ಬೆಂಗಳೂರು: ಸರ್ಕಾರ ರಚಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ. ಕಾಂಗ್ರೆಸ್ ನಾಯಕರೊಂದಿಗೆ ಲೋಕಭವನಕ್ಕೆ ಡಿ.ಕೆ.ಶಿವಕುಮಾರ್ ಅವರು ಶನಿವಾರ ರಾತ್ರಿ ತೆರಳಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು. ಇದರ ಬೆನ್ನಲ್ಲೇ ಸರ್ಕಾರ ರಚನೆಗೆ ಗವರ್ನರ್ ಆಹ್ವಾನ ನೀಡಿದ್ದಾರೆ.
ಈ ಬಗ್ಗೆ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯಪಾಲರಿಂದ ಅಧಿಕೃತ ಪತ್ರ ಬಂದಿದೆ. ಲೋಕಭವನದಲ್ಲಿ ಜೂನ್ 3ರಂದು ಸಂಜೆ 4.05 ಗಂಟೆಗೆ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ, ತಾವು ತಮ್ಮ ತಂಡದೊಂದಿಗೆ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಬೇಕು ಎಂದು ಪತ್ರದಲ್ಲಿ ರಾಜ್ಯಪಾಲರು ಕೋರಿದ್ದಾರೆ.
ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್ ಆಯ್ಕೆ
ರಾಜ್ಯಪಾಲರ ಭೇಟಿಗೂ ಮುನ್ನ ಶನಿವಾರ ಸಂಜೆ ವಿಧಾನಸೌಧದಲ್ಲಿ ಸಿಎಲ್‌ಪಿ ಸಭೆ ನಡೆಯಿತು. ಸಭಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು. ಡಾ. ಜಿ ಪರಮೇಶ್ವರ್ ಅವರು ಅನುಮೋದಿಸಿದರು. ಇದನ್ನು ಸಭೆಯು ಒಕ್ಕೊರಲಿನಿಂದ ಬೆಂಬಲಿಸಿತು.
ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆಯಾಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಘೋಷಿಸಿದರು.