ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಚ್ ಖಂಡಿಸಿ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪ್ರಧಾನಮಂತ್ರಿಗಳ ಮನೆ ಮುಂದೆ ಮಂಗಳವಾರ ನಡೆಸಿದ ಪ್ರತಿಭಟನೆಯಲ್ಲಿ (Congress Protest in Delhi) ಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದ್ದರು.
ಜು.20ರಂದು ದೆಹಲಿಯಲ್ಲಿ ಸಿಜೆಪಿ ಹಮ್ಮಿಕೊಂಡಿದ್ದ ಸಂಸತ್ ಚಲೋ ಬೃಹತ್ ಪ್ರತಿಭಟನಾ ಮೆರವಣಿಗೆ ವೇಳೆ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕಿದ್ದಾರೆ.
ಈ ವೇಳೆ ಮಾತನಾಡಿರುವ ಸಿಎಂ ಡಿ.ಕೆ.ಶಿವಕುಮಾರ್ ಅವರು, ನಾವು ವಿದ್ಯಾರ್ಥಿಗಳೊಂದಿಗೆ ನಿಲ್ಲುತ್ತೇವೆ ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಗೂ ನ್ಯಾಯ ಸಿಗುವವರೆಗೆ ನಾವು ಹೋರಾಡುತ್ತೇವೆ. ನಮ್ಮನ್ನು ಬಂಧಿಸಿದರೂ ನಾವು ಹೆದರಲ್ಲ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಸಂಸತ್‌ನಲ್ಲಿ ಚರ್ಚೆಯಾಗಬೇಕು, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಿಎಂ ಡಿಕೆ ಶಿವಕುಮಾರ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್ ಮತ್ತು ಪವನ್ ಖೇರಾ ಸೇರಿ ಹಲವು ಪ್ರಮುಖ ನಾಯಕರು ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಕರ್ನಾಟಕ ಸಿಎಂ ಡಿ.ಕೆ.ಶಿವಕುಮಾರ್ ಅವರೂ ಭಾಗಿಯಾಗಿ, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮೋದಿ, ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಒತ್ತಾಯ
ಇನ್ನು ಪ್ರತಿಭಟನೆ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ ಅವರು, ನಿನ್ನೆ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯಕ್ಕೆ ಪ್ರಧಾನಿ ಮೋದಿಯವರಿಂದ ಉತ್ತರದಾಯಿತ್ವವನ್ನು ಕೇಳಲು ನಾವು ಅವರ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದೇವೆ. ಸರ್ಕಾರವು ಯಾವುದೇ ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಬಯಸುವುದಿಲ್ಲ, ಅಥವಾ ಸಂಸತ್ತಿನಲ್ಲಿ ಈ ಕುರಿತು ಚರ್ಚೆ ನಡೆಸಲು ಸಿದ್ಧವಿಲ್ಲ. ಭಾರತದ ಯುವಕರ ಭವಿಷ್ಯವನ್ನು ಹಾಳುಮಾಡುತ್ತಿರುವ ಪ್ರಧಾನಿ ಹಾಗೂ ಗೃಹ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.