ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Petrol, diesel prices hike: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಪ್ರಧಾನಿ ಮೋದಿ ರಾಜೀನಾಮೆಗೆ ಸಿಎಂ ಆಗ್ರಹ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಕಡಿಮೆಯಿದ್ದಾಗ ಅದರ ಲಾಭವನ್ನು ಮೋದಿ ಸರ್ಕಾರ ಎಂದಿಗೂ ಜನತೆಗೆ ಬಿಟ್ಟುಕೊಡಲೇ ಇಲ್ಲ. ಇನ್ನು ದರ ಏರಿಕೆಯಾದಾಗ ಅದರ ಸಂಪೂರ್ಣ ಭಾರವನ್ನು ಜನಸಾಮಾನ್ಯರ ಮೇಲೆ ಹೊರಿಸಿ ಕೈತೊಳೆದುಕೊಳ್ಳುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಪ್ರಧಾನಿ ಮೋದಿ ರಾಜೀನಾಮೆಗೆ ಸಿಎಂ ಆಗ್ರಹ

ಸಿಎಂ ಸಿದ್ದರಾಮಯ್ಯ ಮತ್ತು ಪ್ರಧಾನಿ ನರೇಂದ್ರ ಮೋದಿ. -

Prabhakara R
Prabhakara R May 15, 2026 5:51 PM

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ (Petrol, diesel prices hike) ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ. ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಸುವ ನಿರೀಕ್ಷೆ ಇತ್ತು.‌ ನಿರೀಕ್ಷೆಯಂತೆಯೇ ಹೆಚ್ಚಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದರ ಬಗ್ಗೆ ಬಿಜೆಪಿಯವರು ಟೀಕೆ ಮಾಡಿದ್ದರು. ಈಗ ಏನು ಪ್ರತಿಕ್ರಿಯೆ ಕೊಡುತ್ತಾರೆ ಎನ್ನುವುದನ್ನು ನೋಡಬೇಕು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಟೀಕಿಸಿದ್ದಾರೆ.

ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಅವರು, ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ಹಲವು ಬಾರಿ ಪೆಟ್ರೋಲ್ ಡೀಸೆಲ್ ದರಗಳನ್ನು ಹೆಚ್ಚಿಸಿದ್ದಾರೆ. ಈ ಬೆಲೆಯೇರಿಕೆ ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ವಿಶೇಷವಾಗಿ ಕಾರ್ಮಿಕರು, ರೈತರು, ಬಡವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಕೇಂದ್ರ ಸರ್ಕಾರದ ಈ ಬೆಲೆ ಏರಿಕೆಯ ಕ್ರಮವನ್ನು ನಮ್ಮ ಸರ್ಕಾರ ಖಂಡಿಸುವುದಲ್ಲದೇ, ಈ ನಿರ್ಣಯವನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸುತ್ತೇವೆ.

ಪ್ರಧಾನಿ ಮೋದಿಯವರ ಆಡಳಿತ ಪ್ರಾರಂಭವಾಗುವ ಮುಂಚೆ 413 ರೂ.ಗಳಿದ್ದ ಗೃಹಬಳಕೆಯ ಎಲ್‌ಪಿಜಿ ದರ, ಈಗ 1000 ರೂ.ಗಳನ್ನು ದಾಟಿದೆ. ಈ ಬೆಲೆಯೇರಿಕೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಹೆಚ್ಚಳಕ್ಕೂ ಕಾರಣವಾಗಲಿದೆ. ಎಲ್ ಪಿ ಜಿ ಪೂರೈಕೆ ವ್ಯತ್ಯಯವಾಗಿರುವ ನಡುವೆಯೇ ಬೆಲೆ ಏರಿಕೆಯು ಜನಜೀವನವನ್ನು ಇನ್ನಷ್ಟು ಅಸ್ತವ್ಯಸ್ತಗೊಳಿಸಲಿದೆ.

ರಾಜ್ಯದಲ್ಲಿ ಚುನಾವಣಾ ಆಯೋಗದಿಂದ ಎಸ್ ಐ ಆರ್ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಇದಕ್ಕೆ ಬೇಕಾದ ಸಿದ್ದತೆಯನ್ನು ಸರ್ಕಾರ ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.

ಮೋದಿಯವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕು

ಪೆಟ್ರೋಲ್‌, ಡೀಸೆಲ್‌ ದರ ತಲಾ 3 ರೂ. ಏರಿಕೆಯ ಜನವಿರೋಧಿ ನಡೆಯನ್ನು ನಾನು ಕಠಿಣವಾಗಿ ವಿರೋಧಿಸುತ್ತಿದ್ದೇನೆ. ತಕ್ಷಣವೇ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತಿದ್ದೇನೆ. ನಿರಂತರವಾಗಿ ಬೀಳುತ್ತಿರುವ ರೂಪಾಯಿ ಮೌಲ್ಯ, ಆರ್ಥಿಕ ನಿರ್ವಹಣೆಯ ವೈಫಲ್ಯ ಮತ್ತು ಸಾಮಾನ್ಯ ನಾಗರಿಕರ ಕುಟುಂಬಗಳನ್ನು ಸಂಕಷ್ಟಕ್ಕೆ ತಳ್ಳುತ್ತಿರುವುದರ ಹೊಣೆಯನ್ನು ಹೊತ್ತು ನರೇಂದ್ರ ಮೋದಿಯವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ತನ್ನ ಆಡಳಿತ ವೈಫಲ್ಯಕ್ಕಾಗಿ ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳನ್ನು ತಲಾ 3 ರೂ. ಏರಿಕೆ ಮಾಡುವ ಮೂಲಕ ದೇಶದ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದೆ. ಇದು ಬೆಲೆ ಏರಿಕೆಯಲ್ಲ, ಭಾರತದ ಸಾಮಾನ್ಯ ಜನರ ದೈನಂದಿನ ಬದುಕಿನ ಮೇಲೆ ನಡೆಸಿದ ನೇರ ದಾಳಿಯಾಗಿದೆ. ನಾವು ಅಂದುಕೊಂಡಂತೆ ಕೇಂದ್ರ ಸರ್ಕಾರವು ತನ್ನ ವಿದೇಶಾಂಗ ನೀತಿಯ ವೈಫಲ್ಯ, ಕಳಪೆ ಆರ್ಥಿಕ ನಿರ್ವಹಣೆ ಮತ್ತು ಅಜಾಗರೂಕ ಹಣದುಬ್ಬರದ ನಿರ್ವಹಣೆಯ ಪರಿಣಾಮಗಳನ್ನು ಬಲವಂತವಾಗಿ ದೇಶದ ಜನತೆಯ ತಲೆಯ ಮೇಲೆ ಹೇರುತ್ತಿದೆ. ದೇಶದ ಜನತೆಯ ಹಿತಾಸಕ್ತಿಗಳನ್ನು ಕಾಪಾಡುವ ಬದಲು ಅವರಿಂದಲೇ ಹಣ ಕಿತ್ತುಕೊಂಡು ತನ್ನ ವೈಫಲ್ಯದ ನಷ್ಟ ಭರಿಸುತ್ತಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀ. ಒಂದಕ್ಕೆ 106 ರೂ. ದಾಟಿದೆ. ಡೀಸೆಲ್‌ ದರವು 94 ರೂ. ಆಗಿದೆ. ಈ ಏರಿಕೆಯು ಕೇವಲ ಬಂಕ್‌ಗಳಿಗೆ ಸೀಮಿತಗೊಳ್ಳುವುದಿಲ್ಲ. ಇದರೊಂದಿಗೆ ಸಾರಿಗೆ ವೆಚ್ಚ, ತರಕಾರಿ, ಹಣ್ಣು, ಹಾಲು, ಸೇರಿದಂತೆ ಪ್ರತಿಯೊಂದು ದಿನಬಳಕೆ ವಸ್ತುಗಳ ದರ ಏರಿಕೆಯಾಗುತ್ತದೆ. ಇದರಿಂದ ಕಾರ್ಮಿಕರು, ರೈತರು, ಸಣ್ಣ ವ್ಯಾಪಾರಿಗಳು, ಮನೆಯ ಜವಾಬ್ದಾರಿ ಹೊತ್ತ ಮಹಿಳೆಯರು ಹಾಗೂ ಮಧ್ಯಮ ವರ್ಗದವರು ದೈನಂದಿನ ಬದುಕು ನಡೆಸುವುದು ಮತ್ತಷ್ಟು ದುಸ್ತರವಾಗಲಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಕಡಿಮೆಯಿದ್ದಾಗ ಅದರ ಲಾಭವನ್ನು ಮೋದಿ ಸರ್ಕಾರ ಎಂದಿಗೂ ಜನತೆಗೆ ಬಿಟ್ಟುಕೊಡಲೇ ಇಲ್ಲ. ಆಗಲೂ ಜನತೆಯಿಂದ ದೊಡ್ಡ ಮೊತ್ತದ ತೆರಿಗೆಯನ್ನು ಸಂಗ್ರಹಿಸಿ ತನ್ನ ಬೊಕ್ಕಸವನ್ನು ತುಂಬಿಕೊಂಡಿತ್ತು. ಇನ್ನು ದರ ಏರಿಕೆಯಾದಾಗ ಅದರ ಸಂಪೂರ್ಣ ಭಾರವನ್ನು ಜನಸಾಮಾನ್ಯರ ಮೇಲೆ ಹೊರಿಸಿ ಕೈತೊಳೆದುಕೊಳ್ಳುತ್ತಿದೆ. ಇದು ಆಡಳಿತ ನಡೆಸುವ ಕ್ರಮವಲ್ಲ, ಇದು ದೇಶದ ಜನತೆಯ ಮೇಲಿನ ಘೋರ ಶೋಷಣೆಯಾಗಿದೆ.

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆ; ಬೆಂಗಳೂರಿನಲ್ಲಿ ಎಷ್ಟಿದೆ ಇಂದಿನ ಬೆಲೆ?

ಮೋದಿ ಸರ್ಕಾರವು ಹಣದುಬ್ಬರ ನಿಯಂತ್ರಣ ಮಾಡುವಲ್ಲಿ, ಡಾಲರ್‌ ಎದುರು ರೂಪಾಯಿ ಮೌಲ್ಯದ ಕುಸಿತವನ್ನು ತಡೆಯುವಲ್ಲಿ, ದೇಶದ ಆರ್ಥಿಕ ನಿರ್ವಹಣೆಯಲ್ಲಿ ಹಾಗೂ ಒಟ್ಟಾರೆ ಸಾಮಾನ್ಯ ಜನರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಪ್ರಧಾನಿ ನರೇಂದ್ರ ಮೋದಿ ತನ್ನ ಉದ್ಯಮಿ ಮಿತ್ರರ ರಕ್ಷಣೆಗೆ ತೋರುವ ಆತುರ, ಕಾಳಜಿ ಹಾಗೂ ಬದ್ಧತೆಯಲ್ಲಿ ಸ್ವಲ್ಪವಾದರೂ ದೇಶದ ಜನತೆಯ ಮೇಲೆ ತೋರಿಸಲಿ ಎಂಬುದು ನಮ್ಮ ಮನವಿ ಎಂದು ಆಗ್ರಹಿಸಿದರು.