ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮೇ 9ರಂದು ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ: ಗೋವಿಂದ ಕಾರಜೋಳ

Govind Karjol: ಮೇ 9ರಂದು ಚಿತ್ರದುರ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್‌ 26ರ ಬೆಳಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಬೆಂಗಳೂರು ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದ ಲೋಗೋ ಬಿಡುಗಡೆ ಮಾಡಲಾಯಿತು.

ಬೆಂಗಳೂರು, ಏ. 23: ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ (Govind Karjol) ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ ವ್ಯವಸ್ಥೆಗಳನ್ನು ಪ್ರಾರಂಭಿಸಲು ಭೂಮಿಪೂಜೆ ನಡೆಯಲಿದೆ ಎಂದರು.

ಭೂಮಿಪೂಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ಆಹ್ವಾನಿಸಿದ್ದೇವೆ. ಅವರು, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 50 ವರ್ಷ ರಾಜ್ಯ ಸುತ್ತಿದ್ದಾರೆ. ರೈತರ ಪರವಾಗಿ ಹೋರಾಡಿ, ದೀನದಲಿತರಿಗೆ ನ್ಯಾಯ ಒದಗಿಸಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ್ದಾರೆ. ಅವರ ಜೀವನ ಮತ್ತು ಸಮಾಜಸೇವೆ ಕುರಿತು ಅಭಿಮಾನೋತ್ಸವ ಆಚರಿಸಲು ತೀರ್ಮಾನಿಸಿದ್ದೇವೆ ಎಂದರು. ಈ ಅಭಿಮಾನೋತ್ಸವವು ಚಿತ್ರದುರ್ಗದಲ್ಲಿ ನಡೆಯಲಿದೆ. ಮೇ 9ರಂದು ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ನೆರವೇರಿಸಿ ಯಡಿಯೂರಪ್ಪ ಅವರನ್ನು ಸನ್ಮಾನಿಸಲಿದ್ದಾರೆ ಎಂದು ವಿವರಿಸಿದರು.

ಅಭಿಮಾನೋತ್ಸವದ ಹಿಂದಿನ ದಿನ ಅಂದರೆ ಮೇ 8ರಂದು ಸಂಜೆ 6 ಗಂಟೆಗೆ ಯಡಿಯೂರಪ್ಪ ಅವರ ಪುರಪ್ರವೇಶ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ. ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಸಲು ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು. ನಾಡಿನ ಎಲ್ಲ ಮಠಾಧೀಶರು, ಮಾಜಿ ಮುಖ್ಯಮಂತ್ರಿಗಳು, ಸಚಿವರು ಮತ್ತು ಗಣ್ಯರನ್ನು ಆಹ್ವಾನಿಸಲಾಗುತ್ತಿದೆ. ಯಡಿಯೂರಪ್ಪ ಅವರನ್ನು ಬಲ್ಲ ಸಾಹಿತಿಗಳು, ಒಡನಾಡಿಗಳು, ಕಲಾವಿದರು ಸೇರಿ ಸಮಾಜದ ಎಲ್ಲ ರಂಗದವರು ಭಾಗವಹಿಸುತ್ತಾರೆ ಎಂದು ಹೇಳಿದರು.

ಲಕ್ಷಾಂತರ ಸಂಖ್ಯೆಯಲ್ಲಿ ಜನರು ಭಾಗಿ: ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಮಾತನಾಡಿ, ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಡಿಗೆ ಯಡಿಯೂರಪ್ಪ ನೀಡಿದ ಕೊಡುಗೆಗೆ ಎಲ್ಲ ವರ್ಗದವರೂ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಇದಕ್ಕಾಗಿ ಅರ್ಥಪೂರ್ಣ, ಭವ್ಯ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದರು. ‌

ರಾಜ್ಯದ ಮೂಲೆಮೂಲೆಗಳಿಂದ ಅಭಿಮಾನಿಗಳು ಬರಲಿದ್ದಾರೆ. ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಜನರು ಬರಲಿದ್ದಾರೆ. ಒಂದು ಐತಿಹಾಸಿಕ ಕಾರ್ಯಕ್ರಮ ಇದಾಗಲಿದೆ ಎಂದು ವಿವರಿಸಿದರು. ಪ್ರಭಾಕರ ಕೋರೆ, ಗೋವಿಂದ ಕಾರಜೋಳ, ಶ್ರೀರಾಮುಲು ಸೇರಿ ಅನೇಕ ಗಣ್ಯರ ಪಾಲ್ಗೊಳ್ಳುವಿಕೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದ ಲೋಗೋವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

ಪವನ ಶಕ್ತಿ ಸಾಮರ್ಥ್ಯದಲ್ಲಿ ಜಾಗತಿಕವಾಗಿ 4ನೇ ಸ್ಥಾನದಲ್ಲಿದೆ ಭಾರತ: ಪ್ರಲ್ಹಾದ್ ಜೋಶಿ‌

ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಹರೀಶ್ ಪೂಂಜಾ, ಮಾಜಿ ಶಾಸಕ ಅನಿಲ್ ಬೆನಕೆ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ ಮತ್ತಿತರರು ಉಪಸ್ಥಿತರಿದ್ದರು.