ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲು ಮಾಡಲು ಕಾಂಗ್ರೆಸ್ ಷಡ್ಯಂತ್ರ: ಬಿ.ಎಸ್.ಯಡಿಯೂರಪ್ಪ

BS Yeddyurappa: ಕಾಂಗ್ರೆಸ್ ಷಡ್ಯಂತ್ರದ ವಿರುದ್ಧ ಬಿಜೆಪಿ ಆಂದೋಲನ ನಡೆಸುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಪಕ್ಷ ಒಟ್ಟಾಗಿ ಸೇರಿ ರಾಜ್ಯದಲ್ಲಿ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)

ಕೋಲಾರ, ನ.3: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಕಾಂಗ್ರೆಸ್ ಷಡ್ಯಂತ್ರ, ಕುತಂತ್ರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ (BS Yediyurappa) ಆರೋಪಿಸಿದ್ದಾರೆ. “ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ” ಪಾದಯಾತ್ರೆ ಸಂದರ್ಭದಲ್ಲಿ ಮಂಗಳವಾರ ಅವರು ಮಾತನಾಡಿದರು.

ಕಾಂಗ್ರೆಸ್ ಷಡ್ಯಂತ್ರದ ವಿರುದ್ಧ ಬಿಜೆಪಿ ಆಂದೋಲನ ನಡೆಸುತ್ತಿದೆ ಎಂದು ತಿಳಿಸಿದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಪಕ್ಷ ಒಟ್ಟಾಗಿ ಸೇರಿ ರಾಜ್ಯದಲ್ಲಿ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು‌ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಭಿವೃದ್ಧಿ ಕಾರ್ಯ ಸ್ಥಗಿತವಾಗಿದೆ. ಹಾಲಿನ ದರ ಸೇರಿ ನಿತ್ಯ ವಸ್ತುಗಳ ಬೆಲೆ ಏರಿಸಲಾಗುತ್ತಿದೆ ಎಂದು ಆಕ್ಷೇಪಿಸಿದರು. ಜನರು ಉಸಿರುಗಟ್ಟುವ ಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿದರು. ಪಕ್ಷವನ್ನು ಬಲಪಡಿಸಿ, ಕರ್ನಾಟಕದಲ್ಲಿ ಬಹುಮತದ ಸರ್ಕಾರ ತರುವಂತೆ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು.

ದೇಶವಿರೋಧಿ ಶಕ್ತಿಗಳ ವಿರುದ್ಧ ಜಾಗೃತಿ: ವಿಜಯೇಂದ್ರ

ಕೋಲಾರ: ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದವರಿಗೆ ಸಹಿಸಲು ಆಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂಥ ದೇಶವಿರೋಧಿ ಶಕ್ತಿಗಳ ವಿರುದ್ಧ ನಾವು ಜಾಗೃತಿ ಮೂಡಿಸುತ್ತಿದ್ದೇವೆ ಎಂದರು.

“ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ” ಪಾದಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಜಿ ಅವರ ನೇತೃತ್ವದ ಎನ್‍ಡಿಎ ಸರಕಾರ ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ. ಇಡೀ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿಯವರು ಹೊರಟಿದ್ದಾರೆ ಎಂದು ಆಕ್ಷೇಪಿಸಿದರು.

ಕೇಂದ್ರ ಸರಕಾರ ಬುಡಮೇಲು ಮಾಡಲು ಇವರು ಹೊರಟಿದ್ದಾರೆ. ದೆಹಲಿಯಲ್ಲಿ ಪ್ರತಿಭಟನೆ ಮಾಡಿ ಅರಾಜಕತೆ ಸೃಷ್ಟಿಸುವ ಯತ್ನ ನಡೆದಿದೆ. ಬಾಂಗ್ಲಾ, ಶ್ರೀಲಂಕಾ, ನೇಪಾಳ, ಫ್ರಾನ್ಸ್‌ನಲ್ಲಿ ಅರಾಜಕತೆ ಸೃಷ್ಟಿಸಲು ಇವರು ಯತ್ನಿಸಿದ್ದರು ಎಂದು ದೂರಿದರು.

ದೇಶದಲ್ಲಿ ಹಲವು ಬಾರಿ ಎಸ್‍ಐಆರ್ ನಡೆದಿದೆ. ಕಾಂಗ್ರೆಸ್ಸಿನವರಿಗೆ ಎಸ್‍ಐಆರ್, ಇವಿಎಂ ಕುರಿತು ವಿಶ್ವಾಸವಿಲ್ಲ. ಇವರಿಗೆ ಸುಪ್ರೀಂ ಕೋರ್ಟ್ ಬಗ್ಗೆಯೂ ವಿಶ್ವಾಸವಿಲ್ಲ ಎಂದು ಟೀಕಿಸಿದರು. ನಾಳೆ ಚಿತ್ರದುರ್ಗದಲ್ಲಿ ಪಾದಯಾತ್ರೆ ನಡೆಯಲಿದೆ ಎಂದು ಹೇಳಿದರು.

ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಬೈರತಿ ಬಸವರಾಜು, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಮಾಜಿ ಸಂಸದ ಮುನಿಸ್ವಾಮಿ, ಮಾಜಿ ಎಂಎಲ್‍ಸಿ ನಾರಾಯಣಸ್ವಾಮಿ, ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ, ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕ ವರ್ತೂರ್ ಪ್ರಕಾಶ್, ಪ್ರಮುಖರು ಹಾಜರಿದ್ದರು.