CM Siddaramaiah: ಸಮಿತಿ ವರದಿ ಬಂದ ಬಳಿಕ ಒಪಿಎಸ್ ಜಾರಿ ಬಗ್ಗೆ ಸೂಕ್ತ ನಿರ್ಧಾರ: ಸಿಎಂ ಭರವಸೆ
CM Siddaramaiah: ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.


ಮೈಸೂರು: ಸರ್ಕಾರಿ ನೌಕರರು ಜಾತಿ-ಧರ್ಮ ಮಾಡೋಕೆ ಹೋಗಬಾರದು. ಪ್ರತಿಭೆ ಯಾರ ಸೊತ್ತೂ ಅಲ್ಲ. ಅವಕಾಶ ಸಿಕ್ಕರೆ ಪ್ರತಿಭೆ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳದಿದ್ದರೆ ಯಾರನ್ನೂ ದೂರಲು ಸಾಧ್ಯವಿಲ್ಲ ಎಂದು ಹೇಳಿದರು.
ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ನಿಮ್ಮ ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ ಎಂದು ಹೇಳಿದರು.
ನಮಗೆ ವಿಶ್ವ ಮಾನವರಾಗುವ ಅವಕಾಶ ಇದೆ. ಅಲ್ಪ ಮಾನವರಾಗುವುದು ಬೇಡ. ಹುಟ್ಟು ಆಕಸ್ಮಿಕ. ಸಾವು ಗ್ಯಾರಂಟಿ. ಆದ್ದರಿಂದ ನಾವು ಸಮಾಜದ ಋಣ ತೀರಿಸಿ ಬದುಕನ್ನು ಸಾರ್ಥಕ ಮಾಡಿಕೊಳ್ಳಿ ಎಂದು ಕರೆ ನೀಡಿದರು. ಶಿಕ್ಷಕರು, ಸೈನಿಕರು, ರೈತರು ನಮ್ಮ ಬದುಕನ್ನು ಹಸನು ಮಾಡಿದ್ದಾರೆ. ಈ ಮೂವರ ಋಣ ತೀರಿಸುವ ಕೆಲಸ ನಾವು ಮಾಡಬೇಕಿದೆ ಎಂದರು. ಮಕ್ಕಳಲ್ಲೂ ವೈಚಾರಿಕ, ವೈಜ್ಞಾನಿಕ ಪ್ರಜ್ಞೆ ಮೂಡಿಸುವ ಮೂಲಕ ಸಮಾಜಮುಖಿ ಪ್ರಜೆಗಳನ್ನು ರೂಪಿಸಿ ಎಂದು ತಿಳಿಸಿದರು.
ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಈ ಸುದ್ದಿಯನ್ನೂ ಓದಿ | Karnataka Rains: ನಾಳೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್; ಭಾರಿ ಮಳೆ ಸಾಧ್ಯತೆ!
ಆರೋಗ್ಯ ಸಂಜೀವಿನಿ ಬಗ್ಗೆಯೂ ಸೂಕ್ತ ತೀರ್ಮಾನ ಆಗಿದೆ ಎಂದು ತಿಳಿಸಿದ ಅವರು, ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ದವಿದೆ. ನಿಮ್ಮ ಬೇಡಿಕೆಗಳ ಈಡೇರಿಕೆಗೆ ಸದಾ ತೆರೆದ ಮನಸ್ಸಿನಿಂದ ಇರುತ್ತೇನೆ. ಹಾಗೆಯೇ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು, ಈ ಜವಾಬ್ದಾರಿಯನ್ನೂ ನೀವು ಪರಿಣಾಮಕಾರಿಯಾಗಿ ಜನರಿಗೆ, ಫಲಾನುಭವಿಗಳಿಗೆ ತಲುಪಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.