ಹಾಸನ: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ (Chennamma's funeral) ಅವರ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಸೋಮವಾರದಂದು (ಜು.20) ಹೊಳೆನರಸೀಪುರ ತಾಲೂಕಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಮತ್ತೊಂದೆಡೆ ಹೊಳೆನರಸೀಪುರದ ಎಲ್ಲಾ ಅಂಗಡಿಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಗೌರವ ಸಲ್ಲಿಸಲು ವ್ಯಾಪಾರಸ್ಥರು ನಿರ್ಧರಿಸಿದ್ದಾರೆ.
ನಾಳೆ ಮಧ್ಯಾಹ್ನ ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿಯಲ್ಲಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನೆರವೇರಲಿದೆ. ಗಣ್ಯ ವ್ಯಕ್ತಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಹೊಳೆನರಸೀಪುರ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಸಂದಣೆ, ಟ್ರಾಫಿಕ್ ಜಾಮ್ ಹೆಚ್ಚಾಗುವ ಸಾಧ್ಯತೆ ಇದೆ.
ವಿದ್ಯಾರ್ಥಿಗಳ ಸುರಕ್ಷತೆ, ಸಾರ್ವಜನಿಕ ಶಾಂತಿ ಮತ್ತು ಸುಗಮ ಸಂಚಾರ ದೃಷ್ಟಿಯಿಂದ ಹೊಳೆನರಸೀಪುರ ತಾಲೂಕಿನ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಖಾಸಗಿ, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಎಲ್ಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ರಾಜಕಾರಣಿಗಳು, ಸಿನಿಮಾ ನಟರು, ಸ್ವಾಮೀಜಿಗಳು, ಸಾರ್ವಜನಿಕರು ಭಾನುವಾರ ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದರು. ಚೆನ್ನಮ್ಮ ಅವರ ಪಾರ್ಥಿವ ಶರೀರ ಬೆಂಗಳೂರಿನಿಂದ ಹರದನಹಳ್ಳಿಗೆ ಕೊಂಡೊಯ್ಯಲಾಗುತ್ತಿದೆ. ಈಗಾಗಲೇ ಚೆನ್ನಮ್ಮ ಅಂತ್ಯಕ್ರಿಯೆ ನಡೆಯಲಿರುವ ಕ್ಯಾತನಹಳ್ಳಿಗೆ ದೇವೇಗೌಡರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ.