Pahalgam Terror Attack: ಇಂದು ಜಮ್ಮು-ಕಾಶ್ಮೀರಕ್ಕೆ ರಾಹುಲ್ ಗಾಂಧಿ ಭೇಟಿ
Rahul Gandhi To Visit J&K:ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಇಂದು ಭೇಟಿ ನೀಡಲಿದ್ದಾರೆ. ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಿದ್ದ ರಾಹುಲ್ ಗಾಂಧಿ ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ ಗುರುವಾರ ಮುಂಜಾನೆ ನವದೆಹಲಿಗೆ ಮರಳಿದ್ದರು.


ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ(Pahalgam Terror Attack) ನಡೆದ ಭಯೋತ್ಪಾದಕ ದಾಳಿಯ ನಂತರ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ(Rahul Gandhi) ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಇಂದು ಭೇಟಿ ನೀಡಲಿದ್ದಾರೆ. ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಿದ್ದ ರಾಹುಲ್ ಗಾಂಧಿ ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ ಗುರುವಾರ ಮುಂಜಾನೆ ನವದೆಹಲಿಗೆ ಮರಳಿದ್ದರು. ದೆಹಲಿಗೆ ಮರಳುತ್ತಿದ್ದಂತೆ ಅವರು ನಿನ್ನೆ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಭಾಗಿಯಾದರು.
ಪಹಲ್ಗಾಮ್‌ನಲ್ಲಿ ನಡೆದ ದಾಳಿ ಬಳಿಕ ಗುರುವಾರ ಸಂಸತ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ನಡೆದಿದೆ. ಸಭೆಯಲ್ಲಿ ಹಲವು ಮಹತ್ವದ ವಿಷಯಗಳನ್ನು ಚರ್ಚೆ ಮಾಡಲಾಗಿದೆ. ಸಭೆ ಮುಗಿದ ನಂತರ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. 26 ಜನರ ಸಾವಿಗೆ ಕಾರಣವಾದ ಹತ್ಯಾಕಾಂಡಕ್ಕೆ ಪ್ರತ್ಯುತ್ತರ ನೀಡಲೇ ಬೇಕು ಅದಕ್ಕಾಗಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲು ವಿರೋಧ ಪಕ್ಷವು ಸಂಪೂರ್ಣ ಬೆಂಬಲವನ್ನು ನೀಡಿದೆ ಎಂದು ಹೇಳಿದರು. ಸಭೆಯಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಅಮಿತ್ ಶಾ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
"ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಎಲ್ಲರೂ ಖಂಡಿಸಿದರು. ಯಾವುದೇ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವಿರೋಧ ಪಕ್ಷವು ಸಂಪೂರ್ಣ ಬೆಂಬಲ ನೀಡಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, "ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಅಲ್ಲಿದ್ದರು. ನಾವೆಲ್ಲರೂ ದಾಳಿಯನ್ನು ಖಂಡಿಸಿದ್ದೇವೆ. ಸರ್ಕಾರ ಏನೇ ಕ್ರಮ ಕೈಗೊಂಡರೂ ಅದಕ್ಕೆ ಬೆಂಬಲವಿದೆ ಎಂದು ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು ಎಂದು ನಾವು ಹೇಳಿದ್ದೇವೆ ಎಂದರು.