BY Vijayendra: ಒಳ ಮೀಸಲಾತಿ ಜಾರಿ ಮಾಡುವಾಗ ಯಾವುದೇ ಜಾತಿಗೆ ಅನ್ಯಾಯವಾಗದಂತೆ ನಿರ್ಣಯ ತೆಗೆದುಕೊಳ್ಳಿ: ಬಿವೈವಿ ಆಗ್ರಹ
BY Vijayendra: ಎಸ್‍ಸಿ ಸಮುದಾಯದ 101 ಜಾತಿಗಳಿದ್ದು, ಯಾವುದೇ ಜಾತಿಗೆ ಅನ್ಯಾಯ ಆಗದಂತೆ ನಿರ್ಣಯ ತೆಗೆದುಕೊಳ್ಳಬೇಕು. ನೀವು ತೆಗೆದುಕೊಳ್ಳುವ ತೀರ್ಮಾನದಿಂದ ನಾಳೆ ಇತರ ಜಾತಿಗಳವರು, ಎಸ್‍ಸಿ ಸಮುದಾಯದವರು ಬೀದಿಗಿಳಿದು ಹೋರಾಟ ಮಾಡದಂತೆ ನೋಡಿಕೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.


ಬೆಂಗಳೂರು: ಎಸ್.ಸಿ. ಸಮುದಾಯದ 101 ಜಾತಿಗಳಿದ್ದು, ಒಳ ಮೀಸಲಾತಿ ಜಾರಿ ಮಾಡುವಾಗ ಯಾವುದೇ ಜಾತಿಗೆ ಅನ್ಯಾಯ ಆಗದಂತೆ ನಿರ್ಣಯ ತೆಗೆದುಕೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (BY Vijayendra), ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನೀವು ರಾಜ್ಯದ ಮುಖ್ಯಮಂತ್ರಿಗಳು. ಒಳ ಮೀಸಲಾತಿ ವಿಚಾರದಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಎಸ್‍ಸಿ ಸಮುದಾಯದ 101 ಜಾತಿಗಳಿದ್ದು, ಯಾವುದೇ ಜಾತಿಗೆ ಅನ್ಯಾಯ ಆಗದಂತೆ ನಿರ್ಣಯ ತೆಗೆದುಕೊಳ್ಳಬೇಕು. ನೀವು ತೆಗೆದುಕೊಳ್ಳುವ ತೀರ್ಮಾನದಿಂದ ನಾಳೆ ಇತರ ಜಾತಿಗಳವರು, ಎಸ್‍ಸಿ ಸಮುದಾಯದವರು ಬೀದಿಗಿಳಿದು ಹೋರಾಟ ಮಾಡದಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಎಲ್ಲ ವಿಷಯಗಳನ್ನೂ ವಿಮರ್ಶಿಸಿ, ಸಮರ್ಪಕ ತೀರ್ಮಾನವನ್ನು ರಾಜ್ಯದ ಮುಖ್ಯಮಂತ್ರಿಗಳು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಎಲ್ಲ ಗೊಂದಲಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣಕರ್ತರು. ಗೊಂದಲಗಳು, ಸಮಸ್ಯೆಗೆ ಇತಿಶ್ರೀ ಹಾಡುವ ಕರ್ತವ್ಯ ಈ ರಾಜ್ಯದ ಮುಖ್ಯಮಂತ್ರಿಗಳಿಗೆ ಇದೆ. ಅದನ್ನು ಸರಿಯಾದ ರೀತಿಯಲ್ಲಿ ನಿಭಾಯಿಸುತ್ತಾರೆ ಎಂಬ ಅಪೇಕ್ಷೆಯಲ್ಲಿ ನಮ್ಮ ಎಸ್‍ಸಿ ಸಮುದಾಯ ಇದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಒಳ ಮೀಸಲಾತಿ ವಿಷಯದಲ್ಲಿ ಯಾವುದೇ ಒಂದು ತೀರ್ಮಾನ ತೆಗೆದುಕೊಳ್ಳಲು ಆಗಿಲ್ಲ. ಸರ್ಕಾರವು ಗೊಂದಲದಲ್ಲಿ ಇರುವುದನ್ನು ನಾವು ನೋಡಿದ್ದೇವೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರ ಇದ್ದಾಗ ಪರಿಶಿಷ್ಟ ಜಾತಿಗೆ ಶೇ.15 ಇದ್ದುದನ್ನು ಶೇ.17ಕ್ಕೆ ಏರಿಸಿದ್ದರು. ಪರಿಶಿಷ್ಟ ಪಂಗಡಕ್ಕೆ ಶೇ.3 ಇದ್ದುದನ್ನು ಏರಿಸಿ ಶೇ.7 ಮಾಡಿದ್ದರು. ಆಗ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು, ಅವರ ಜತೆಗಾರರು ಅದು ಅನುಷ್ಠಾನ ಆಗಿಲ್ಲ; ಬಿಜೆಪಿಯವರು ಕೇವಲ ಭಾಷಣ ಮಾಡುತ್ತಾರೆ ಎಂದು ಅಪಪ್ರಚಾರ ಮಾಡಿದ್ದರು ಎಂದು ಆರೋಪಿಸಿದರು.
ನಾಗಮೋಹನ್‍ದಾಸ್ ವರದಿ ಅಂಶಗಳು ಏನಿದೆಯೋ ಅದನ್ನೇ ಬಿಜೆಪಿ ಈ ಹಿಂದೆ ಜಾರಿ ಮಾಡಿತ್ತು. ಸಿದ್ದರಾಮಯ್ಯ ಅವರು ಇವತ್ತು ಸಚಿವ ಸಂಪುಟದ ವಿಶೇಷ ಸಭೆ ಕರೆದಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ಮಾಡಿದ್ದನ್ನೇ ಇವರೂ ಮಾಡಲು ಹೊರಟಿದ್ದಾರೆ ಎಂದು ವಿಶ್ಲೇಷಿಸಿದರು.
ಈ ಸುದ್ದಿಯನ್ನೂ ಓದಿ | Bengaluru Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ
ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ಅಪಪ್ರಚಾರ, ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೆಲಸ ಆಗಿದ್ದು, ರಾಜ್ಯ ಸರ್ಕಾರಕ್ಕೆ ಧರ್ಮಸ್ಥಳ- ಶ್ರೀ ಮಂಜುನಾಥೇಶ್ವರನ ಬಗ್ಗೆ ಕಿಂಚಿತ್ತಾದರೂ ನಂಬಿಕೆ ಇದ್ದರೆ, ಆ ಶಕ್ತಿಗಳ ಕುರಿತು ಸರ್ಕಾರ ತನಿಖೆ ನಡೆಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯಿಸಿದರು.