ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಯಾವುದೇ ಕ್ಷಣದಲ್ಲಿ ಜಿಬಿಎ ಚುನಾವಣೆ ದಿನಾಂಕ ಘೋಷಣೆ; ಸಿದ್ಧರಾಗಲು ಕಾರ್ಯಕರ್ತರಿಗೆ ಎಚ್‌ಡಿಕೆ ಸೂಚನೆ

HD Kumaraswamy: ರಾಜ್ಯ ಸರ್ಕಾರ ಮೇಲಿಂದ ಮೇಲೆ ಗ್ರೇಟರ್ ಬೆಂಗಳೂರು ಚುನಾವಣೆಯನ್ನು ಮುಂದಕ್ಕೆ ಹಾಕಿಕೊಂಡು ಬರುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಮತ್ತಷ್ಟು ಮುಂದಕ್ಕೆ ಹಾಕಲು ಸಾಧ್ಯವಿಲ್ಲ. ಹೀಗಾಗಿ ಯಾವಾಗ ಬೇಕಾದರೂ ಚುನಾವಣೆ ದಿನಾಂಕ ಘೋಷಣೆ ಆಗಬಹುದು ಎಂದು ಜೆಡಿಎಸ್‌ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನ ಜೆಡಿಎಸ್‌ ಕಚೇರಿ ನಡೆದ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾತನಾಡಿದರು.

ಬೆಂಗಳೂರು, ಜು.06: ಯಾವುದೇ ಕ್ಷಣದಲ್ಲಿ ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆ (GBA Election) ಘೋಷಣೆ ಆಗಬಹುದು. ಹೀಗಾಗಿ ನಗರದ ಮುಖಂಡರು ಮತ್ತು ಕಾರ್ಯಕರ್ತರು ಮತ್ತಷ್ಟು ಬಿರುಸಿನಿಂದ ಸಂಘಟನೆ ಕೆಲಸ ಮಾಡಬೇಕು ಎಂದು ಜೆಡಿಎಸ್‌ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಕರೆ ನೀಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಗ್ರೇಟರ್ ಬೆಂಗಳೂರು ಐದು ವಿಭಾಗಗಳ ಅಧ್ಯಕ್ಷರು, ಎಲ್ಲಾ ಪದಾಧಿಕಾರಿಗಳು, ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಕರೆದು ಚರ್ಚಿಸಿದ ಅವರು, ರಾಜ್ಯ ಸರ್ಕಾರ ಮೇಲಿಂದ ಮೇಲೆ ಗ್ರೇಟರ್ ಬೆಂಗಳೂರು ಚುನಾವಣೆಯನ್ನು ಮುಂದಕ್ಕೆ ಹಾಕಿಕೊಂಡು ಬರುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಮತ್ತಷ್ಟು ಮುಂದಕ್ಕೆ ಹಾಕಲು ಸಾಧ್ಯವಿಲ್ಲ. ಹೀಗಾಗಿ ಯಾವಾಗ ಬೇಕಾದರೂ ಚುನಾವಣೆ ದಿನಾಂಕ ಘೋಷಣೆ ಆಗಬಹುದು ಎಂದು ಹೇಳಿದರು.

ಕೇವಲ ಟಿಕೆಟ್ ಬೇಕು ಎಂದು ಆಸೆ ಇಟ್ಟುಕೊಂಡಿದ್ದರೆ ಸಾಲದು. ನೀವು ಸ್ಪರ್ಧಿಸುವ ವಾರ್ಡ್‌ನಲ್ಲಿ ಪಕ್ಷದ ಸಂಘಟನೆ ಹೇಗಿದೆ ಎಂಬುದನ್ನು ಅರಿತುಕೊಳ್ಳಿ. ಪಕ್ಷದ ವಿಚಾರಗಳು, ಯೋಜನೆಗಳು ಹಾಗೂ ಮುಂದಿನ ಕಾರ್ಯಕ್ರಮಗಳ ಕುರಿತ ಮಾಹಿತಿಯು ಮನೆ-ಮನೆಗೂ ತಲುಪಬೇಕು. ವಾರ್ಡ್ ವಿಭಾಗದಲ್ಲಿ ಶ್ರಮಪಟ್ಟು ಕೆಲಸ ಮಾಡಿ ಎಂದು ಆಕಾಂಕ್ಷಿಗಳಿಗೆ ಸೂಚಿಸಿದರು.

ಮಹಿಳೆಯರಿಗೆ ಹೆಚ್ಚು ಅವಕಾಶ ನೀಡುವ ಉದ್ದೇಶವಿದೆ. ಆಡಳಿತ ಸಭೆಗಳಲ್ಲಿ ಮಹಿಳೆಯರ ಪಾಲುದಾರಿಕೆ ಹೆಚ್ಚು ಇರಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಉದ್ದೇಶ. ಈ ಹಿನ್ನಲೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಹೆಚ್ಚು ಉತ್ತೇಜನ ನೀಡುವುದು ಪಕ್ಷದ ಪ್ರಮುಖ ಧ್ಯೇಯವಾಗಿದೆ ಎಂದು ಹೇಳಿದರು.

ಈ ಬಾರಿ ಬೆಂಗಳೂರಿನ ಆಡಳಿತವು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್‌ಡಿಎ ಮೈತ್ರಿಕೂಟದ ತೆಕ್ಕೆಗೆ ಬರುವುದರಲ್ಲಿ ಯಾವುದೇ ಅನುಮಾನ ಇಲ್ಲ. ಹೀಗಾಗಿ ಮೈತ್ರಿ ಪಕ್ಷದ ಜತೆಯಾಗಿ ನಾವು ಕೆಲಸ ಮಾಡಬೇಕಾಗುತ್ತದೆ. ಪರಸ್ಪರ ಶಕ್ತಿ ಬಳಸಿಕೊಂಡು ಕಾಂಗ್ರೆಸ್ ಪಕ್ಷವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಒತ್ತಿ ಹೇಳಿದರು.

ಬೆಂಗಳೂರಿನಲ್ಲಿ ಎಸ್‌ಐಆರ್ ಪ್ರಕ್ರಿಯೆ ಶುರುವಾಗಿದೆ. ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷವು ತನ್ನ ಸರ್ಕಾರದ ಬಲವನ್ನು ದುರುಪಯೋಗ ಮಾಡಿಕೊಂಡು ಈ ಪ್ರಕ್ರಿಯೆಯನ್ನು ಹಾಳು ಮಾಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಹೀಗಾಗಿ ಟಿಕೆಟ್ ಆಕಾಂಕ್ಷಿಗಳು ಮತದಾರ ಪಟ್ಟಿ ಪರಿಷ್ಕರಣೆಯಲ್ಲಿ ಗಂಭೀರವಾಗಿ ತೊಡಗಿಕೊಳ್ಳಬೇಕು. ಅಕ್ರಮ ಮತಗಳು ಉಳಿದುಕೊಳ್ಳದಂತೆ ನಿಗಾ ವಹಿಸಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು. ‌

SIR in Karnataka: ರಾಜ್ಯ ಸರಕಾರದಿಂದ SIR ದುರುಪಯೋಗ; ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಜೆಡಿಎಸ್‌-ಬಿಜೆಪಿ ನಿಯೋಗ ದೂರು

ಸಭೆಯಲ್ಲಿ ರಾಜ್ಯ ಕೋರ್ ಕಮಿಟಿ ಅಧ್ಯಕ್ಷನ ಎಂ.ಕೃಷ್ಣಾರೆಡ್ಡಿ, ಲೋಕಸಭೆ ಸದಸ್ಯ ಎಂ. ಮಲ್ಲೇಶ್ ಬಾಬು, ಗ್ರೇಟರ್ ಬೆಂಗಳೂರು ಪಾಲಿಕೆ ಅಧ್ಯಕ್ಷ ಎಚ್ಎಂ ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಟಿ.ಎನ್. ಜವರಾಯಿಗೌಡ, ಮಾಜಿ ಶಾಸಕ ತಿಪ್ಪೇಸ್ವಾಮಿ, ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ರಾಜ್ಯ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಸೇರಿದಂತೆ ಐದು ವಿಭಾಗಗಳ ಅಧ್ಯಕ್ಷರು, ಇನ್ನಿತರ ಪ್ರಮುಖರು ಪಾಲ್ಗೊಂಡಿದ್ದರು.