BY Vijayendra: ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿಯಿಂದ 2 ಹಂತದ ಹೋರಾಟ: ವಿಜಯೇಂದ್ರ
BY Vijayendra: ಬೆಲೆ ಏರಿಕೆ ಸೇರಿ ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ ಏ.2ರಂದು ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ರಾಜ್ಯದ ಎಲ್ಲ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಕಾರ್ಯಕರ್ತರು ಭಾಗವಹಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.


ಬೆಂಗಳೂರು: ಬಿಜೆಪಿ ಎರಡು ಪ್ರಮುಖ ಹೋರಾಟಗಳನ್ನು ಕೈಗೆತ್ತಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ದಿನ ಪಕ್ಷದ ಎಲ್ಲ ಹಿರಿಯರು ಚರ್ಚೆ ಮಾಡಿ ಹೋರಾಟದ ನಿರ್ಧಾರ ಮಾಡಿದ್ದೇವೆ. ಸಿದ್ದರಾಮಯ್ಯ(Siddaramaih) ಅವರು ಮುಖ್ಯಮಂತ್ರಿಯಾದ ಬಳಿಕ ಕಳೆದ 20 ತಿಂಗಳಿನಲ್ಲಿ ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿಯನ್ನು ದಯಪಾಲಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆ ಉಂಟಾಗಿದೆ. ಕಾಂಗ್ರೆಸ್ ಸರ್ಕಾರ ಹಾಲಿನ ದರ, ವಿದ್ಯುತ್ ದರ, ನೀರಿನ ದರ, ಪೆಟ್ರೋಲ್, ಡೀಸೆಲ್, ಸ್ಟಾಂಪ್ ಶುಲ್ಕ, ಮೆಟ್ರೊ ದರ ಏರಿಸುವ ಮೂಲಕ ಜನಸಾಮಾನ್ಯರಿಗೆ ಬದುಕು ಹೊರೆ ಎನಿಸುವಂತೆ ಮಾಡಿದೆ. ಬೆಲೆ ಏರಿಕೆ ನಿರಂತರವಾಗಿ ಸಾಗುತ್ತಿದೆ ಎಂದು ಆರೋಪಿಸಿದರು.
ಬೆಲೆ ಏರಿಕೆ ಸೇರಿ ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ ಏ.2ರಂದು ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ರಾಜ್ಯದ ಎಲ್ಲ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಕಾರ್ಯಕರ್ತರು ಭಾಗವಹಿಸುತ್ತಾರೆ. ದೊಡ್ಡ ಮಟ್ಟದಲ್ಲಿ ಈ ಹೋರಾಟ ನಡೆಯಲಿದೆ ಎಂದು ತಿಳಿಸಿದರು.
ಹಣಕಾಸು ಸಚಿವರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಚೆಗೆ ಸರ್ಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ. 4 ಮೀಸಲಾತಿ ನೀಡಿದ್ದಾರೆ. ಇದು ಕಾಂಗ್ರೆಸ್ ಮತ್ತು ಮುಖ್ಯಮಂತ್ರಿಗಳ ಸಂವಿಧಾನ ವಿರೋಧಿ ನಡೆ ಮಾತ್ರವಲ್ಲ; ಹಿಂದೂಗಳಿಗೆ ಅಪಮಾನ ಮಾಡುವ ಕ್ರಮ ಎಂದು ಆರೋಪಿಸಿದರು. ಸಿದ್ದರಾಮಯ್ಯ ಅವರ ಸರಕಾರವು ಜನರು ಸೇವಿಸುವ ಗಾಳಿಯೊಂದನ್ನು ಬಿಟ್ಟು ಮತ್ತೆಲ್ಲದಕ್ಕೂ ತೆರಿಗೆ ಹಾಕುತ್ತಿದೆ ಎಂದು ದೂರಿದರು.
ಹಿಂದೂಗಳಿಗೆ ಅವಮಾನ, ಎಸ್‍ಇಪಿ, ಟಿಎಸ್‍ಪಿ ಹಣ ದುರ್ಬಳಕೆ ವಿಚಾರವನ್ನು ಮುಂದಿಟ್ಟು ಮೈಸೂರಿನಿಂದ ಏಪ್ರಿಲ್ 7ರಿಂದ ಎಲ್ಲ ಜಿಲ್ಲೆಗಳ ಪ್ರವಾಸ ‘ಜನಾಕ್ರೋಶ ಯಾತ್ರೆʼ ಮಾಡುತ್ತೇವೆ. ಪ್ರತಿ ಜಿಲ್ಲೆಗೂ ಯಾತ್ರೆ ತೆರಳಲಿದೆ. ಏಪ್ರಿಲ್ 7ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿಯ ದರ್ಶನ ಪಡೆದು ಪಾದಯಾತ್ರೆ ಮೂಲಕ ಹೋರಾಟ ಆರಂಭಿಸುತ್ತೇವೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಯತ್ನಾಳ್ ಅವರು ಈಗ ಬಹಳ ಫ್ರೀಯಾಗಿದ್ದಾರೆ. ಅವರು ಆರೋಪ ಮಾಡಲಿ. ದಾಳಿ ಮಾಡಲಿ. ಅದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ನಾನು ಎಲ್ಲರ ಜತೆಗೂಡಿ ಹೋರಾಟ, ಜನಜಾಗೃತಿ ಮಾಡಲಿದ್ದೇನೆ. ಇವರ ಗ್ಯಾರಂಟಿ ಎಂದರೆ ಒಂದು ಕೈಯಿಂದ ಕೊಡುವುದು ಮತ್ತು ಇನ್ನೊಂದು ಕೈಯಿಂದ ಕಿತ್ತುಕೊಳ್ಳುವುದು. ಇದರಿಂದ ಜನರು ಇವತ್ತು ತತ್ತರಿಸಿ ಹೋಗಿದ್ದಾರೆ. ಇದೆಲ್ಲದರ ವಿರುದ್ಧ ಜನಜಾಗೃತಿಯನ್ನು ಬಿಜೆಪಿ ಮಾಡಲಿದೆ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ | BY Vijayendra: ಬೆಲೆ ಏರಿಕೆ; ರಾಜ್ಯ ಸರ್ಕಾರದ ವಿರುದ್ಧ ಏ.2ರಿಂದ ಬಿಜೆಪಿ ಅಹೋರಾತ್ರಿ ಧರಣಿ, ಏ.7ರಿಂದ ಜನಾಕ್ರೋಶ ಯಾತ್ರೆ: ವಿಜಯೇಂದ್ರ
ಭಕ್ತರ ಪಾಲಿಗೆ ನಡೆದಾಡುವ ದೇವರು ಎನಿಸಿಕೊಂಡಿದ್ದ ಪರಮಪೂಜ್ಯ ಡಾ. ಶಿವಕುಮಾರ ಮಹಾಸ್ವಾಮೀಜಿಗಳ ಜಯಂತ್ಯುತ್ಸವವನ್ನು ಇವತ್ತು ನಾಡಿನಾದ್ಯಂತ, ದೇಶಾದ್ಯಂತ ಅರ್ಥಪೂರ್ಣವಾಗಿ ಜನರು ಆಚರಿಸುತ್ತಿದ್ದಾರೆ ಎಂದು ತಿಳಿಸಿದ ಅವರು, ಶಿವಕುಮಾರ ಮಹಾಸ್ವಾಮೀಜಿಗಳು ತೋರಿಸಿಕೊಟ್ಟ ಸನ್ಮಾರ್ಗದಲ್ಲಿ ನಾವೆಲ್ಲರೂ ನಡೆಯುವ ಮೂಲಕ ಅವರ ಜಯಂತ್ಯುತ್ಸವವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು.