ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russian President Vladimir Putin) ಮತ್ತು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ಮಧ್ಯೆ ದ್ವಿಪಕ್ಷೀಯ ಮಾತುಕತೆಗೆ ಶುಕ್ರವಾರ ದಿನ ನಿಗದಿಪಡಿಸಲಾಗಿದೆ. ಈ ಸಂದರ್ಭದಲ್ಲಿ ಭಾರತಕ್ಕೆ ಸು-57 ವಿಮಾನಗಳ (Su-57 aircraft) ಮಾರಾಟಕ್ಕೆ ಸಂಬಂಧಿಸಿ ನಾಯಕರಿಬ್ಬರು ಚರ್ಚೆ ನಡೆಸಲಿದ್ದಾರೆ ಎಂದು ಮಂಗಳವಾರ ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ (Kremlin spokesperson Dmitry Peskov) ತಿಳಿಸಿದ್ದಾರೆ. ಸೆಪ್ಟೆಂಬರ್ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ ನಡೆಯಲಿರುವ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit 2026) ಭಾಗವಹಿಸಲು ರಷ್ಯಾ ಅಧ್ಯಕ್ಷರು ಭಾರತಕ್ಕೆ ಆಗಮಿಸಲು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ 2026ರ ಬ್ರಿಕ್ಸ್ ಶೃಂಗಸಭೆಯ ಹೊರತಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಕ್ರವಾರ ನವದೆಹಲಿಯಲ್ಲಿ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಈ ವರ್ಷದಾರಂಭದಲ್ಲಿ ಭಾರತ ನಾಲ್ಕನೇ ಬಾರಿಗೆ ಬ್ರಿಕ್ಸ್ ಅಧ್ಯಕ್ಷತೆಯನ್ನು ವಹಿಸಿಕೊಂಡಿತ್ತು ಎಂದು ಅವರು ತಿಳಿಸಿದರು.
ರಷ್ಯಾದ ಕಚ್ಚಾ ತೈಲವನ್ನು ಖರೀದಿಸುವ ದೇಶಗಳ ಮೇಲೆ ಅಮೆರಿಕ ಶೇಕಡಾ 100ರಷ್ಟು ಸುಂಕ ವಿಧಿಸುವ ಕ್ರಮವು ಕಾನೂನು ಬಾಹಿರ ಎಂದು ಹೇಳಿದ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಾತುಕತೆಯ ಸಂದರ್ಭದಲ್ಲಿ ವ್ಯಾಪಾರ ಮತ್ತು ಆರ್ಥಿಕತೆಯ ಕುರಿತಾಗಿ ಚರ್ಚೆ ನಡೆಸಲಿದ್ದು, ಇದರಲ್ಲಿ ಭಾರತಕ್ಕೆ ಸು-57 ವಿಮಾನಗಳ ಮಾರಾಟ ಯೋಜನೆಗಳು ಕೂಡ ಸೇರಿವೆ ಎಂದು ಹೇಳಿದ್ದಾರೆ.
ಪೆಸ್ಕೋವ್ ಅವರ ಹೇಳಿಕೆಗಳ ಬಗ್ಗೆ ಭಾರತ ಇನ್ನೂ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಎರಡು ದಿನಗಳ ಬ್ರಿಕ್ಸ್ ಶೃಂಗಸಭೆಯು ನವದೆಹಲಿಯ ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ನಡೆಯಲಿದೆ. ಇದರಲ್ಲಿ ಸದಸ್ಯ ರಾಷ್ಟ್ರಗಳಾದ ಬ್ರೆಜಿಲ್, ಚೀನಾ, ಈಜಿಪ್ಟ್, ಇಥಿಯೋಪಿಯಾ, ಭಾರತ, ಇಂಡೋನೇಷ್ಯಾ, ಇರಾನ್, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನ ನಾಯಕರು ಭಾಗವಹಿಸಲಿದ್ದಾರೆ. ಇವರೊಂದಿಗೆ ಪಾಲುದಾರ ರಾಷ್ಟ್ರಗಳಾಗಿರುವ ಬೆಲಾರಸ್, ಬೊಲಿವಿಯಾ, ಕ್ಯೂಬಾ, ಕಝಾಕಿಸ್ತಾನ್, ಮಲೇಷ್ಯಾ, ನೈಜೀರಿಯಾ, ಥೈಲ್ಯಾಂಡ್, ಉಗಾಂಡಾ, ಉಜ್ಬೇಕಿಸ್ತಾನ್ ಮತ್ತು ವಿಯೆಟ್ನಾಂ ಪ್ರತಿನಿಧಿಗಳು ಕೂಡ ಭಾಗವಹಿಸಲಿದ್ದಾರೆ.
ಭಾರತ-ಇರಾನ್ ಸಂಬಂಧವು ದೀರ್ಘಕಾಲಿಕ ಎಂದು ಶ್ಲಾಘಿಸಿದ ಟೆಹರಾನ್
ರಷ್ಯಾ ಅಧ್ಯಕ್ಷ ಪುಟಿನ್ ಅವರು ಪಾಲ್ಗೊಳ್ಳುವುದು ಖಚಿತವಾಗಿದೆ. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇದರಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಆದರೆ ಇದು ಇನ್ನೂ ದೃಢಪಟ್ಟಿಲ್ಲ. ಒಂದು ವೇಳೆ ಕ್ಸಿ ಅವರು ಭಾರತಕ್ಕೆ ಭೇಟಿ ನೀಡಿದರೆ ಪ್ರಧಾನಿ ಮೋದಿ ಅವರೊಂದಿಗೆ ದೇಶದಲ್ಲಿ ಇದು ಅವರ ಮೊದಲ ಅಧಿಕೃತ ಭೇಟಿಯಾಗಿದೆ. ಇವರೊಂದಿಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸಹ ಶೃಂಗಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.