ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

HD Kumaraswamy: ಶೀಘ್ರವೇ ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಬೆಳವಣಿಗೆ; ಸಿಎಂ ಬದಲಾವಣೆ ಸುಳಿವು ಕೊಟ್ರಾ ಕುಮಾರಸ್ವಾಮಿ?

Karnataka CM Race: ಆಡಳಿತ ಪಕ್ಷ ಕಾಂಗ್ರೆಸ್‌ನಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಪರೋಕ್ಷವಾಗಿ ಬೊಟ್ಟು ಮಾಡಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ದಿನಕ್ಕೊಂದು, ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವುದು ನೋಡಿದರೆ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ರಾಜಕೀಯ ಕ್ರಾಂತಿಯೇ ಆಗುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ.

ಶೀಘ್ರವೇ ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಬೆಳವಣಿಗೆ: ಕುಮಾರಸ್ವಾಮಿ

ಜೆಡಿಎಸ್ ಬೆಳ್ಳಿ ಹಬ್ಬದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಎಚ್‌.ಡಿ. ದೇವೇಗೌಡರು -

Prabhakara R
Prabhakara R Nov 22, 2025 9:08 PM

ಬೆಂಗಳೂರು, ನ.22: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿರುವ ನಡುವೆ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು, ಶೀಘ್ರದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆಗಳು ನಡೆಯುವ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನಡೆದ ಜೆಡಿಎಸ್ ಪಕ್ಷದ ಬೆಳ್ಳಿಹಬ್ಬದ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ನೋಡಿದರೆ, ಮುಂದಿನ ದಿನಗಳಲ್ಲಿ ಯಾರೂ ಕೂಡ ನಿರೀಕ್ಷೆ ಮಾಡದಂತಹ ಬೆಳವಣಿಗೆಗಳು ನಡೆಯಲಿವೆ ಎಂದು ಭವಿಷ್ಯ ನುಡಿದರು.

ರಾಜಕೀಯದಲ್ಲಿ ಯಾರು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಹೇಳಲಿಕ್ಕೆ ಆಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಟಿ ಆಗಿದೆ. ರಾಜ್ಯ ರಾಜಕಾರಣದಲ್ಲಿ ಅನಿರೀಕ್ಷಿತ ಮತ್ತು ಸ್ಪೋಟಕ ಬೆಳವಣಿಗೆಗಳು ನಡೆಯಲಿವೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಆಡಳಿತ ಪಕ್ಷ ಕಾಂಗ್ರೆಸ್‌ನಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಪರೋಕ್ಷವಾಗಿ ಬೊಟ್ಟು ಮಾಡಿದ ಅವರು, ದಿನಕ್ಕೊಂದು, ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವುದು ನೋಡಿದರೆ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ರಾಜಕೀಯ ಕ್ರಾಂತಿಯೇ ಆಗುವ ಸಾಧ್ಯತೆ ಇದೆ. ಹೀಗಾಗಿ ಕಾರ್ಯಕರ್ತರು ಮತ್ತು ಮುಖಂಡರು ಜನರ ಜತೆಯೇ ಇರಬೇಕು. ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಕೇಂದ್ರ ಸಚಿವರು ಕರೆ ನೀಡಿದರು.

ಈ ಸುದ್ದಿಯನ್ನೂ ಓದಿ : ಆಪ್ತ ಶಾಸಕರ ದೆಹಲಿ ಭೇಟಿ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದ ಡಿ.ಕೆ. ಶಿವಕುಮಾರ್‌

ಜನ ಕೆಟ್ಟ ಆಡಳಿತದಿಂದ ರೋಸಿ ಹೋಗಿದ್ದಾರೆ. ತೆರಿಗೆ, ದರ ಏರಿಕೆ ಸುಳಿಗೆಯಿಂದ ಬೇಸತ್ತು ಹೋಗಿದ್ದಾರೆ. ಮುಂದೆ ನಮ್ಮ ಪಕ್ಷಕ್ಕೆ ಒಂದು ಅವಕಾಶ ಕೊಡಿ. ಐದು ವರ್ಷದಲ್ಲಿ‌ ಯಾವ ರೀತಿ ಆಡಳಿತ ಕೊಡಬೇಕು, ಜನರಿಗೆ ಏನೆಲ್ಲ ಒಳ್ಳೆಯದು ಮಾಡಬೇಕು ಎಂಬುದನ್ನು ಸಾಬೀತು ಮಾಡಿ ತೋರಿಸುತ್ತೇನೆ. ಒಂದು ವೇಳೆ ಜನ ಮೆಚ್ಚುವ ಸರ್ಕಾರ ನನ್ನಿಂದ ಕೊಡಲು ಆಗದಿದ್ದರೆ ಈ ಜನ್ಮದಲ್ಲಿ ಮತ್ತೆ ನನ್ನ ಮುಖ ತೋರಿಸಲ್ಲ ಎಂದು ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ರಾಜ್ಯದ ಸಾಲ 7.50 ಲಕ್ಷ ಕೋಟಿ ದಾಟಿದೆ. ಸಿದ್ಧರಾಮಯ್ಯ ಒಬ್ಬರೇ 5ರಿಂದ 5.50 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಏನಕ್ಕೆ ಮಾಡಿದ್ರು ಇಷ್ಟು ಸಾಲವನ್ನು? ಯಾವ ಪುರುಷಾರ್ಥಕ್ಕೆ ಮಾಡಿದ್ರು ಎಂಬುದನ್ನು ಜನರಿಗೆ ಉತ್ತರ ಕೊಡಬೇಕು ಎಂದು ಅವರು ಒತ್ತಾಯ ಮಾಡಿದರು.

ಜ್ಯೋತಿಷಿಗಳನ್ನು ಟ್ರ್ಯಾಪ್ ಮಾಡಿ ದೇವೇಗೌಡರನ್ನು ವಂಚಿಸಿದರು!

ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಇಡೀ ಬದುಕನ್ನು ಜನರಿಗೆ ಮೀಸಲಿಟ್ಟರು. ಅವರು ಅಧಿಕಾರಕ್ಕಾಗಿ ಇನ್ನೊಬ್ಬರ ಮನೆ ಬಾಗಿಲಿಗೆ ಹೋದವರಲ್ಲಾ. ಈ ರಾಜ್ಯವನ್ನು ದೀರ್ಘ ಕಾಲ ಆಳಿದ ದೇವರಾಜು ಅರಸು ಅವರೇ ಬಂದು ನಮ್ಮ ಜತೆ ಕೈ ಜೋಡಿಸು ಎಂದು ಹೇಳಿದರೂ ದೇವೇಗೌಡರು ಕೇಳಲಿಲ್ಲ. ಒಂದು ಆದರ್ಶ, ಮೌಲ್ಯ ಇಟ್ಟುಕೊಂಡು ಅವರು ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಅಂತಹವರ ಮೇಲೆ ಇಲ್ಲಸಲ್ಲದ ಆಪಾದನೆಗಳನ್ನು ಮಾಡಿದರು. ದೇವೇಗೌಡರು ಜ್ಯೋತಿಷ್ಯರನ್ನು ನಂಬುತ್ತಾರೆ ಎಂದು, ಆ ಜ್ಯೋತಿಷಿಗಳನ್ನು ಟ್ರ್ಯಾಪ್ ಮಾಡಿ ವಂಚಿಸಿದರು. ಅಲ್ಲದೆ, ಮೈಸೂರಿನಲ್ಲಿ ದೇವೇಗೌಡರು 500 ನಿವೇಶನಗಳನ್ನು ಖರೀದಿ ಮಾಡಿದ್ದಾರೆ ಎಂದು ಸುಳ್ಳು ಪ್ರಚಾರ ಮಾಡಿದರು ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ದೇವೇಗೌಡರ ವಿರುದ್ಧ ಸಿಐಡಿ, ಲೋಕಾಯುಕ್ತ ಸೇರಿ ಅನೇಕ ತನಿಖೆಗಳನ್ನು ನಡೆಸಿದರು. ಕೊನೆಗೆ ಸತ್ಯಕ್ಕೆ ಜಯವಾಯಿತು. ದೇವೇಗೌಡರು ಏನೆಂಬುದು ರಾಜ್ಯದ ಜನತೆಗೆ ತಿಳಿಯಿತು ಎಂದು ಅವರು ಹೇಳಿದರು.

ಜನರು ಹಾಗೂ ಕಾರ್ಯಕರ್ತರಿಂದ ಜೆಡಿಎಸ್ ಉಳಿದಿದೆ. ಜನತೆಗೆ ನಮ್ಮ ಕೈಲಾದಷ್ಟು ಒಳ್ಳೆಯದನ್ನು ಮಾಡಿದ್ದೇವೆ. ನಾವೇನು ಅನ್ಯಾಯ ಮಾಡಿದ್ದೇವೆ ಈ ರಾಜ್ಯಕ್ಕೆ? ದೇವೇಗೌಡರು ಏನು ಅನ್ಯಾಯ ಮಾಡಿದ್ದಾರೆ? ನಮಗೆ ಯಾಕೆ ಪೂರ್ಣ ಪ್ರಮಾಣದ ಆಶೀರ್ವಾದ ಸಿಕ್ಕಿಲ್ಲ? ಯಾವ ಸಮುದಾಯಕ್ಕೂ ನಮ್ಮ ಪಕ್ಷದಿಂದ ಅನ್ಯಾಯ ಆಗಿಲ್ಲ. ಬೇರೆ ಬೇರೆ ರಾಜ್ಯಗಳ ಜನರು ದೇವೇಗೌಡರನ್ನು ನೆನಪು ಮಾಡಿಕೊಳ್ಳುತ್ತಾರೆ. ನಮ್ಮ ರಾಜ್ಯದ ಜನತೆಗೆ ಏಕೆ ಅಂತಹ ಭಾವನೆ ಇಲ್ಲ ಎಂದು ಸಚಿವರು ಅತೀವ ಬೇಸರ ವ್ಯಕ್ತಪಡಿಸಿದರು.

ಗ್ಯಾರಂಟಿ ಹೆಸರಿನಲ್ಲಿ ಸರ್ಕಾರ ದರೋಡೆ ಮಾಡ್ತಿದೆ:

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಲೂಟಿ ಮಾಡುತ್ತಿದೆ. ಇನ್ನು ಎಷ್ಟು ದರೋಡೆ ಮಾಡುತ್ತೀರಿ? ಎಷ್ಟೊಂದು ತೆರಿಗೆಗಳನ್ನು ಏರಿಸಿದಿರಿ? ಎಷ್ಟೊಂದು ಬೆಳೆಗಳನ್ನು ಹೆಚ್ಚಳ ಮಾಡಿದಿರಿ? ಬಿ ಖಾತಾ ಏ ಖಾತಾ ತೆರಿಗೆ ಎಂದು ದೋಖಾ ಮಾಡುತ್ತಿದೀರಿ. ಬೆಂಗಳೂರಿನಲ್ಲಿ, ರಾಜ್ಯದಲ್ಲಿ ರಸ್ತೆ ಗುಂಡಿಗೆ ಬಿದ್ದು ಎಷ್ಟೋ ಜನ ಸಾವನಪ್ಪಿದ್ದಾರೆ. ಕಬ್ಬು ಬೆಳೆಗಾರರ ಕಬ್ಬಿಗೆ ಬೆಂಕಿ ಹಾಕಿದ್ದು ಯಾರು ಅಂತಾ ಗೊತ್ತಿಲ್ಲಾ. ಈ ಪಾಪ ಸುಮ್ಮನೆ ಹೋಗಲ್ಲ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ನಾನು ಎರಡು ಬಾರಿ ಸಿಎಂ ಆಗಿದ್ದರೂ ಸಂಪೂರ್ಣ ಬಹುಮತದ ಸರ್ಕಾರ ಸಿಗಲಿಲ್ಲ. ಬಿಜೆಪಿ ಕಾಂಗ್ರೆಸ್ ಜತೆ ಸೇರಿ ಸರ್ಕಾರ ಮಾಡಿದೆ. 20 ತಿಂಗಳ ಅಧಿಕಾರವದಿಯಲ್ಲಿ ನೂರಾರು ಕಾಲೇಜು, ಆಸ್ಪತ್ರೆ ಕಟ್ಟಿದ್ದೇವೆ. ಲಾಟರಿ, ಸಾರಾಯಿ ನಿಷೇಧ ಮಾಡಿದಾಗ ಯಾವ ರೀತಿ ನನ್ನ ಮೇಲೆ ಎಷ್ಟೇ ಒತ್ತಡ ಹಾಕಿದರೂ ರಾಜ್ಯದ ಹೆಣ್ಣು ಮಕ್ಕಳ ಒಳ್ಳೆಯದಕ್ಕಾಗಿ ನಾನು ಅವುಗಳನ್ನು ಬ್ಯಾನ್ ಮಾಡಿದೆ. ಆ ಕಾರಣಕ್ಕೆ ಜನರು ನನಗೆ ಶಿಕ್ಷೆ ವಿಧಿಸುತ್ತಿದ್ದಾರೆಯೇ? ಎಂದು ನೋವು ವ್ಯಕ್ತಪಡಿಸಿದರು ಕೇಂದ್ರ ಸಚಿವರು.

25 ರಿಂದ 26 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿದೆ. ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ 500 ರಿಂದ 1000 ಕೋಟಿ ಅನುದಾನ ಕೊಟ್ಟೆ. ಇಷ್ಟಾದರೂ ನಮಗೆ ಜನರು ಪೂರ್ಣ ಬಹುಮತ ನೀಡುತ್ತಿಲ್ಲ ಯಾಕೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಜಾತಿ ಗಣತಿ ಹೆಸರಿನಲ್ಲಿ ಜನರ ವಿಭಜನೆ:

ಅಭಿವೃದ್ಧಿ ಹೆಸರಿನಲ್ಲಿ ರಾಜಕಾರಣ ಮಾಡಲು ಇವರಿಗೆ ಆಗುತ್ತಿಲ್ಲ. ಅದರಿಂದಲೇ ವಾಮಮಾರ್ಗಗಳ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿವೆ ಎಲ್ಲಿವೆ ಕಾಂತರಾಜು , ಜಯಪ್ರಕಾಶ್ ಹೆಗಡೆ, ಮದುಸೂದನ್ ನಾಯ್ಕ್ ವರದಿಗಳು? ಸ್ವಲ್ಪ ಹೇಳುತ್ತೀರಾ ಮುಖ್ಯಮಂತ್ರಿಗಳೇ ಎಂದು ಕುಮಾರಸ್ವಾಮಿ ಅವರು ಹರಿಹಾಯ್ದರು.

ಸಿದ್ದರಾಮಯ್ಯ ಅವರು 25- 30 ವರ್ಷದಿಂದಲೂ ಅಧಿಕಾರದಲ್ಲಿಯೇ ಇದ್ದಾರೆ. ಈ ರಾಜ್ಯಕ್ಕೆ ಏನು ಕೊಡುಗೆ ನೀಡಿದ್ದಾರೆ? ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದಾರೆ. ಏನು ಸಾಧನೆ ಮಾಡಿದ್ದೀರಿ? ಬೆಂಗಳೂರು ನಗರವನ್ನು ಹೋಳು ಮಾಡಿ ಗ್ರೇಟರ್ ಬೆಂಗಳೂರು ಅಂತ ಮಾಡಿ ಐವರು ಮೇಯರ್ ಗಳನ್ನ ಮಾಡಿ ಏನ್ ಮಾಡ್ತಿರಪ್ಪ ನೀವು? ಎಂದು ಅವರು ಟೀಕಾಪ್ರಹಾರ ನಡೆಸಿದರು.

ಈ ಸುದ್ದಿಯನ್ನೂ ಓದಿ : ಜೆಡಿಎಸ್‌ ರಜತ ಮಹೋತ್ಸವದಲ್ಲಿ ಪಕ್ಷದ ಚಿನ್ಹೆಯುಳ್ಳ ಬೆಳ್ಳಿ ನಾಣ್ಯ ಲೋಕಾರ್ಪಣೆ

ರಾಜ್ಯದ ಜನರ ಋಣ ತೀರಿಸುವೆ:

ಕೇಂದ್ರದಲ್ಲಿ ನರೇಂದ್ರ ಮೋದಿಯವರು ನನಗೆ ಅವಕಾಶ ಕೊಟ್ಟಿದ್ದಾರೆ. ಆಂಧ್ರಪ್ರದೇಶದ ವೈಜಾಗ್‌ನಲ್ಲಿ ಸ್ಟೀಲ್ ಫ್ಯಾಕ್ಟರಿ ಪುನರಾರಂಭ ಮಾಡಿದ್ದೇನೆ. ಭದ್ರಾವತಿಯ ಸರ್‌ ಎಂ. ವಿಶ್ವೇಶ್ವರಯ್ಯ ಸ್ಟೀಲ್ ಫ್ಯಾಕ್ಟರಿಯನ್ನು ಪುನಶ್ಚೇತನ ಮಾಡಿ, ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.