ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ (Karnataka Cabinet expansion) ಸಂಬಂಧಿಸಿ ನೂತನ ಸಚಿವರ ಅಂತಿಮ ಪಟ್ಟಿ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಇಂದು ಸಂಜೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತ ನಿಗದಿಯಾಗಿದೆ. ಆದರೆ, ಈ ನಡುವೆ ತಮಗೆ ಕ್ಯಾಬಿನೆಟ್‌ನಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಪಾಟೀಲ್ (MLA YASHWANT RAI GOUDA PATIL) ಅವರು ಸಚಿವ ಸ್ಥಾನ ಸಿಗದಿದ್ದಕ್ಕೆ ತೀವ್ರ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೇ ರಾಜೀನಾಮೆ ನೀಡಿದ್ದಾರೆ. ಹಿರಿಯ ನಾಯಕರಾಗಿದ್ದರೂ ತಮ್ಮನ್ನು ಸಂಪುಟದಿಂದ ಹೊರಗಿಟ್ಟಿರುವುದು ಅವರಿಗೆ ತೀವ್ರ ನಿರಾಸೆ ಮೂಡಿಸಿದೆ. ಹೀಗಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ರಾಜೀನಾಮೆಗೆ ಮುಂದಾದ ಬೇಳೂರು ಗೋಪಾಲಕೃಷ್ಣ
ಇನ್ನು ಶಾಸಕ ಯಶವಂತರಾಯ ಗೌಡ ಪಾಟೀಲ್ ರಾಜೀನಾಮೆ ಬೆನ್ನಲ್ಲೇ ಇವರ ಹಾದಿಯಲ್ಲೇ ಇದೀಗ ಮತ್ತೊಬ್ಬ ಹಿರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರೂ ಕೂಡ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಈ ಕುರಿತು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಬೇಳೂರು ಗೋಪಾಲಕೃಷ್ಣ, ನನಗೆ ಈ ರೀತಿ ಮೋಸವಾಗುತ್ತದೆ ಎಂದು ಅಂದಾಜಿಸಿರಲಿಲ್ಲ. ಹಿಂದುಳಿದ ವರ್ಗದಿಂದ ಬಂದಿರುವ ನನಗೆ ಸ್ಥಾನಮಾನ ನೀಡದಿರುವುದರ ಹಿಂದಿನ ಉದ್ದೇಶವೇನು?" ಎಂದು ಪ್ರಶ್ನಿಸಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ತಮ್ಮ ಶಾಸಕ ಸ್ಥಾನದ ಜೊತೆಗೆ ನಿಗಮ ಮಂಡಳಿ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.