ನವದೆಹಲಿ, ಜೂ. 10: ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ದಿನಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿಯಾಗಿ (Elected Prime Minister) ನರೇಂದ್ರ ಮೋದಿ (Narendra Modi) ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಸೇರಿ ಹಲವು ವಿಶ್ವ ನಾಯಕರು ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಜಾರ್ಜಿಯಾ ಮೆಲೋನಿ, "ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿಯಾದ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು" ಎಂದು ಬರೆದುಕೊಂಡಿದ್ದಾರೆ. ಇತ್ತೀಚೆಗೆ ರೋಮ್‌ನಲ್ಲಿ ನಡೆದ ಭೇಟಿಯನ್ನು ಉಲ್ಲೇಖಿಸಿದ ಅವರು, ಭಾರತ ಮತ್ತು ಇಟಲಿ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಎರಡೂ ರಾಷ್ಟ್ರಗಳ ಜನರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ ಎಂದು ಹೇಳಿದ್ದಾರೆ.
ಕಳೆದ ತಿಂಗಳು ರೋಮ್‌ನಲ್ಲಿ ನಡೆದ ಭೇಟಿಯಲ್ಲಿ ಮೋದಿ ಮತ್ತು ಮೆಲೋನಿ ಉಭಯ ದೇಶಗಳ ನಡುವಿನ ಸಂಬಂಧ, ವ್ಯಾಪಾರ, ರಕ್ಷಣಾ ಕ್ಷೇತ್ರ, ತಂತ್ರಜ್ಞಾನ, ಇಂಧನ ಹಾಗೂ ನಾವೀನ್ಯತೆ ಕ್ಷೇತ್ರಗಳ ಸಹಕಾರ ಕುರಿತು ಚರ್ಚೆ ನಡೆಸಿದ್ದರು. ಇತ್ತೀಚಿನ ವರ್ಷಗಳಲ್ಲಿ ಉಭಯ ನಾಯಕರ ನಡುವಿನ ಆತ್ಮೀಯ ಬಾಂಧವ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಗಮನ ಸೆಳೆದಿದೆ.
ಮೋದಿ ಸರ್ಕಾರಕ್ಕೆ 12 ವರ್ಷ: ಕೋಟ್ಯಂತರ ಜನರ ಬದುಕು ಬದಲಿಸಿದ 5 ಮಹತ್ವದ ಯೋಜನೆಗಳು
2023ರಲ್ಲಿ ದುಬೈಯಲ್ಲಿ ನಡೆದ ಹವಾಮಾನ ಶೃಂಗಸಭೆ ವೇಳೆ ಮೆಲೋನಿ ಹಂಚಿಕೊಂಡಿದ್ದ ಸೆಲ್ಫಿ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆ ವೇಳೆ "ಮೆಲೋಡಿ ತಂಡ" ಎಂದು ಅವರು ಉಲ್ಲೇಖಿಸಿದ್ದ ವಿಡಿಯೊ ಭಾರಿ ಚರ್ಚೆಗೆ ಕಾರಣವಾಗಿತ್ತು.
ಜೂನ್ 10ರಂದು ಪ್ರಧಾನಿ ಮೋದಿ 4,399 ದಿನಗಳ ನಿರಂತರ ಆಡಳಿತಾವಧಿಯನ್ನು ಪೂರ್ಣಗೊಳಿಸಿದ್ದು, ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ದಾಖಲೆಯನ್ನು ಹಿಂದಿಕ್ಕಿದ್ದಾರೆ. ನೆಹರೂ 1952ರಿಂದ 1964ರವರೆಗೆ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಮೋದಿ ಅವರ ಸಾಧನೆಯನ್ನು ಶ್ಲಾಘಿಸಿ ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಸ್ಕಾಟ್ ಮಾರಿಸನ್, ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ, ನೈಜೀರಿಯಾ ಅಧ್ಯಕ್ಷ ಬೋಲಾ ಅಹ್ಮದ್ ಟಿನುಬು, ಕೀನ್ಯಾ ಅಧ್ಯಕ್ಷ ವಿಲಿಯಂ ರೂಟೊ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ.
2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದ ಮೋದಿ, 2019ರಲ್ಲಿ ಎರಡನೇ ಬಾರಿ ಹಾಗೂ 2024ರಲ್ಲಿ ಮೂರನೇ ಬಾರಿ ಸತತವಾಗಿ ಅಧಿಕಾರಕ್ಕೆ ಮರಳಿದ್ದರು. ಸ್ವತಂತ್ರ ಭಾರತದ ಇತಿಹಾಸದಲ್ಲಿ ಸತತ ಮೂರು ಲೋಕಸಭಾ ಚುನಾವಣೆಗಳಲ್ಲಿ ಜಯಗಳಿಸಿದ ಎರಡನೇ ಪ್ರಧಾನಮಂತ್ರಿಯಾಗಿ ಹಾಗೂ ಅತಿ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿಯಾಗಿ ಅವರು ಹೊಸ ಮೈಲುಗಲ್ಲು ನಿರ್ಮಿಸಿದ್ದಾರೆ.