ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಮಾಜದ ಗುಣಾತ್ಮಕ ಪರಿವರ್ತನೆಗೆ ಕನಕದಾಸರ ತತ್ವಾದರ್ಶಗಳು ದಾರಿದೀಪ: ಸಚಿವ ಬಸವರಾಜ ರಾಯರಡ್ಡಿ

Gadag News: ದೇಶ ಕಂಡ ಶ್ರೇಷ್ಠ ದಾರ್ಶನಿಕರಲ್ಲಿ ಭಕ್ತ ಕನಕದಾಸರು ಪ್ರಮುಖರಾಗಿದ್ದಾರೆ. ಅವರನ್ನು ಕೇವಲ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತಗೊಳಿಸಬಾರದು. ಕನಕದಾಸರು ಇಡೀ ದೇಶದ ಆಸ್ತಿಯಾಗಿದ್ದು, ಅವರ ವಿಚಾರಧಾರೆಗಳು ಎಲ್ಲ ಸಮುದಾಯಗಳಿಗೂ ಮಾರ್ಗದರ್ಶಿಯಾಗಿವೆ ಎಂಬುದನ್ನು ನಾವೆಲ್ಲರೂ ಅರಿಯಬೇಕು ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.

ಗದಗ, ನ.27: ಸಮಾಜದಲ್ಲಿನ ಅಸಮಾನತೆ, ಜಾತಿ ವ್ಯವಸ್ಥೆ ಹಾಗೂ ಮೂಢನಂಬಿಕೆಗಳನ್ನು ಹೋಗಲಾಡಿಸಿ ಸಮಾನತೆ ಮತ್ತು ಸಾಮರಸ್ಯದ ಸಮಾಜ ನಿರ್ಮಾಣ ಮಾಡುವಲ್ಲಿ ಭಕ್ತಶ್ರೇಷ್ಠ ಕನಕದಾಸರ ತತ್ವ, ಸಿದ್ಧಾಂತ ಹಾಗೂ ಸಂದೇಶಗಳು ಇಂದಿಗೂ ದಾರಿದೀಪವಾಗಿವೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಹೇಳಿದರು. ನಗರದ (Gadag News) ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶ ಕಂಡ ಶ್ರೇಷ್ಠ ದಾರ್ಶನಿಕರಲ್ಲಿ ಭಕ್ತ ಕನಕದಾಸರು ಪ್ರಮುಖರಾಗಿದ್ದಾರೆ. ಅವರನ್ನು ಕೇವಲ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತಗೊಳಿಸಬಾರದು. ಕನಕದಾಸರು ಇಡೀ ದೇಶದ ಆಸ್ತಿಯಾಗಿದ್ದು, ಅವರ ವಿಚಾರಧಾರೆಗಳು ಎಲ್ಲ ಸಮುದಾಯಗಳಿಗೂ ಮಾರ್ಗದರ್ಶಿಯಾಗಿವೆ ಎಂಬುದನ್ನು ನಾವೆಲ್ಲರೂ ಅರಿಯಬೇಕು ಎಂದರು.

ಸಮಾಜದಲ್ಲಿ ಮೇಲು-ಕೀಳು ಎಂಬ ಶ್ರೇಣೀಕೃತ ವ್ಯವಸ್ಥೆಯಿಂದ ಅಸಮಾನತೆ ಮತ್ತು ಮೂಢನಂಬಿಕೆಗಳು ಬೆಳೆದು ಬಂದಿವೆ. ಇಂತಹ ವ್ಯವಸ್ಥೆಯನ್ನು ತೊಡೆದುಹಾಕಿ ಸಮಸಮಾಜ ನಿರ್ಮಿಸಲು ಕಾಲಕಾಲಕ್ಕೆ ಸಂತರು, ದಾರ್ಶನಿಕರು ಹಾಗೂ ಮಹನೀಯರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಶ್ರಮಿಸಿದ್ದಾರೆ. ಕನಕದಾಸರು ಭಕ್ತಿ ಪಂಥದ ಮೂಲಕ ಸಮಾನತೆಯ ಸಂದೇಶ ಸಾರಿದ ಮಹಾನ್ ಚೇತನರಾಗಿದ್ದಾರೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಗದಗ ಜಿಲ್ಲೆಯಲ್ಲಿ ಎಲ್ಲ ಮಹನೀಯರ ಜಯಂತಿಗಳನ್ನು ಎಲ್ಲ ಸಮುದಾಯದವರು ಒಗ್ಗೂಡಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಜಯಂತಿಗಳು ಕೇವಲ ಆಚರಣೆಗಳಿಗೆ ಸೀಮಿತವಾಗದೆ, ಮಹನೀಯರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ಮತ್ತು ಬದುಕಿನಲ್ಲಿ ಅಳವಡಿಸಿಕೊಳ್ಳುವ ವೇದಿಕೆಗಳಾಗಬೇಕು ಎಂಬ ಉದ್ದೇಶದಿಂದ ಅರ್ಥಪೂರ್ಣವಾಗಿ ಆಚರಿಸಲು ಸೂಚಿಸಲಾಗಿತ್ತು. ಅದರಂತೆ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಕಾರ್ಯಕ್ರಮ ನಡೆಯುತ್ತಿರುವುದು ಸಂತಸ ತಂದಿದೆ ಎಂದರು.

ಈ ವೇಳೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಪಕ್ಕೀರಪ್ಪ ಹೆಬಸೂರ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಗಣ್ಯರು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ, ಜಿಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ರವಿ ದಂಡಿನ, ರುದ್ರಣ್ಣ ಗುಳಗುಳಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಪಂ ಸಿಇಒ ಮುಕುಲ್ ಜೈನ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಸಿ.ಅರ್.ಮುಂಡರಗಿ ಸೇರಿ ಇತರರು ಇದ್ದರು. ಪ್ರೊ. ಬಾಹುಬಲಿ ಜೈನ್ ನಿರೂಪಿಸಿದರು. ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಸ್ವಾಗತಿಸಿದರು.