ವಿಜಯಪುರ : ಮುಂಬರುವ ಖೇಲೋ ಇಂಡಿಯಾ ಕ್ರೀಡಾಕೂಟವನ್ನು ಕರ್ನಾಟಕದಲ್ಲಿ ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ ಒಪ್ಪಿಗೆ ನೀಡಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.
ಸೋಮವಾರ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್, ಅಥ್ಲೆಟಿಕ್ ಟ್ರಾಕ್, ವಾಲಿಬಾಲ್ ಮೈದಾನಗಳ ಹಾಗೂ ಒಳಾಂಗಣ ಈಜುಕೊಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಖೆಲೋ ಇಂಡಿಯಾ ಕ್ರೀಡಾಕೂಟ ಆಯೋಜಿಸುವ ರಾಜ್ಯದ ಮನವಿಗೆ ಪ್ರಧಾನಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕೇಂದ್ರದ ಕ್ರೀಡಾ ತಜ್ಞರು ಕೂಡ ರಾಜ್ಯದ ಆರು ಸ್ಥಳಗಳನ್ನು ಗುರುತಿಸಿದ್ದಾರೆ ಎಂದು ಹೇಳಿದರು.
ಗ್ರಾಮಾಂತರ ಪ್ರದೇಶದಲ್ಲಿ ಕ್ರೀಡಾಪಟುಗಳಲ್ಲಿ ಶಕ್ತಿ ತುಂಬುವ ಕಾರ್ಯ ನಡೆಯಬೇಕಾಗಿದೆ. ಕ್ರೀಡಾಪಟುಗಳ ಮೂಲಕ ದೇಶದ ಕೀರ್ತಿ ಹೆಚ್ಚಿಸಬೇಕಾಗಿದೆ ಎಂದ ಅವರು ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸುವ ಕೆಲಸವೂನಡೆದಿದೆ ಎಂದರು.
ನಗರದಲ್ಲಿ 6 ಕೋಟಿ ರೂ. ವೆಚ್ಚದಲ್ಲಿ ಅಥ್ಲೆಟಿಕ್ ಟ್ರ್ಯಾಕ್, 3 ಕೋಟಿ ರೂ. ವೆಚ್ಚದಲ್ಲಿ ಈಜುಕೊಳ, 2 ಕೋಟಿ ರೂ. ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ, 50 ಲಕ್ಷ ರೂ. ವೆಚ್ಚದಲ್ಲಿ ವಾಲಿಬಾಲ್ ಅಂಕಣ ಸೇರಿದಂತೆ ಇತರೆ ಕಾಮಗಾರಿಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಲೋಕಾರ್ಪಣೆ ಮಾಡಲಾಗಿದೆ.ಜಿಲ್ಲೆಯ ಜನರು ಇದರ ಸದುಪಯೋಗ ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಅವರು ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ತರಬೇತಿ ನೀಡುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಅವರಿಗೆ ಅವಕಾಶ ಒದಗಿಸಬೇಕು ಎಂದು ಹೇಳಿದರು.
ಜಿ.ಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಮಾತನಾಡಿದರು. ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿ.ಪಂ ಸಿಇಒ ಗೋವಿಂದರೆಡ್ಡಿ ಉಪಸ್ಥಿತರಿದ್ದರು.