆಪ್ಸ್ ಲಿಮಿಟೆಡ್' (BackOps Ltd) ಕಂಪನಿಗೆ ಸಂಬಂಧಿಸಿದ ದಾಖಲೆಗಳನ್ನು ಉಲ್ಲೇಖಿಸಲಾಗಿದೆ. ಈ ಕಂಪನಿಯ ವಾರ್ಷಿಕ ರಿಟರ್ನ್ಸ್ ಸಲ್ಲಿಕೆಯ ವೇಳೆ ರಾಹುಲ್ ಗಾಂಧಿ ತಮ್ಮನ್ನು ಬ್ರಿಟಿಷ್ ಪ್ರಜೆ ಎಂದು ಘೋಷಿಸಿಕೊಂಡಿದ್ದಾರೆ ಮತ್ತು ಲಂಡನ್ ವಿಳಾಸವನ್ನು ನೀಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ನ್ಯಾಯಾಲಯದ ವೀಕ್ಷಣೆ:

ಈ ಆರೋಪಗಳು ಕೇವಲ ರಾಜಕೀಯವಲ್ಲ, ಬದಲಿಗೆ ರಾಷ್ಟ್ರೀಯ ಭದ್ರತೆ ಮತ್ತು ಪೌರತ್ವ ಕಾಯ್ದೆಯ ಉಲ್ಲಂಘನೆಗೆ ಸಂಬಂಧಿಸಿವೆ ಎಂದು ಹೈಕೋರ್ಟ್ ಹೇಳಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS), ಪಾಸ್‌ಪೋರ್ಟ್ ಕಾಯ್ದೆ ಮತ್ತು ಅಧಿಕೃತ ರಹಸ್ಯಗಳ ಕಾಯ್ದೆಯ ಅಡಿಯಲ್ಲಿ ವಿವರವಾದ ತನಿಖೆ ನಡೆಸುವ ಅವಶ್ಯಕತೆಯಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ಆದೇಶವು ಕಾಂಗ್ರೆಸ್ ನಾಯಕರಿಗೆ ದೊಡ್ಡ ರಾಜಕೀಯ ಹಿನ್ನಡೆಯಾಗಿ ಪರಿಣಮಿಸಿದ್ದು, ಮುಂಬರುವ ದಿನಗಳಲ್ಲಿ ಕಾನೂನು ಹೋರಾಟ ತೀವ್ರಗೊಳ್ಳುವ ಸಾಧ್ಯತೆಯಿದೆ. ಸದ್ಯಕ್ಕೆ ಉತ್ತರ ಪ್ರದೇಶ ಸರ್ಕಾರವು ಈ ತನಿಖೆಯನ್ನು ಹೇಗೆ ಮುಂದುವರಿಸಲಿದೆ ಎಂಬುದು ಕುತೂಹಲಕಾರಿಯಾಗಿದೆ. ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ.