ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ಕ್ಷೇತ್ರ ಉಪ ಚುನಾವಣೆಯಲ್ಲಿ (Bagalkot By-Election Results 2026) ಜಯಭೇರಿ ಬಾರಿಸಿದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತದಾನ ಮಾಡಿ ಗೆಲ್ಲಿಸಿದ ಸಮಸ್ತ ಮತದಾರ ಬಂಧುಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಇದು ನಮ್ಮ ಸರ್ಕಾರದ ಸಾಧನೆಗಳಿಗೆ ಮತ್ತು ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಸಿಕ್ಕ ಜಯವಾಗಿದೆ ಎಂದು ತಿಳಿಸಿದ್ದಾರೆ.
ವಿರೋಧಪಕ್ಷಗಳ ಅಪಪ್ರಚಾರ ಮತ್ತು ಹಣದ ಪ್ರಭಾವದ ಹೊರತಾಗಿಯೂ ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷ ಮತ್ತು ನಮ್ಮ ಸರ್ಕಾರದ ಮೇಲೆ ನಂಬಿಕೆ ಇಟ್ಟು ಮತಚಲಾಯಿಸಿದ್ದಾರೆ. ಈ ಎರಡೂ ಕ್ಷೇತ್ರಗಳ ಮತದಾರರಷ್ಟೇ ಅಲ್ಲ ಇಡೀ ರಾಜ್ಯದ ಜನತೆ ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ರಾಜ್ಯದ ಮತದಾರರು ಇದೇ ರೀತಿ ನಮ್ಮನ್ನು ಹರಸುತ್ತಾರೆ ಎಂಬ ನಂಬಿಕೆ ನಮಗೆ ಇದೆ ಎಂದು ಹೇಳಿದ್ದಾರೆ.
ಸಮರ್ಥ್ ಶಾಮನೂರು, ಉಮೇಶ್ ಮೇಟಿಗೆ ಡಿಸಿಎಂ ಡಿಕೆಶಿ ಅಭಿನಂದನೆ
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿಗಳಾದ ಸಮರ್ಥ್ ಶಾಮನೂರು ಹಾಗೂ ಉಮೇಶ್ ಮೇಟಿ ಅವರಿಗೆ ಅಭಿನಂದನೆಗಳು. ಈ ಜಯವು ನಮ್ಮ ಸರ್ಕಾರದ ಜನಪರ ಯೋಜನೆಗಳಿಗೆ ಹಾಗೂ ಕಾರ್ಯಕರ್ತರ ಅವಿರತ ಶ್ರಮಕ್ಕೆ ಸಂದ ಗೌರವವಾಗಿದೆ ಎಂದು ಡಿಸಿಎಂ ಡಿ.ಕೆ.ಶಿಕುಮಾರ್ ತಿಳಿಸಿದ್ದಾರೆ.