Waqf Amendment Act: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಆರ್‌ಜೆಡಿ ಸಿದ್ಧತೆ
ಶನಿವಾರ ರಾಷ್ಟ್ರಪತಿಗಳ ಒಪ್ಪಿಗೆ ಪಡೆದು ಕಾನೂನಾಗಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಪ್ರಶ್ನಿಸಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸಂಸದ ಮನೋಜ್ ಝಾ ಮತ್ತು ಪಕ್ಷದ ನಾಯಕ ಫಯಾಜ್ ಅಹ್ಮದ್ ಅವರು ಪಕ್ಷದ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆ.


ನವದೆಹಲಿ: ಶನಿವಾರ ರಾಷ್ಟ್ರಪತಿಗಳ ಒಪ್ಪಿಗೆ ಪಡೆದು ಕಾನೂನಾಗಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು (Waqf Amendment Act) ಪ್ರಶ್ನಿಸಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸಂಸದ ಮನೋಜ್ ಝಾ ಮತ್ತು ಪಕ್ಷದ ನಾಯಕ ಫಯಾಜ್ ಅಹ್ಮದ್ ಅವರು ಪಕ್ಷದ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆ. ಈ ಕಾಯ್ದೆಯು ವಕ್ಫ್ ಆಸ್ತಿಗಳ ನಿರ್ವಹಣೆಯ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ ಎಂದು ಫಯಾಜ್ ಅಹ್ಮದ್ ಹೇಳಿದ್ದಾರೆ. ವಿರೋಧ ಪಕ್ಷಗಳಾದ ಕಾಂಗ್ರೆಸ್, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ಕೂಡ ಈ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB)ವಕ್ಫ್ (ತಿದ್ದುಪಡಿ) ಮಸೂದೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಹೇಳಿದೆ. ಎಲ್ಲಾ ಧಾರ್ಮಿಕ, ಸಮುದಾಯ ಆಧಾರಿತ ಮತ್ತು ಸಾಮಾಜಿಕ ಸಂಸ್ಥೆಗಳ ಸಮನ್ವಯದೊಂದಿಗೆ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನವನ್ನು ಮುನ್ನಡೆಸುವುದಾಗಿ ಮತ್ತು ಶಾಸನವನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ಅಭಿಯಾನ ಮುಂದುವರಿಯುವುದಾಗಿ AIMPLB ಹೇಳಿಕೆ ನೀಡಿದೆ.
ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ಕಿಡಿ ಕಾರಿದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮುಂಬರುವ ಚುನಾವಣೆಯ ನಂತರ ಬಿಹಾರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ವಕ್ಫ್ ಕಾಯ್ದೆಯನ್ನು "ಕಸದ ಬುಟ್ಟಿಗೆ" ಎಸೆಯುತ್ತೇವೆ ಎಂದು ಹೇಳಿದ್ದಾರೆ. ಇಂದು ಮುಸ್ಲಿಮರನ್ನು ಗುರಿಯಾಗಿಸಲಾಗುತ್ತಿದೆ ಎಂದು ನಾವು ನಂಬುತ್ತೇವೆ ಮತ್ತು ನಾಳೆ ಸಿಖ್ಖರು ಮತ್ತು ಕ್ರಿಶ್ಚಿಯನ್ನರ ಸರದಿ ಬರಬಹುದು" ಎಂದು ಅವರು ಹೇಳಿದರು. ನಿರುದ್ಯೋಗದಂತಹ ಸಮಸ್ಯೆಗಳಿಂದ ಸಾರ್ವಜನಿಕ ಗಮನವನ್ನು ಬೇರೆಡೆ ಸೆಳೆಯಲು ಈ ಮಸೂದೆಯನ್ನು ತರಲಾಗಿದೆ ಎಂದು ಯಾದವ್ ಹೇಳಿದ್ದಾರೆ. ಬಿಹಾರದಲ್ಲಿ ಬಿಜೆಪಿ ಈ ಮಸೂದೆಯನ್ನು ಜಾರಿಗೆ ತರಲು ತಮ್ಮ ಪಕ್ಷ ಬಿಡುವುದಿಲ್ಲ ಎಂದು ಅವರು ಹೇಳಿದರು.
ಬಿಹಾರದಲ್ಲಿ ಪ್ರತಿಭಟನೆ
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಸೇರಿದಂತೆ ವಿರೋಧ ಪಕ್ಷದ ನಾಯಕರು, ಮಸೂದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ನಡೆಸಿದ ಪ್ರತಿಭಟನೆಗಳನ್ನು ಬೆಂಬಲಿಸಿದ್ದಾರೆ. ಮುಸ್ಲಿಮರ ಸಾಮಾಜಿಕ-ಆರ್ಥಿಕ ಸ್ಥಿತಿಗತಿಗಳನ್ನು ಸುಧಾರಿಸಲು ಸಾಚಾರ್ ಸಮಿತಿಯ ಶಿಫಾರಸುಗಳನ್ನು ಸಂಪೂರ್ಣವಾಗಿ ಜಾರಿಗೆ ತರುವಂತೆ ಒತ್ತಾಯಿಸಿದರು.