ನವದೆಹಲಿ: ಚುನಾವಣಾ ಆಯುಕ್ತರ ಆಕ್ಷೇಪಣೆಗಳ ಹೊರತಾಗಿಯೂ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಗೆ ಸಂಬಂಧಿಸಿ ಏಕಪಕ್ಷೀಯವಾಗಿ ಮುಖ್ಯ ಚುನಾವಣಾ ಆಯುಕ್ತರು ನಿರ್ಧಾರ ಕೈಗೊಂಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ (EC SIR row) ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ( CEC Gyanesh Kumar) ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ವಕೀಲರಾದ ಶೈಲೇಂದ್ರ ಮಣಿ ತ್ರಿಪಾಠಿ, ಚಾಂದ್ ಖುರೇಷಿಯವರು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಆಯೋಗದ ಮೂವರು ಚುನಾವಣಾ ಆಯುಕ್ತರ ಪೈಕಿ ಇಬ್ಬರು ಲಿಖಿತ ಆಕ್ಷೇಪಣೆ ಇದ್ದರೂ ಕೂಡ ಜ್ಞಾನೇಶ್ ಕುಮಾರ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಸಂಬಂಧಿಸಿ ಹಲವು ನಿರ್ಧಾರಗಳನ್ನು ಒಬ್ಬರೇ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಗೆ ಸಂಬಂಧಿಸಿ ಭಾರತೀಯ ಚುನಾವಣಾ ಆಯೋಗ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡಿದೆ. ಇದರ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಲಾಗಿದೆ. ಮಾಧ್ಯಮವೊಂದರ ವರದಿ ಹಿನ್ನೆಲೆಯಲ್ಲಿ ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಅವರು ವಕೀಲ ಚಾಂದ್ ಖುರೇಷಿ ಮೂಲಕ ಈ ಅರ್ಜಿಯನ್ನು ಸಲ್ಲಿಸಿದ್ದಾರೆ.
Supreme Court: ಬೇರೆ ಜಾತಿ, ಧರ್ಮದ ಯುವಕನ ಮದುವೆಯಾದರೆ ಮಗಳಿಗೆ ಆಸ್ತಿಯಲ್ಲಿ ಪಾಲು ಕೊಡಬೇಕಿಲ್ಲ: ಸುಪ್ರೀಂ ಕೋರ್ಟ್
ಭಾರತೀಯ ಚುನಾವಣಾ ಆಯೋಗದ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರ ಒಪ್ಪಿಗೆಯಿಲ್ಲದೆ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರು ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದರಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ಸಾಫ್ಟ್‌ವೇರ್‌ನಲ್ಲಿನ ಬದಲಾವಣೆಗಳು ಹಾಗೂ ಶಾಸನಬದ್ಧ 'ಫಾರ್ಮ್ 6'ಕ್ಕೆ ಸಂಬಂಧಿಸಿದ ನಿಯಮಗಳು ಮತ್ತು ಕಾರ್ಯವಿಧಾನಗಳು ಸೇರಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಚುನಾವಣಾ ಆಯುಕ್ತರ ಬಹುಮತದ ಅಭಿಪ್ರಾಯಕ್ಕೆ ವಿರುದ್ಧವಾಗಿ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಅನುಮೋದಿಸಿ ಜಾರಿಗೆ ತಂದ ಎಲ್ಲಾ ನಿರ್ಣಯಗಳನ್ನು ಅಸಂವಿಧಾನಿಕ ಎಂದು ಘೋಷಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಜ್ಞಾನೇಶ್ ಕುಮಾರ್, ಹಿರಿಯ ಉಪ ಚುನಾವಣಾ ಆಯುಕ್ತ ಮನೀಶ್ ಗಾರ್ಗ್, ಚುನಾವಣಾ ಆಯೋಗದ ಮಹಾನಿರ್ದೇಶಕರಾದ ಸೀಮಾ ಖನ್ನಾ ಮತ್ತು ತಮ್ಮ ಅಧಿಕೃತ ಕರ್ತವ್ಯಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಆರೋಪವಿರುವ ಇತರ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆಯೂ ಅರ್ಜಿದಾರರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಗೆ ಸಂಬಂಧಿಸಿ ಬಾಂಬೆ ಹೈಕೋರ್ಟ್‌ನಲ್ಲಿ ಎರಡು ಅರ್ಜಿಗಳನ್ನು ಸಲ್ಲಿಸಲಾಗಿದೆ. ಇದರಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೊರಡಿಸಿದ 14 ಆದೇಶಗಳನ್ನು ರದ್ದುಗೊಳಿಸುವಂತೆ ಕೋರಲಾಗಿದೆ. ಇದರೊಂದಿಗೆ ಮತದಾರರ ಪಟ್ಟಿಯಲ್ಲಿ ಪರಿಷ್ಕರಣೆ ವೇಳೆ ಅಳಿಸಿಹಾಕಲಾದ ಮತದಾರರ ಹೆಸರುಗಳನ್ನು ಮರುಸ್ಥಾಪಿಸುವುದು, ಕಾನೂನುಬದ್ಧವಾಗಿ ಸರಿಯಾದ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಹಾಗೂ ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ಯಾವ ಆದೇಶ ಮತ್ತು ದಾಖಲಿತ ಕಾರಣಗಳ ಆಧಾರದ ಮೇಲೆ ಕೈಗೊಳ್ಳಲಾಗುತ್ತಿದೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
Supreme Court: ಬಾಡಿಗೆಗೆ ಇದ್ದ ಮಾತ್ರಕ್ಕೆ ಆ ಮನೆಯ ಮಾಲೀಕರಾಗಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಕೂಡ ಗುರುವಾರ ನವದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.